ಬೆಂಗಳೂರು:ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರದ ಬಳಿಕ ಹಿಂಗಾರಿನ ಆರ್ಭಟ ಜೋರಾಗಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ, ಮುಂದಿನ 24 ಗಂಟೆಗಳ ಕಾಲ ಕೆಲವೆಡೆ ಆರೆಂಜ್ ಮತ್ತು ಇನ್ನು ಕೆಲ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಿದೆ.
ಯಾವ ಜಿಲ್ಲೆಗೆ ಆರೆಂಜ್, ಯೆಲ್ಲೋ ಅಲರ್ಟ್? ಚಾಮರಾಜನಗರ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದ್ದರೆ, ದಕ್ಷಿಣ ಕನ್ನಡ, ಉಡುಪಿ, ಹಾಸನ, ಮಂಡ್ಯ, ಮೈಸೂರು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಕೊಡಲಾಗಿದೆ.
ಇಂದು ಮತ್ತು ನಾಳೆ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಚಿಕ್ಕಮಗಳೂರು, ಕೊಡಗು, ಚಾಮರಾಜನಗರ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ. ಇನ್ನು ಶಿವಮೊಗ್ಗ, ಮೈಸೂರು, ಮಂಡ್ಯ, ಹಾಸನ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಉಳಿದಂತೆ ಉತ್ತರ ಕನ್ನಡ ಜಿಲ್ಲೆ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಹಾಗು ಉಳಿದ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.
ಸಿಲಿಕಾನ್ ಸಿಟಿಯಲ್ಲಿ ಮೋಡ ಕವಿದ ವಾತಾವರಣ:ಬೆಂಗಳೂರು ನಗರ ಮತ್ತು ಸುತ್ತಮುತ್ತಲೀನ ಸ್ಥಳಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದೆ. ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗುಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 30 ಮತ್ತು 21 ಡಿಗ್ರಿ ದಾಖಲಾಗುವ ಸಾಧ್ಯತೆ ಇದೆ ಎಂದು ಇಲಾಖೆ ಹೇಳಿದೆ.
ಒಂದು ಚಂಡಮಾರುತದ ಪರಿಚಲನೆಯು ದಕ್ಷಿಣ ಕೇರಳ ಮತ್ತು ನೆರೆಹೊರೆಯಲ್ಲಿದ್ದು, ಸರಾಸರಿ ಸಮುದ್ರ ಮಟ್ಟದಿಂದ 1.5 ಕಿ.ಮೀ ಎತ್ತರದಲ್ಲಿದೆ. ಇನ್ನೊಂದೆಡೆ, ನೈಋತ್ಯ ಬಂಗಾಳ ಕೊಲ್ಲಿಯಿಂದ ದಕ್ಷಿಣ ತಮಿಳುನಾಡಿನ ಮೂಲಕ ಲಕ್ಷದ್ವೀಪದವರೆಗೆ ಒಂದು ಟ್ರಫ್ ಸಾಗುತ್ತಿದೆ. ಇದು 1.5 ಕಿ.ಮೀಯಿಂದ 5.8 ಕಿ.ಮೀ ಎತ್ತರದಲ್ಲಿದೆ. ಇದರಿಂದ ಮಳೆ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಸಕ್ರಿಯವಾಗಿದೆ. ನಿನ್ನೆಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಅತಿ ಹೆಚ್ಚು 11 ಸೆ.ಮೀ ಮಳೆ ದಾಖಲಾಗಿದೆ. ಕೊಡಗು ಜಿಲ್ಲೆಯ ನಾಪ್ಲೋಕುವಿನಲ್ಲಿ 9 ಸೆ.ಮೀ ಮಳೆ ಸುರಿದಿದೆ ಎಂದು ಬೆಂಗಳೂರು ಹವಾಮಾನ ಇಲಾಖೆಯ ಪ್ರಾದೇಶಿಕ ನಿರ್ದೇಶಕ ಸಿ.ಎಸ್.ಪಾಟೀಲ್ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಉಡುಪಿಯಲ್ಲಿ ಮೇಘ ಸ್ಫೋಟ: ದಿಢೀರ್ ಪ್ರವಾಹದಿಂದ ಮನೆಗಳಿಗೆ ಹಾನಿ, ವೃದ್ಧೆ ಸಾವು - Heavy Rain In Udupi