ಬೆಂಗಳೂರು:ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಬಂಧಿತನಾಗಿ ಜಾಮೀನಿನ ಮೇಲೆ ಹೊರಬಂದ ಪುನೀತ್ ಕೆರೆಹಳ್ಳಿ ಅವರನ್ನು ಪೊಲೀಸರು ಅನಾಗರಿಕ ರೀತಿಯಲ್ಲಿ ನಡೆಸಿಕೊಂಡಿದ್ದಾರೆ ಎಂದು ಆರೋಪಿಸಿ ಬಸವೇಶ್ವರ ನಗರ ಠಾಣೆಯ ಮುಂದೆ ಹಿಂದೂಪರ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಅನುಮತಿ ಇಲ್ಲದಿದ್ದರೂ ಠಾಣೆ ಮುಂದೆ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಪುನೀತ್ ಕೆರೆಹಳ್ಳಿ ಹಾಗೂ ಕಾರ್ಯಕರ್ತರನ್ನು ಪೊಲೀಸರು ಮತ್ತೆ ವಶಕ್ಕೆ ಪಡೆದರು. ಈ ಸುದ್ದಿ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಹಾಗು ಪ್ರತಾಪ್ ಸಿಂಹ, ಪುನೀತ್ ಕೆರೆಹಳ್ಳಿಯನ್ನು ಬಿಡುಗಡೆ ಮಾಡುವರೆಗೂ ಪ್ರತಿಭಟನೆ ನಡೆಸುವುದಾಗಿ ಹೇಳಿದರು. ಇದಾದ ಕೆಲ ಹೊತ್ತಲ್ಲಿ ಪೊಲೀಸರು ಪುನೀತ್ ಕೆರೆಹಳ್ಳಿಯನ್ನು ಬಿಡುಗಡೆ ಮಾಡಿದರು.
ಇದಕ್ಕೂ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕ ಪುಂಜಾ, "ನ್ಯಾಯ ಕೇಳುವುದಕ್ಕೆ ಬಂದ ನಮ್ಮ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಪೊಲೀಸರನ್ನು ಕಾಂಗ್ರೆಸ್ ಸರ್ಕಾರ ಗೂಂಡಾಗಳಂತೆ ಬಳಸಿಕೊಳ್ಳುತ್ತಿದೆ. ಜೈಪುರದಿಂದ ನಗರಕ್ಕೆ ಸಾಗಾಟ ಮಾಡಿದ್ದ ಮಾಂಸ ಯಾವುದು ಎಂಬುದರ ಬಗ್ಗೆ ವರದಿ ಇನ್ನೂ ಬಂದಿಲ್ಲ. ವರದಿ ಬರುವ ಮುನ್ನವೇ ಹೇಗೆ ನೀವು ಅದು ಕುರಿ ಮಾಂಸ ಎನ್ನುತ್ತೀರಿ?. ಕಾಂಗ್ರೆಸ್ ಸರ್ಕಾರ ಹಿಂದೂ ಕಾರ್ಯಕರ್ತತನ್ನು ಕೆಟ್ಟದಾಗಿ ನಡೆಸಿಕೊಳ್ಳುತ್ತಿದೆ" ಎಂದು ಆಕ್ರೋಶ ಹೊರಹಾಕಿದರು.