ರಾಯಚೂರು:ಖಾಸಗಿ ಶಾಲಾ ಬಸ್ ಮತ್ತು ಸಾರಿಗೆ ಬಸ್ ನಡುವಿನ ಭೀಕರ ರಸ್ತೆ ಅಪಘಾತ ಹಿನ್ನೆಲೆಯಲ್ಲಿ ಇಂದು ಜಿಲ್ಲಾ ಉಸ್ತುವಾರಿ ಸಚಿವ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ರಿಮ್ಸ್ ಆಸ್ಪತ್ರೆಗೆ ಭೇಟಿ ಗಾಯಾಳುಗಳ ಯೋಗಕ್ಷೇಮ ವಿಚಾರಿಸಿ ವೈದ್ಯರೊಂದಿಗೆ ಚರ್ಚಿಸಿದ್ದಾರೆ.
ಮಾನವಿ ತಾಲೂಕಿನ ಕಪಗಲ್ ಗ್ರಾಮದ ಹತ್ತಿರ ಗುರುವಾರ ಖಾಸಗಿ ಬಸ್ ಮತ್ತು ಸಾರಿಗೆ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿತ್ತು. ಶಾಲಾ ಬಸ್‌ನಲ್ಲಿದ್ದ 40 ವಿದ್ಯಾರ್ಥಿಗಳಲ್ಲಿ ಚಾಲಕ ಸೇರಿ 17 ಮಂದಿ ತೀವ್ರವಾಗಿ ಗಾಯಗೊಂಡಿದ್ದರು. ಶ್ರೀಕಾಂತ್, ಸಮರ್ಥ ಎಂಬಿಬ್ಬರು ವಿದ್ಯಾರ್ಥಿಗಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. 23 ವಿದ್ಯಾರ್ಥಿಗಳು ಸಣ್ಣಪುಟ್ಟ ಗಾಯಗೊಂಡು ಚಿಕಿತ್ಸೆ ಪಡೆದುಕೊಂಡಿದ್ದಾರೆ. ಶಾಲಾ ಬಸ್ ಚಾಲಕ, ಇನ್ನಿಬ್ಬರು ವಿದ್ಯಾರ್ಥಿಗಳ ಸ್ಥಿತಿ ಚಿಂತಾಜನಕವಾಗಿದೆ.
ಈ ಹಿನ್ನೆಲೆಯಲ್ಲಿ ಸಚಿವರು ಗಾಯಗೊಂಡಿರುವವರಿಗೆ ನೀಡುತ್ತಿರುವ ಚಿಕಿತ್ಸೆಯ ಕುರಿತು ವೈದ್ಯರಿಂದ ಮಾಹಿತಿ ಪಡೆದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, "ಅಪಘಾತದಲ್ಲಿ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. ಮೃತ ಮಕ್ಕಳಿಗೆ 5 ಲಕ್ಷ ರೂಪಾಯಿ, ಗಂಭೀರವಾಗಿ ಗಾಯಗೊಂಡವರಿಗೆ 3 ಲಕ್ಷ ರೂಪಾಯಿ ಪರಿಹಾರಧನವನ್ನು ಈಗಾಗಲೇ ಘೋಷಣೆ ಮಾಡಲಾಗಿದೆ. ಮಂಜುನಾಥ, ಮಧುಶ್ರೀ, ಚಾಲಕ ಬಲವಂತ ಮೂವರು ತ್ರೀವವಾಗಿ ಗಾಯಗೊಂಡಿದ್ದಾರೆ. ಅವರಿಗೆ ವೈದ್ಯರು ಚಿಕಿತ್ಸೆ ನೀಡುತ್ತಿದ್ದು, ತೀವ್ರ ನಿಗಾ ವಹಿಸಲಾಗಿದೆ" ಎಂದರು.