ಬೆಂಗಳೂರು :ಓಲಾ ಕ್ಯಾಬ್ ಚಾಲಕ ಲೈಂಗಿಕ ಕಿರುಕುಳ ನೀಡಿದ ಆರೋಪ ಸಂಬಂಧ ಯುವತಿಯೊಬ್ಬರು ಆರು ವರ್ಷಗಳ ಹಿಂದೆ ದೂರು ನೀಡಿದ್ದರೂ ಕ್ರಮಕೈಗೊಳ್ಳದ ರಾಜ್ಯ ಸರ್ಕಾರದ ವಿರುದ್ಧ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಅಲ್ಲದೇ, ಮುಂದೆ ಬರುವುದನ್ನು ಎದುರಿಸಲು ಸಾರಿಗೆ ಇಲಾಖೆಯ ಅಧಿಕಾರಿಗಳಿಗೆ ಸಿದ್ಧವಾಗಿರುವಂತೆ ಎಚ್ಚರಿಕೆ ನೀಡಿದೆ.
ಕೆಲಸದ ಸ್ಥಳದಲ್ಲಿ ಮಹಿಳೆಯರಿಗೆ ಲೈಂಗಿಕ ಕಿರುಕುಳ (ನಿಷೇಧ, ತಡೆ ಮತ್ತು ಪರಿಹಾರ) ಕಾಯ್ದೆ 2013ರ ಸೆಕ್ಷನ್ಗಳ ಅನ್ವಯ ಓಲಾದ ಮಾತೃಸಂಸ್ಥೆ ಎಎನ್ಐ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ನ ಆಂತರಿಕ ದೂರು ಸಮಿತಿಗೆ 2018ರ ಸೆಪ್ಟೆಂಬರ್ 30ರಂದು ಸಂತ್ರಸ್ತೆ ದೂರು ನೀಡಿದ್ದರು. ಈ ದೂರಿನ ತನಿಖೆ ನಡೆಸಲು ನಿರ್ದೇಶಿಸುವಂತೆ ಕೋರಿ 22 ವರ್ಷದ ಯುವತಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿದ ನ್ಯಾಯಮೂರ್ತಿ ಎಂಜಿಎಸ್ ಕಮಲ್ ಅವರ ಏಕಸದಸ್ಯ ಪೀಠ ಆದೇಶ ಕಾಯ್ದಿರಿಸಿದೆ.
ಅಗ್ರಿಗೇಟರ್ ನಿಯಮಗಳ ಅನುಪಾಲನೆ ಜವಾಬ್ದಾರಿ ಹೊತ್ತಿರುವ ಸಾರಿಗೆ ಪ್ರಾಧಿಕಾರದ ಅಧಿಕಾರಿಯ ಮಾಹಿತಿಯನ್ನು ಒಳಗೊಂಡು, ಪ್ರಕರಣ ಆರಂಭವಾದಾಗಿನಿಂದ ಇಲ್ಲಿಯವರೆಗೆ ಏನೆಲ್ಲಾ ಕ್ರಮ ಕೈಗೊಳ್ಳಲಾಗಿದೆ ಎಂಬ ಕುರಿತ ಪ್ರಮಾಣಪತ್ರ ಸಲ್ಲಿಸುವಂತೆ ಕಳೆದ ವಿಚಾರಣೆಯಲ್ಲಿ ಸರ್ಕಾರಕ್ಕೆ ನ್ಯಾಯಾಲಯವು ಆದೇಶಿಸಿತ್ತು. ಆದರೆ, ಈವರೆಗೂ ವಿಚಾರಣೆಯ ಸಂದರ್ಭದಲ್ಲಿ ಪ್ರಕರಣ ಸಂಬಂಧ ಯಾವುದೇ ಮಾಹಿತಿ ಇಲ್ಲವಾದುದರಿಂದ ಸರ್ಕಾರದ ವಿರುದ್ಧ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿತು.
ಯುವತಿಯ ಮೇಲೆ ಓಲಾ ಚಾಲಕ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆಯನ್ನು ನಿಯಮದ ಪ್ರಕಾರ ಓಲಾ ಸಂಸ್ಥೆಯು ಸರ್ಕಾರದ ಗಮನಕ್ಕೆ ತಂದಿಲ್ಲ ಎಂದು ನೀವು ಸುಮ್ಮನೇ ಕುಳಿತಿದ್ದೀರಾ?, ನೀವು ಏನು ಮಾಡಿದ್ದೀರಿ?, ಈ ಪ್ರಶ್ನೆ ಕೇಳುತ್ತಿದ್ದೇವೆ ಎಂದರೆ ನಾವು ಉತ್ತಮ ಉತ್ತರದ ನಿರೀಕ್ಷೆಯಲ್ಲಿದ್ದೇವೆ ಎಂದರ್ಥ. ಇದು ಕಣ್ಣೊರೆಸುವ ತಂತ್ರ ಬೇಡ ಎಂದು ಪೀಠ ಹೇಳಿತು. ಈ ವೇಳೆ ಸರ್ಕಾರದ ಪರ ವಕೀಲರು ಅಗ್ರಿಗೇಟರ್ ನಿಯಮಗಳು ಬಂದ ಮೇಲೆ ಏನೆಲ್ಲಾ ಕ್ರಮ ಕೈಗೊಂಡಿದ್ದೇವೆ ಎಂದು ಹೇಳಿದ್ದೇವೆ. ಈ ಸುರಕ್ಷತಾ ಕ್ರಮಕೈಗೊಂಡಿದ್ದೇವೆ ಎಂಬುದನ್ನು ಪೀಠಕ್ಕೆ ತಿಳಿಸುತ್ತಿದ್ದೇವೆ ಎಂದು ವಿವರಿಸಿದರು.