ವಿಜಯಪುರ:ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ನಾಳೆ ವಿಜಯಪುರದಲ್ಲಿ ನಡೆಯಲಿರುವ ಕಾಂಗ್ರೆಸ್ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಈ ಹಿನ್ನೆಲೆಯಲ್ಲಿ ಇಲ್ಲಿನ ಬಿಎಲ್‌ಡಿಇ ನ್ಯೂ ಕ್ಯಾಂಪಸ್‌ನಲ್ಲಿ ಬೃಹತ್ ವೇದಿಕೆಯ ಸಿದ್ಧತೆ ಭರದಿಂದ ಸಾಗಿದೆ. ಬೃಹತ್ ವೇದಿಕೆಯಲ್ಲಿ ರಾಹುಲ್ ಗಾಂಧಿ ವಿಜಯಪುರದ ಕಾಂಗ್ರೆಸ್ ಅಭ್ಯರ್ಥಿ ಪ್ರೊ.ರಾಜು ಆಲಗೂರ ಪರ ಚುನಾವಣಾ ಪ್ರಚಾರ ಕೈಗೊಳ್ಳಲಿದ್ದಾರೆ.
ಇಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಕ್ಯಾಂಪಸ್ಗೆ ಭೇಟಿ ನೀಡಿ ಕಾಂಗ್ರೆಸ್ ಕಾರ್ಯಕ್ರಮದ ಸಿದ್ಧತೆಗಳನ್ನು ಪರಿಶೀಲಿಸಿದರು. ವೇದಿಕೆ ವೀಕ್ಷಿಸಿದ ಸಚಿವರು, ಕಾರ್ಯಕ್ರಮ ಅಚ್ಚುಕಟ್ಟಾಗಿ ನಡೆಸಲು ಕೈಗೊಳ್ಳಬೇಕಿರುವ ಕ್ರಮಗಳ ಕುರಿತು ಚರ್ಚಿಸಿದರು.
ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾಳೆ ಬೆಳಗ್ಗೆ 11 ಗಂಟೆಗೆ ರಾಹುಲ್ ಗಾಂಧಿ ವಿಜಯಪುರಕ್ಕೆ ಆಗಮಿಸಿ ಕಾಂಗ್ರೆಸ್ ಪ್ರಚಾರ ಕಾಯಕ್ರಮದಲ್ಲಿ ಭಾಗವಹಿಸುವರು. ಸಿಎಂ ಸಿದ್ಧರಾಮಯ್ಯ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಕೂಡಾ ಭಾಗವಹಿಸಲಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಗಮಿಸುವುದು ಇನ್ನೂ ಖಚಿತವಾಗಿಲ್ಲ ಎಂದು ತಿಳಿಸಿದರು.