ಬೆಂಗಳೂರು: ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಮೇಲಿನ ಲೈಂಗಿಕ ಹಗರಣ ಪ್ರಕರಣದ ಕುರಿತಾದ ಪೆನ್‌ಡ್ರೈವ್‌ಗಳನ್ನು ಹಂಚಿಕೆ ಮಾಡಿದ ಆರೋಪದ ಸಂಬಂಧ ದಾಖಲಾಗಿರುವ ಪ್ರಕರಣ ರದ್ದು ಕೋರಿ ಹೈಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿಯನ್ನು ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಹಿಂಪಡೆದರು.
ಈ ಸಂಬಂಧ ವಿಚಾರಣೆ ವೇಳೆ ಪ್ರೀತಂ ಗೌಡ ಪರವಾಗಿ ವಕಾಲತ್ತು ಹಾಕಿದ್ದ ಸಂದೀಪ್ ಪಾಟೀಲ್, ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠದ ಮುಂದೆ ಅರ್ಜಿ ಹಿಂಪಡೆಯುವ ಕುರಿತು ಮೆಮೊ ಸಲ್ಲಿಕೆ ಮನವಿ ಮಾಡಿದರು. ಇದನ್ನು ಪರಿಗಣಿಸಿದ ನ್ಯಾಯಾಲಯ, ಪ್ರಕರಣದಲ್ಲಿ ಆರೋಪ ಪಟ್ಟಿ ಸಲ್ಲಿಸಿದರೆ ಅದನ್ನು ಪ್ರಶ್ನಿಸುವ ಸ್ವಾತಂತ್ರ್ಯವನ್ನು ಮುಕ್ತವಾಗಿರಿಸಿ, ಅರ್ಜಿಯನ್ನು ಇತ್ಯರ್ಥಪಡಿಸಲಾಗಿದೆ ಎಂದು ಆದೇಶಿಸಿತು.