ಬೆಂಗಳೂರು:ರಾಜ್ಯದ ಹಲವೆಡೆ ಮುಂದಿನ 3 ದಿನ ಮಳೆ ಮುಂದುವರೆಯಲಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ನಾಳೆಯಿಂದ ಆಗಸ್ಟ್ 5ರವರೆಗೆ ಭಾರೀ ವರ್ಷಧಾರೆ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ಆರೆಂಜ್ ಅರ್ಲಟ್ ಘೋಷಿಸಿದೆ.
ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಮುಂದಿನ 24 ಗಂಟೆ ಆರೆಂಜ್ ಅರ್ಲಟ್ ಇದ್ದರೆ, ಕೊಡಗು, ಬೆಳಗಾವಿಯಲ್ಲಿ ನಾಳೆ ಯೆಲ್ಲೋ ಅರ್ಲಟ್ ಇರಲಿದೆ. ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಗೆ ನಾಳೆ ಯೆಲ್ಲೋ ಅಲರ್ಟ್ ನೀಡಲಾಗಿದ್ದು, ಉಳಿದ ಭಾಗಗಳಲ್ಲಿ ಸಾಧಾರಣ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅತಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ನಿರಂತರ ಗಾಳಿಯು ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದಲ್ಲಿ ಬೀಸಲಿದೆ. ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ನಿರಂತರ ಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ ಮತ್ತು ಕೊಡಗು ಜಿಲ್ಲೆಯಲ್ಲಿ ಸಹ ಅತಿ ಹೆಚ್ಚು ಮಳೆ ಸುರಿಯಲಿದೆ. ಉಳಿದಂತೆ ಉತ್ತರ ಒಳನಾಡಿನ ಉಳಿದ ಜಿಲ್ಲೆಗಳ ಹಲವೆಡೆ ಮತ್ತು ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗಲಿದೆ.