ಬೆಂಗಳೂರು : ನಗರದ ಹೆಬ್ಬಗೋಡಿ ಸಮೀಪದ ಜಿ. ಎಂ. ಫಾರ್ಮ್ ಹೌಸ್‌ನಲ್ಲಿ ರೇವ್ ಪಾರ್ಟಿ ನಡೆಸಿದ್ದ ಆರೋಪ ಸಂಬಂಧ ತೆಲುಗು ನಟಿ ಕೊಲ್ಲ ಹೇಮಾ ಅವರ ವಿರುದ್ಧ ವಿಚಾರಣಾ ನ್ಯಾಯಾಲಯದಲ್ಲಿ ನಡೆಯುತ್ತಿರುವ ನ್ಯಾಯಾಂಗ ಪ್ರಕ್ರಿಯೆಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.
ಕೊಲ್ಲ ಹೇಮಾ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ್ ಚಂದನಗೌಡರ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ.
ಅಲ್ಲದೆ, ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿ ವಿಚಾರಣೆ ಮುಂದೂಡಿದೆ.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಪ್ರಕರಣದಲ್ಲಿ ಸಹ ಆರೋಪಿಗಳ ಹೇಳಿಕೆಗಳನ್ನು ಆಧರಿಸಿ ಎನ್‌ಡಿಪಿಎಸ್ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆದರೆ, ಅರ್ಜಿದಾರರು ಮಾದಕ ವಸ್ತುಗಳನ್ನು ಸೇವಿಸಿರುವುದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು ವಾದ ಮಂಡಿಸಿದರು.
ವಾದ ಆಲಿಸಿದ ಪೀಠ, ಮುಂದಿನ ವಿಚಾರಣೆಯವರೆಗೂ ವಿಚಾರಣಾ ನ್ಯಾಯಾಲಯದ ಪ್ರಕ್ರಿಯೆಗೆ ತಡೆ ನೀಡಿ ಆದೇಶಿಸಿದೆ.
ಪ್ರಕರಣದ ಹಿನ್ನೆಲೆ : ಜಿ. ಎಂ. ಫಾರ್ಮ್ ಹೌಸ್‌ನಲ್ಲಿ ರೇವ್ ಪಾರ್ಟಿಯಲ್ಲಿ ಹೇಮಾ ಭಾಗಿಯಾಗಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿದ್ದ ಪೊಲೀಸರು, ಹೇಮಾ ಅವರನ್ನು ವಶಕ್ಕೆ ಪಡೆದು ನ್ಯಾಯಾಂಗಕ್ಕೆ ಬಂಧನಕ್ಕೆ ಒಪ್ಪಿಸಿದ್ದರು. ಈ ನಡುವೆ ಜಾಮೀನು ಪಡೆದುಕೊಂಡಿದ್ದರು.
ಪ್ರಕರಣದ ತನಿಖೆ ನಡೆಸಿದ್ದ ಪೊಲೀಸರು ನ್ಯಾಯಾಲಯಕ್ಕೆ 1,086 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ. ರೇವ್ ಪಾರ್ಟಿಯಲ್ಲಿ ತೆಲುಗು ನಟಿ ಹೇಮಾ ಸೇರಿದಂತೆ ಉದ್ಯಮಿಗಳು ಸೇರಿದ್ದರು. ಅಲ್ಲದೆ, ಹಲವರು ಡ್ರಗ್ಸ್ ಸೇವನೆ ಮಾಡಿದ್ದರು ಎಂಬುದಾಗಿ ವಿವರಿಸಿದ್ದರು. ಇದೀಗ ವಿಚಾರಣಾ ಪ್ರಕಣದಲ್ಲಿ ವಿಚಾರಣಾ ಪ್ರಕ್ರಿಯೆ ರದ್ದುಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಇದನ್ನೂ ಓದಿ:ರೇವ್ ಪಾರ್ಟಿ ಪ್ರಕರಣ: ನಟಿ ಹೇಮಾ ಡ್ರಗ್ಸ್ ಸೇವನೆ ದೃಢ, ದೋಷಾರೋಪ ಪಟ್ಟಿಯಲ್ಲಿ ಉಲ್ಲೇಖ - RAVE PARTY CASE - RAVE PARTY CASE