ಬೆಂಗಳೂರು: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಸೇರಿದಂತೆ ವಿವಿಧ ರಾಜ್ಯಗಳ 11 ಸ್ಥಳಗಳಲ್ಲಿ ರಾಷ್ಟ್ರೀಯ ತನಿಖಾ ದಳ (ಎನ್ಐಎ) ದಾಳಿ ನಡೆಸಿದೆ. ಸ್ಥಳಿಯ ಪೊಲೀಸರ ಸಹಕಾರದೊಂದಿಗೆ ಕರ್ನಾಟಕ, ತಮಿಳುನಾಡು, ತೆಲಂಗಾಣ, ಆಂಧ್ರಪ್ರದೇಶದಲ್ಲಿ ದಾಳಿ ನಡೆಸಲಾಗಿದೆ. ಇಡೀ ಸಂಚಿನ ಹಿಂದಿರುವವರು ಹಾಗೂ ಬಂಧಿತ ಆರೋಪಿಗಳಿಗೆ ನಿರ್ದೇಶನ ನೀಡುತ್ತಿದ್ದವರ ಕುರಿತು ಮಾಹಿತಿ ಕಲೆಹಾಕುವುದರ ಭಾಗವಾಗಿ ಈ ದಾಳಿ ನಡೆಸಲಾಗಿದೆ ಎಂದು ಎನ್ಐಎ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ಲಷ್ಕರ್-ಎ-ತೊಯ್ಬಾದೊಂದಿಗೆ ಸೇರಿ 2012ರ ಬೆಂಗಳೂರು ಹಾಗೂ ಹುಬ್ಬಳಿಯಲ್ಲಿ ವಿದ್ವಂಸಕ ಕೃತ್ಯಗಳಿಗೆ ಸಂಚು ರೂಪಿಸಿದ್ದ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿರುವ ಆರೋಪಿಗಳು ಸೇರಿದಂತೆ, ಪ್ರಸ್ತುತ ಪ್ರಕರಣದ ಆರೋಪಿಗಳೊಂದಿಗೆ ನಂಟು ಹೊಂದಿದ್ದ 11 ಜನರ ನೆಲೆಗಳಲ್ಲಿ ಶೋಧ ನಡೆಸಲಾಗಿತ್ತು. ದಾಳಿ ವೇಳೆ ಆರೋಪಿಗಳ ಸಂಚಿಗೆ ಸಂಬಂಧಿಸಿದ ದಾಖಲೆಗಳು, ಡಿಜಿಟಲ್ ದಾಖಲೆಗಳನ್ನ ವಶಪಡಿಸಿಕೊಳ್ಳಲಾಗಿದ್ದು, ಅವುಗಳ ಸಮಗ್ರ ಪರಿಶೀಲನೆ ಮುಂದುವರೆದಿದೆ ಎಂದು ಎನ್ಐಎ ತಿಳಿಸಿದೆ.
ಮಾರ್ಚ್ 1ರಂದು ಬೆಂಗಳೂರಿನ ಐಟಿಪಿಎಲ್ ರಸ್ತೆಯ ದಿ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಸಂಭವಿಸಿತ್ತು. ಘಟನೆಯಲ್ಲಿ ಕೆಫೆ ಸಿಬ್ಬಂದಿ, ಗ್ರಾಹಕರ ಸಹಿತ ಒಟ್ಟು 9 ಜನ ಗಾಯಗೊಂಡಿದ್ದರು. ಬಳಿಕ ಮಾರ್ಚ್ 3ರಂದು ಪ್ರಕರಣ ದಾಖಲಿಸಿಕೊಂಡಿದ್ದ ಎನ್ಐಎ ತನಿಖೆ ವೇಳೆ ಶಿವಮೊಗ್ಗದ ತೀರ್ಥಹಳ್ಳಿ ಮೂಲದ ಅಬ್ದುಲ್ ಮತೀನ್ ತಾಹಾ ಹಾಗೂ ಮುಸಾವಿರ್ ಹುಸೇನ್ ಶಾಜೀಬ್ ಈ ಪ್ರಕರಣದ ಮಾಸ್ಟರ್ ಮೈಂಡ್ಗಳೆಂದು ಪತ್ತೆಯಾಗಿತ್ತು. ಪಶ್ಚಿಮ ಬಂಗಾಳದ ಮೇದಿನಿಪುರದಲ್ಲಿ ಅಡಗಿದ್ದ ಇಬ್ಬರೂ ಆರೋಪಿಗಳನ್ನ ಏಪ್ರಿಲ್ 12ರಂದು ಎನ್ಐಎ ಅಧಿಕಾರಿಗಳು ಬಂಧಿಸಿದ್ದರು.