ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಸೃಷ್ಟಿಯಾಗಿರುವ ಫೆಂಗಲ್ ಚಂಡಮಾರುತ ತಮಿಳುನಾಡಿನೆಡೆಗೆ ಸಾಗಿದ್ದು, ಕರ್ನಾಟಕದಲ್ಲೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಚಂಡಮಾರುತದ ಪರಿಣಾಮ ಬೆಂಗಳೂರಿನ ಮೇಲೂ ಗೋಚರಿಸಲಿದೆ. ಕರ್ನಾಟಕದ ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಡಿಸೆಂಬರ್ 1ರಿಂದ ಮಳೆಯಾಗಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.
ಎಲ್ಲೆಲ್ಲಿ ಮಳೆ?: ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಚಾಮರಾಜನಗರ, ಕೊಡಗು, ಮಂಡ್ಯ, ಮೈಸೂರು ಮತ್ತು ರಾಮನಗರದಲ್ಲಿ ಮಳೆ ಸುರಿಯುವ ಸಾಧ್ಯತೆ ಇದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಇಲಾಖೆ ತಿಳಿಸಿದೆ.
ಇನ್ನೊಂದೆಡೆ, ರಾಜ್ಯದ ಹಲವು ಜಿಲ್ಲೆಗಳಲ್ಲಿ ಚಳಿಯೂ ನಿಧಾನವಾಗಿ ಹೆಚ್ಚುತ್ತಿದೆ.
ಬೆಂಗಳೂರಿನ ಹೆಚ್ಎಎಲ್ನಲ್ಲಿ ನಿನ್ನೆ (ಮಂಗಳವಾರ) 27.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 28.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಇದನ್ನೂ ಓದಿ:ತಮಿಳುನಾಡಿನಲ್ಲಿ ಭಾರೀ ಮಳೆ ಮುನ್ಸೂಚನೆ, ಶಾಲೆಗಳಿಗೆ ರಜೆ: ಬೆಂಗಳೂರಲ್ಲೂ ಮೋಡ ಕವಿದ ವಾತಾವರಣ