ಬೆಂಗಳೂರು:ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಬೆಂಗಳೂರಿನ 117 ಪರೀಕ್ಷಾ ಕೇಂದ್ರಗಳಲ್ಲಿ ಪೊಲೀಸ್ ಸಬ್ - ಇನ್ಸ್‌ಪೆಕ್ಟರ್ (ಸಿವಿಲ್) (ಪುರುಷ-ಮಹಿಳಾ) ನೇರ ನೇಮಕಾತಿ ಮರುಪರೀಕ್ಷೆ ಮಂಗಳವಾರ ನಡೆಯಲಿದೆ. ಪರೀಕ್ಷೆಗಳನ್ನು ಸುಗಮವಾಗಿ ಹಾಗೂ ಸುವ್ಯವಸ್ಥಿತವಾಗಿ ನಡೆಸುವ ಸಲುವಾಗಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಆದೇಶಿಸಿದ್ದಾರೆ. ಪಿಎಸ್‌ಐ ಮರು ಪರೀಕ್ಷೆ ವೇಳೆ ಮುನ್ನೆಚ್ಚರಿಕಾ ಕ್ರಮವಾಗಿ ಬೆಂಗಳೂರಿನ 117 ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.
ನಾಳೆ ಬೆಳಗ್ಗೆ 10.30ರಿಂದ ಮಧ್ಯಾಹ್ನ 12 ಗಂಟೆವರೆಗೆ ಪೇಪರ್ -1 (50 ಅಂಕ) ಹಾಗೂ ಮಧ್ಯಾಹ್ನ 1 ಗಂಟೆಯಿಂದ 2.30ರವರೆಗೆ ಪತ್ರಿಕೆ -2 (150 ಅಂಕ) ಪರೀಕ್ಷೆ ನಡೆಯಲಿದೆ. ಅಭ್ಯರ್ಥಿಗಳನ್ನು ಸೂಕ್ತ ತಪಾಸಣೆಗೆ ಒಳಪಡಿಸುವುದರಿಂದ ಬೆಳಗ್ಗೆ ಸಮಯಕ್ಕೆ ಸರಿಯಾಗಿ ಪರೀಕ್ಷಾ ಕೇಂದ್ರದಲ್ಲಿ ಹಾಜರಿರಬೇಕು. ನೀರಿನ ಬಾಟಲ್, ಮೊಬೈಲ್‌ಗಳನ್ನು ನಿಷೇಧಿಸಲಾಗಿದೆ. ಮೊಬೈಲ್‌ನಲ್ಲಿ ಗುರುತಿನ ಚೀಟಿ ತೋರಿಸಲು ಅವಕಾಶವಿರುವುದಿಲ್ಲ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.
ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಗೃಹ ಸಚಿವ ಜಿ.ಪರಮೇಶ್ವರ್, 'ನಾಳೆ ನಡೆಯಲಿರುವ ಪಿಎಸ್ಐ ಪರೀಕ್ಷೆಗೆ ಹಾಜರಾಗುತ್ತಿರುವ ಎಲ್ಲ ಅಭ್ಯರ್ಥಿಗಳಿಗೆ ಶುಭವಾಗಲಿ. ಪರೀಕ್ಷೆ ಹಿನ್ನೆಲೆಯಲ್ಲಿ ಅಗತ್ಯ ಮುಂಜಾಗ್ರತೆ ಕೈಗೊಳ್ಳಲಾಗಿದ್ದು, ಸುಸೂತ್ರವಾಗಿ ನಡೆಯಲಿದೆ. ಯಾವುದೇ ರೀತಿಯ ಆತಂಕವಿಲ್ಲದೇ ನಿರ್ಭೀತಿಯಿಂದ ಪರೀಕ್ಷೆ ಬರೆಯಿರಿ' ಎಂದು ಶುಭ ಕೋರಿದ್ದಾರೆ.