ಬೆಂಗಳೂರು:ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಬಂಧಿತನಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ನಗರದ ಬೌರಿಂಗ್ ಆಸ್ಪತ್ರೆಯಲ್ಲಿ ಪುರುಷತ್ವ ಪರೀಕ್ಷೆ ನಡೆಸಲಾಗಿದೆ.
ನ್ಯಾಯಾಲಯದ ಅನುಮತಿ ಪಡೆದ ಎಸ್‌ಐಟಿ ಅಧಿಕಾರಿಗಳು ಬುಧವಾರ ಬೆಳಗ್ಗೆ 11 ಗಂಟೆಗೆ ಬೌರಿಂಗ್ ಆಸ್ಪತ್ರೆಗೆ ಕರೆದೊಯ್ದಿದ್ದರು. ಬೌರಿಂಗ್ ಆಸ್ಪತ್ರೆ ಆವರಣದಲ್ಲಿರುವ ಅಟಲ್ ಬಿಹಾರಿ ವೈದ್ಯಕೀಯ ಸಂಶೋಧನಾ ಸಂಸ್ಥೆಯಲ್ಲಿ ಪ್ರಜ್ವಲ್ಗೆ ತಜ್ಞ ವೈದ್ಯರ ತಂಡದಿಂದ ವೈದ್ಯಕೀಯ ಪರೀಕ್ಷೆ ನಡೆದಿದೆ. ವೀರ್ಯ ಮತ್ತು ರಕ್ತ ಮಾದರಿ ಸಂಗ್ರಹ ಮತ್ತು ಲೈಂಗಿಕ ಕ್ರಿಯೆ ನಡೆಸಲು ಸಾಮರ್ಥ್ಯ ಹೊಂದಿರುವ ಬಗ್ಗೆ ಖಚಿತಪಡಿಸಿಕೊಳ್ಳಲು ಈ ಪರೀಕ್ಷೆಯನ್ನು ನಡೆಸಲಾಗಿದೆ. ತಪಾಸಣೆ ಮುಗಿದ ಬಳಿಕ ಸಂಜೆ ಮತ್ತೆ ಸಿಐಡಿ ಕಚೇರಿಗೆ ಕರೆ ತಂದು ಎಸ್‌ಐಟಿ ವಿಚಾರಣೆಗೆ ಒಳಪಡಿಸಿದೆ. ಇನ್ನೊಂದು ವಾರದಲ್ಲಿ ವರದಿ ಎಸ್‌ಐಟಿ ಕೈ ಸೇರಲಿದೆ ಎಂದು ಕೆಲ ಮೂಲಗಳಿಂದ ತಿಳಿದು ಬಂದಿದೆ.
ಇದಕ್ಕೂ ಮುನ್ನ ಎರಡು ದಿನಗಳ ಹಿಂದೆ ಪುರುಷತ್ವ ಪರೀಕ್ಷೆ ಸಲುವಾಗಿ ಬೌರಿಂಗ್ ಆಸ್ಪತ್ರೆಗೆ ಪ್ರಜ್ವಲ್ ರೇವಣ್ಣನನ್ನು ಎಸ್‌ಐಟಿ ಕರೆದುಕೊಂಡು ಹೋಗಿತ್ತು. ಆಗ ಕೆಲ ವೈದ್ಯಕೀಯ ಪರೀಕ್ಷೆಗಳಿಗೆ ಕಾನೂನು ತೊಡಕಿನ ಬಗ್ಗೆ ವೈದ್ಯರು ತಿಳಿಸಿದ್ದರು. ಇದರಿಂದ ನ್ಯಾಯಾಲಯದ ಅನುಮತಿ ಪಡೆದು ಎಸ್‌ಐಟಿ ನಿನ್ನೆ ಅವರನ್ನು ಮತ್ತೆ ಆಸ್ಪತ್ರೆಗೆ ಕರೆದೊಯ್ದಿತ್ತು. ನ್ಯಾಯಾಲಯದ ಸಮ್ಮತಿ ಹಿನ್ನೆಲೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ತಜ್ಞ ವೈದ್ಯರ ತಂಡವನ್ನು ಬೌರಿಂಗ್ ಆಸ್ಪತ್ರೆ ಮುಖ್ಯಸ್ಥರು ರಚಿಸಿದ್ದರು.