ಬೆಂಗಳೂರು: "ಚಾಮರಾಜಪೇಟೆ ವ್ಯಾಪ್ತಿಯಲ್ಲಿ ಹಸುಗಳ ಕೆಚ್ಚಲು ಕೊಯ್ದ ಪ್ರಕರಣದ ಸೂಕ್ತ ತನಿಖೆಗಾಗಿ ಆಗ್ರಹಿಸಿ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ಮಾಡಲಿದೆ. ಈ ಘಟನೆಯಿಂದ ಹಿಂದೂಗಳನ್ನು ಬೆದರಿಸಲು ಸಾಧ್ಯವಿಲ್ಲ" ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ.
ಕಾಟನ್ ಪೇಟೆಯ ದುಂಡು ಮಾರಿಯಮ್ಮ ದೇವಸ್ಥಾನದ ಬಳಿ ಇರುವ ಮಾಲೀಕನ ಮನೆಗೆ ಭೇಟಿ, ಮಕರ ಸಂಕ್ರಾಂತಿಯ ಹಿನ್ನೆಲೆಯಲ್ಲಿ ಗೋ ಪೂಜೆ ನೆರವೇರಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಒಂದು ಲಕ್ಷ ರೂ. ಪರಿಹಾರವನ್ನು ಹಸು ಮಾಲೀಕ ಕರ್ಣ ಅವರಿಗೆ ಬಿಜೆಪಿ ವತಿಯಿಂದ ನೀಡಲಾಗಿದೆ" ಎಂದರು.
"ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕತ್ತರಿಸಿದ್ದು, ರಕ್ತ ಸುರಿಯುವುದನ್ನು ನಾನು ಕಣ್ಣಾರೆ ಕಂಡಿದ್ದೇನೆ. ಆದರೆ ಇದು ಒಬ್ಬರೇ ಮಾಡಿದ ಕೃತ್ಯವಲ್ಲ. ಇದರಲ್ಲಿ ಹಲವರು ಭಾಗಿಯಾಗಿದ್ದಾರೆ. ಈ ಕುರಿತು ಪೊಲೀಸರು ಸರಿಯಾಗಿ ತನಿಖೆ ಮಾಡಬೇಕಿತ್ತು. ಈಗ ಸಂಕ್ರಾಂತಿ ಹಬ್ಬ ನಡೆಯುತ್ತಿದೆ. ಪ್ರಯಾಗ್‌ರಾಜ್‌ನಲ್ಲಿ ಮಹಾಕುಂಭಮೇಳ ನಡೆಯುತ್ತಿದೆ. ಇಂತಹ ಸಮಯದಲ್ಲೇ ಈ ಕೃತ್ಯ ಮಾಡುವುದರ ಜೊತೆಗೆ ಹಸು ಮಾಲೀಕ ಕರ್ಣ ಅವರಿಗೆ ಕಾಂಗ್ರೆಸ್ ಕಾರ್ಯಕರ್ತರು ಹಸುವನ್ನು ಪಡೆಯುವಂತೆ ಒತ್ತಡ ಹೇರಿದ್ದಾರೆ" ಎಂದು ದೂರಿದರು.
"ಹಿಂದೂಗಳು ಬೇಡುವ ಸ್ಥಿತಿಯಲ್ಲಿಲ್ಲ. ಕಾಂಗ್ರೆಸ್‌ನವರು ಒಂದು ಕೈಯಲ್ಲಿ ಹಸುವನ್ನು ನೀಡುತ್ತಾರೆ. ಮತ್ತೊಂದು ಕಡೆ ಅವರ ಕಡೆಯವರೇ ನೀಡುವ ಹಸುವನ್ನು ಕತ್ತರಿಸುತ್ತಾರೆ. ನನಗೀಗ ಪೊಲೀಸರು ಹಾಗೂ ಸರ್ಕಾರದ ಮೇಲೆಯೇ ಅನುಮಾನ ಬಂದಿದೆ. ಆರೋಪಿ ಜೇಬಿನಲ್ಲಿ ಬ್ಲೇಡ್ ಇಟ್ಟುಕೊಂಡು ಓಡಾಡುತ್ತಿದ್ದ, ಆತನಿಗೆ ಮತಿಭ್ರಮಣೆಯಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಇಂತಹ ವ್ಯಕ್ತಿ 10 ವರ್ಷ ಫ್ಯಾಕ್ಟರಿಯಲ್ಲಿ ಕೆಲಸ ಮಾಡಲು ಹೇಗೆ ಸಾಧ್ಯ?. ಮುಂಜಾನೆ 3 ರಿಂದ 4 ಗಂಟೆಗೆ ಆತ ಇಲ್ಲಿಗೆ ಬರಲು ಹೇಗೆ ಸಾಧ್ಯ?. ಪ್ರತಿಭಟನೆಯಲ್ಲಿ ಪಾಲ್ಗೊಂಡ ಕರ್ಣ ಅವರ ಹಸುವಿನ ಕೆಚ್ಚಲನ್ನೇ ಕೊಯ್ದಿದ್ದೇಕೆ?" ಎಂದು ಪ್ರಶ್ನಿಸಿದರು.