ಬೆಂಗಳೂರು: ಲೋಕಸಭಾ ಚುನಾವಣೆಗೆ ಬಿಜೆಪಿ ಹೈಕಮಾಂಡ್ನಿಂದ ಬಿಡುಗಡೆಯಾಗಿರುವ ಎರಡನೇ ಪಟ್ಟಿಯಲ್ಲಿರುವ ರಾಜ್ಯದ ನಾಯಕರಿಗೆ ಪ್ರತಿಪಕ್ಷ ನಾಯಕ ಆರ್. ಅಶೋಕ್ ಅಭಿನಂದಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ವಿಕಸಿತ ಭಾರತವಾಗಿ ಹೊರಹೊಮ್ಮುವತ್ತ ನಮ್ಮ ದೇಶ ದಿಟ್ಟ ಹೆಜ್ಜೆಗಳನ್ನು ಇಡುತ್ತಿರುವ ಈ ಅಮೃತ ಕಾಲದಲ್ಲಿ ಸಂಸತ್ತಿನಲ್ಲಿ ಕರ್ನಾಟಕವನ್ನು ಪ್ರತಿನಿಧಿಸುವುದು ಅತ್ಯಂತ ದೊಡ್ಡ ಸೌಭಾಗ್ಯ. ಶತಕೋಟಿ ಭಾರತೀಯರ ಆಶಯದಂತೆ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ದೇಶದ ಪ್ರಧಾನಿ ಮಾಡಲು ಕರ್ನಾಟಕದಿಂದ ದೊಡ್ಡ ಮಟ್ಟದಲ್ಲಿ ಶಕ್ತಿ ತುಂಬೋಣ. ರಾಜ್ಯದ ಎಲ್ಲಾ 28 ಕ್ಷೇತ್ರಗಳಲ್ಲೂ ಕಮಲ ಅರಳಿಸಲು ಶ್ರಮಿಸೋಣ ಎಂದು ಆರ್. ಅಶೋಕ್ ಟ್ವೀಟ್ ಮಾಡಿದ್ದಾರೆ.
ಹಿಂದಿನ ಅನುಭವದ ಆಧಾರದಲ್ಲಿ ಅಭಿವೃದ್ಧಿಗೆ ಶ್ರಮ: ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುವ ಅವಕಾಶ ಸಿಕ್ಕಿದ್ದು ನನ್ನ ಅದೃಷ್ಟ. ಹಿಂದಿನ ಅನುಭವದ ಆಧಾರದಲ್ಲಿ ಮುಂದಿನ ವರ್ಷಗಳಲ್ಲಿ ಬೆಂಗಳೂರು ಮತ್ತು ರಾಜ್ಯದ ಪ್ರಗತಿಗೆ ನಾನು ಶ್ರಮಿಸುತ್ತೇನೆ ಎಂದು ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ತಿಳಿಸಿದ್ದಾರೆ.
ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರಕ್ಕೆ ನನ್ನ ಮೇಲೆ ನಂಬಿಕೆ ಇಟ್ಟು ಮತ್ತೊಂದು ಬಾರಿ ಸ್ಪರ್ಧಿಸಲು ಅವಕಾಶ ನೀಡಿರುವ ಮಾನ್ಯ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನನ್ನ ಹೃದಯಾಂತರಾಳದ ನಮನಗಳು. ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ, ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಅವರ ಮಾರ್ಗದರ್ಶನ ಮತ್ತು ಸಹಕಾರವನ್ನು ಈ ಸಂದರ್ಭದಲ್ಲಿ ನೆನೆಯಲು ಇಚ್ಛಿಸುತ್ತೇನೆ. ಹಿರಿಯರಾದ ಬಿ.ಎಸ್ ಯಡಿಯೂರಪ್ಪ, ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ, ಸಂಘಟನಾ ಕಾರ್ಯದರ್ಶಿ ರಾಜೀವ್ ಅವರ ಪ್ರೋತ್ಸಾಹ ಕೂಡ ನನ್ನ ಪಾಲಿಗೆ ಶ್ರೀರಕ್ಷೆಯಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.