ಬೆಂಗಳೂರು: ಕನ್ನಡ ಕಡ್ಡಾಯ ಕಾನೂನು ಜಾರಿಗೆ ಸರ್ಕಾರ ನಿರಾಸಕ್ತಿ ತೋರಿಸುತ್ತಿದ್ದು, ನಿಯಮ ಉಲ್ಲಂಘನೆ ಮಾಡಿದವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸದಿದ್ದಲ್ಲಿ ಬಿಜೆಪಿಯಿಂದ ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಎಚ್ಚರಿಕೆ ನೀಡಿದರು.
ಅಂಗಡಿ-ಮುಂಗಟ್ಟುಗಳು, ವಾಣಿಜ್ಯ ಸಂಸ್ಥೆಗಳು, ಉದ್ದಿಮೆಗಳು ಮತ್ತು ಕೈಗಾರಿಕೆಗಳ ನಾಮಫಲಕಗಳಲ್ಲಿ ಶೇಕಡ 60ರಷ್ಟು ಕನ್ನಡ ಭಾಷೆ ಕಡ್ಡಾಯವಾಗಿರಬೇಕೆಂಬ ನಿಯಮ ಜಾರಿಗೊಳಿಸಲು ನೀಡಲಾಗಿದ್ದ ಗಡುವು ನಾಳೆಗೆ ಮುಕ್ತಾಯವಾಗುತ್ತದೆ. ಇನ್ನೂ ಅನೇಕ ಕಡೆಗಳಲ್ಲಿ ಸರ್ಕಾರದ ಆದೇಶಕ್ಕೆ ಕವಡೆ ಕಾಸಿನ ಕಿಮ್ಮತ್ತಿಲ್ಲ ಎನ್ನುವಂತೆ ಅನ್ಯಭಾಷೆಯ ನಾಮಫಲಕಗಳು ರಾರಾಜಿಸುತ್ತಿವೆ ಎಂದು ಎಕ್ಸ್ ಪೋಸ್ಟ್ ಮೂಲಕ ಟೀಕಿಸಿದ್ದಾರೆ.
ಅನ್ಯ ಭಾಷೆಯ ಫಲಕಗಳನ್ನು ತೆರವುಗೊಳಿಸಲು ಹೋರಾಟ ಮಾಡುತ್ತಿದ್ದ ಕನ್ನಡ ಪರ ಹೋರಾಟಗಾರರು ಕಾನೂನು ಕೈಗೆತ್ತಿಕೊಳ್ಳಬಾರದು ಎಂದು ಅವರ ಮೇಲೆ ಲಾಠಿ ಪ್ರಹಾರ ಮಾಡಿ, ಕೇಸು ಹಾಕಿ ಬಂಧಿಸಿದ್ದ ಸಿಎಂ ಸಿದ್ದರಾಮಯ್ಯ ಸರ್ಕಾರ ಈಗ ಕಾನೂನು ಜಾರಿಗೆ ತರಲು ಸಂಪೂರ್ಣ ನಿರಾಸಕ್ತಿ ತೋರುತ್ತಿದೆ ಎಂದು ಅಶೋಕ್ ಆರೋಪಿಸಿದ್ದಾರೆ.
ಕನ್ನಡ ಕಡ್ಡಾಯ ಮಾಡುವ ನಿಯಮ ಕೇವಲ ಕಡತಕ್ಕೆ ಸೀಮಿತವಾಗದೆ, ಪ್ರಚಾರದ ವಸ್ತುವಾಗಿದೆ. ಕಾನೂನನ್ನು ಕಟ್ಟುನಿಟ್ಟಾಗಿ ಅನುಷ್ಠಾನ ಮಾಡುವ ಜವಾಬ್ದಾರಿ ಸರ್ಕಾರದ ಮೇಲಿದ್ದು ನಿಯಮ ಉಲ್ಲಂಘನೆ ಮಾಡಿದವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು. ಕನ್ನಡಕ್ಕೆ ದ್ರೋಹ ಬಗೆದರೆ, ಕನ್ನಡದ ಬಗ್ಗೆ ಅಸಡ್ಡೆ ತೋರಿದರೆ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ:ಇಂದು ಕನ್ನಡ ನಾಮಫಲಕ ಅಳವಡಿಕೆಗೆ ಕೊನೆ ದಿನ; ಆದರೂ ಬೆಣ್ಣೆ ನಗರಿಯಲ್ಲಿ ಪರಭಾಷಾ ಫಲಕಗಳು