ಬೆಂಗಳೂರು: ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ಆರೋಪಿ ಬಗ್ಗೆ ಸುಳಿವು ನೀಡಿದವರಿಗೆ 10 ಲಕ್ಷ ನಗದು ಬಹುಮಾನ ನೀಡುವುದಾಗಿ ಘೋಷಿಸಿದ ಬೆನ್ನಲ್ಲೇ, ತನಿಖೆ ನಡೆಸುತ್ತಿರುವ ಪೊಲೀಸರಿಗೆ ಪ್ರಕರಣದಲ್ಲಿ ಪಾಸಿಟಿವ್ ಲೀಡ್ ಸಿಕ್ಕಿದ್ದು, ಆರೋಪಿಯ ಹತ್ತಿರಕ್ಕೆ ಹೋಗಿದ್ದು ಶೀಘ್ರದಲ್ಲೇ ಬಂಧಿಸುವ ವಿಶ್ವಾಸವನ್ನು ಗೃಹ ಸಚಿವ ಜಿ. ಪರಮೇಶ್ವರ್ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮಾತನಾಡಿರುವ ಅವರು, ಪ್ರಕರಣದ ಸಂಬಂಧ ಸಿಸಿಬಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಪ್ರತ್ಯೇಕವಾಗಿ ಎನ್ಐಎ ಕೂಡ ತನಿಖೆ ನಡೆಸುತ್ತಿದೆ. ಪ್ರಕರಣದ ಆರೋಪಿಯನ್ನು ಶೀಘ್ರದಲ್ಲೇ ಬಂಧಿಸಲಾಗುವುದು. ಬಾಂಬ್ ಸ್ಫೋಟ ಸೇರಿದಂತೆ ಕಾನೂನುಬಾಹಿರ ಚಟುವಟಿಕೆ ಕುರಿತು ರಾಜ್ಯ ಗುಪ್ತಚರ ಇಲಾಖೆಯು ಮಾಹಿತಿ ಕಲೆ ಹಾಕಿದಂತೆ ಎನ್ಐಎ, ಐಬಿ ಸಹ ಅವರದ್ದೇ ಆದ ನೆಟ್ವರ್ಕ್ನಲ್ಲಿ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಎಷ್ಟೋ ಬಾರಿ ಕೇಂದ್ರ ತನಿಖಾ ಸಂಸ್ಥೆಗಳು ನಮಗೆ ಮಾಹಿತಿ ಹಂಚಿಕೊಂಡಿವೆ. ಅದರಂತೆ ತನಿಖಾ ತಂಡಕ್ಕೆ ಸಿಕ್ಕಿರುವ ಮಾಹಿತಿ ಆಧಾರದ ಮೇರೆಗೆ ತನಿಖೆ ನಡೆಸಲಾಗುತ್ತಿದೆ ಎಂದರು.