ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ತಿನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪಚುನಾವಣೆಯ ನಿಮಿತ್ತ ನಾಳೆ ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12.00 ಗಂಟೆಯವರೆಗೆ ಬೆಂಗಳೂರು ನಗರ ಜಿಲ್ಲೆಯ ವ್ಯಾಪ್ತಿಯಲ್ಲಿ ಶಾಂತತೆಗೆ ಭಂಗ ಉಂಟು ಮಾಡುವುದು, ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತರುವುದು ಹಾಗೂ ಇತರೆ ಅಹಿತರ ಘಟಣೆಗಳು ನಡೆಯುವ ಸಂಭವನೀಯತೆಗಳಿವೆ. ಇದನ್ನು ತಡೆಗಟ್ಟುವುದು ಹಾಗೂ ಮತ ಎಣಿಕೆ ಪಾವಿತ್ಯತೆಯನ್ನು ಕಾಪಾಡುವ ಹಿತದೃಷ್ಟಿಯಿಂದ ದಂಡ ಪ್ರಕ್ರಿಯ ಸಂಹಿತೆ 1973 ಕಲಂ 144 ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾದಂಡಾಧಿಕಾರಿ ಕೆ.ಎ. ದಯಾನಂದ್ ಆದೇಶ ಹೊರಡಿಸಿದ್ದಾರೆ.
ಬೆಂಗಳೂರು ನಗರ ಜಿಲ್ಲೆಯ ವ್ಯಾಪ್ತಿಯಲ್ಲಿ (ಪೊಲೀಸ್ ಕಮೀಷನರೇಟ್ ವ್ಯಾಪ್ತಿಯನ್ನು ಹೊರತುಪಡಿಸಿ) ಐದಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು, ಮರೆವಣಿಗೆ ಹಾಗೂ ಸಭೆ ಸಮಾರಂಭ ಜರುಗಿಸುವುದನ್ನು ನಿಷೇಧಿಸಿದೆ. ಚುನಾವಣಾ ಅಭ್ಯರ್ಥಿ ಅಥವಾ ಅವರ ಬೆಂಬಲಿಗರು ಸೇರಿ ಐದು ಜನರಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಸೇರುವಂತಿಲ್ಲ. ಶಸ್ತ್ರ, ಬಡಿಗೆ, ಭರ್ಚಿ, ಖಡ್ಗ, ಗದೆ, ಬಂದೂಕು, ಚೂರಿ, ಲಾಠಿ, ದೊಣ್ಣೆ, ಚಾಕು, ಅಥವಾ ದೇಹಕ್ಕೆ ಅಪಾಯವನ್ನುಂಟು ಮಾಡಬಹುದಾದ ಯಾವುದೇ ಮಾರಕಾಸ್ತ್ರವನ್ನು ಬಳಸುವಂತಿಲ್ಲ. ಈ ಪ್ರದೇಶದಲ್ಲಿ ಬರುವಂತಹ ಜೆರಾಕ್ಸ್ ಅಂಗಡಿ, ಸೈಬರ್ ಕೆಫೆ, ಬುಕ್ ಸ್ಟಾಲ್ಗಳನ್ನು ನಿರ್ಬಂಧಿಸಿದೆ. ಕಲ್ಲುಗಳನ್ನು ಕ್ಷಾರಪದಾರ್ಥ, ಸ್ಫೋಟಕ ವಸ್ತುಗಳು ಯಾವುದೇ ದಾಹಕ ವಸ್ತುಗಳನ್ನು ಸ್ಥಳಕ್ಕೆ ತೆಗೆದುಕೊಂಡು ಹೋಗುವುದನ್ನು ಹಾಗೂ ಶೇಖರಿಸುವುದನ್ನು ನಿಷೇಧಿಸಲಾಗಿದೆ.
ಕೋವಿಡ್ -19 ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವುದು. ಧ್ವನಿವರ್ಧಕಗಳನ್ನು ಬಳಸುವಂತಿಲ್ಲ. ಈ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಭಾರತೀಯ ದಂಡ ಸಂಹಿತೆಯ 188ರ ಪ್ರಕಾರ ಕ್ರಮವನ್ನು ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ತಮ್ಮ ಆದೇಶದಲ್ಲಿ ಉಲ್ಲೇಖಿಸಿದ್ದಾರೆ.