ಬೆಂಗಳೂರು : ಕರ್ನಾಟಕ ಹೈಕೋರ್ಟ್ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿದ್ದ ಪಿ ಎಸ್ ದಿನೇಶ್ ಕುಮಾರ್ ಅವರನ್ನು ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಿ ಕೇಂದ್ರ ಸರ್ಕಾರ ಆದೇಶಿಸಿದೆ. ಫೆಬ್ರವರಿ 24 ರಂದು ನ್ಯಾಯಮೂರ್ತಿ ದಿನೇಶ್ ಕುಮಾರ್ ಅವರು ಸೇವೆಯಿಂದ ನಿವೃತ್ತರಾಗಲಿದ್ದಾರೆ.
ನ್ಯಾಯಮೂರ್ತಿ ದಿನೇಶ್ ಕುಮಾರ್ ಅವರು 2015 ರಿಂದ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಗಳಾಗಿದ್ದಾರೆ. ಅವರು ಕೇವಲ 24 ದಿನಗಳ ಕಾಲ ಮುಖ್ಯ ನ್ಯಾಯಮೂರ್ತಿ ಆಗಿರಲಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ ಅತಿ ಕಡಿಮೆ ಅವಧಿಗೆ ಮುಖ್ಯ ನ್ಯಾಯಮೂರ್ತಿ ಆಗಿ ಸೇವೆ ಸಲ್ಲಿಸಿದ ಜಸ್ಟೀಸ್ ಆಗಿದ್ದಾರೆ.
ಕೇಂದ್ರ ಸರ್ಕಾರವು ಜನವರಿ 24 ರಂದು ದಿನೇಶ್ ಕುಮಾರ್ ಅವರನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿಯನ್ನಾಗಿ ನೇಮಕ ಮಾಡಿ ಅಧಿಸೂಚನೆ ಪ್ರಕಟಿಸಿತ್ತು. ಇದೀಗ ಮುಖ್ಯ ನ್ಯಾಯಮೂರ್ತಿಯನ್ನಾಗಿ ನೇಮಕ ಮಾಡಿ ಆದೇಶಿಸಿದೆ.