ಕರ್ನಾಟಕ

karnataka

ETV Bharat / state

ಹೆಚ್​​ಎಂಟಿ, ಕುದುರೆಮುಖ ಕಾರ್ಖಾನೆ ಬಗ್ಗೆ ರಾಜ್ಯ ಸರ್ಕಾರದಿಂದ ಅಪಪ್ರಚಾರ: ಬಹಿರಂಗ ಚರ್ಚೆಗೆ ರೆಡಿ ಎಂದ ಹೆಚ್​ಡಿಕೆ - HD KUMARASWAMY

ಕೆಐಒಸಿಎಲ್ ಮತ್ತು ಹೆಚ್​ಎಂಟಿಯಲ್ಲಿ ರಾಜ್ಯ ಸರ್ಕಾರ ರಾಜಕಾರಣ ಮಾಡಬಾರದು. ಈ ಕುರಿತು ನಾನು ಚರ್ಚೆಗೆ ಸಿದ್ಧನಿದ್ದೇನೆ ಎಂದು ಕುಮಾರಸ್ವಾಮಿ ಸವಾಲು ಹಾಕಿದರು.

ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ
ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (ETV Bharat)

By ETV Bharat Karnataka Team

Published : Oct 17, 2024, 6:02 PM IST

ಬೆಂಗಳೂರು:ಹಿಂದೂಸ್ತಾನ್ ಮಷಿನ್ ಅಂಡ್ ಟೂಲ್ಸ್ (ಹೆಚ್​​ಎಂಟಿ) ಹಾಗೂ ಕುದುರೆಮುಖ ಕಬ್ಬಿಣ ಮತ್ತು ಅದಿರು ಸಂಸ್ಥೆ (KIOCL) ವಿಷಯದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಹಸಿ ಸುಳ್ಳುಗಳನ್ನು ಹಬ್ಬಿಸುತ್ತಿದೆ. ಈ ಬಗ್ಗೆ ನಾನು ದಾಖಲೆಗಳ ಸಮೇತ ರಾಜ್ಯ ಸರ್ಕಾರದ ಜೊತೆ ಚರ್ಚೆಗೆ ಸಿದ್ಧನಿದ್ದೇನೆ ಎಂದು ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಸವಾಲು ಹಾಕಿದ್ದಾರೆ.

ಜೆಡಿಎಸ್ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಇಂದು ಕರೆಯಲಾಗಿದ್ದ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ತಪ್ಪಾಗಿದ್ದರೆ ನಾನು ಜವಾಬ್ದಾರಿ ತೆಗೆದುಕೊಳ್ಳುತ್ತೇನೆ. ಕೆಐಒಸಿಎಲ್ ಬಗ್ಗೆ ರಾಜ್ಯ ಸರ್ಕಾರ ರಾಜಕಾರಣ ಮಾಡಬಾರದು. ಸಮಸ್ಯೆ ಇದ್ದರೆ ಕೂತು ಸರಿಪಡಿಸಿಕೊಳ್ಳಬೇಕು. ರಾಜ್ಯದಲ್ಲಿರುವ ಸಾರ್ವಜನಿಕ ಸ್ವಾಮ್ಯದ ಕೈಗಾರಿಕೆಗಳನ್ನು ಉಳಿಸುವ ಬಗ್ಗೆ ನಾನು ಕೆಲಸ ಮಾಡುತ್ತಿದ್ದೇನೆ. ಈ ಬಗ್ಗೆ ನಾನು ಮುಖ್ಯಮಂತ್ರಿಗಳು ಹಾಗೂ ಅರಣ್ಯ ಸಚಿವರಿಗೆ ಪತ್ರ ಬರೆಯುತ್ತೇನೆ. ಒಂದು ಸಭೆ ಮಾಡಲಿ. ಅಲ್ಲಿ ದಾಖಲೆಗಳ ಸಮೇತ ನಾನು ಮಾತನಾಡುತ್ತೇನೆ. ಒಂದು ವೇಳೆ ಕೆಐಒಸಿಎಲ್ ತಪ್ಪುಗಳಿದ್ದರೆ ಅದಕ್ಕೆ ಆ ಇಲಾಖೆಯ ಸಚಿವನಾಗಿ ಜವಾಬ್ದಾರಿ ತೆಗೆದುಕೊಳ್ಳುತ್ತೇನೆ. ಅದರ ಹೊರತಾಗಿ ರಾಜ್ಯದ ಹಿತಾಸಕ್ತಿಯ ಬಗ್ಗೆ ರಾಜಕಾರಣ ಮಾಡುವುದು ಸರಿಯಲ್ಲ ಎಂದರು.

ಹೆಚ್.ಡಿ. ಕುಮಾರಸ್ವಾಮಿ (ETV Bharat)

ಅರಣ್ಯ ಸಚಿವರಿಂದ ಕ್ಷುಲ್ಲಕ ರಾಜಕಾರಣ: ಅರಣ್ಯ ಸಚಿವರು ಈ ಎರಡೂ ಸಂಸ್ಥೆಗಳ ಬಗ್ಗೆ ಸತ್ಯಕ್ಕೆ ದೂರವಾದ ವಿಷಯಗಳನ್ನು ದಿನನಿತ್ಯವೂ ಮಾಧ್ಯಮಗಳಿಗೆ ಹೇಳುತ್ತಾ ಜನರ ದಿಕ್ಕು ತಪ್ಪಿಸುತ್ತಿದ್ದಾರೆ. ಮೊದಲು ಸಚಿವರು ದಾಖಲೆಗಳನ್ನು ಓದಿ ಅರಿತುಕೊಳ್ಳಬೇಕು. ಆ ನಂತರ ಅವರು ಮಾತನಾಡಿದರೆ ಚೆನ್ನಾಗಿರುತ್ತದೆ. ಅದರ ಹೊರತಾಗಿ ರಾಜ್ಯ ಅಭಿವೃದ್ಧಿ ವಿಷಯದಲ್ಲಿ ಕ್ಷುಲ್ಲಕ ರಾಜಕಾರಣ ಮಾಡಿದರೆ ಅವರನ್ನು ಸಚಿವರು ಎಂದು ಕರೆಯಲಾಗುತ್ತದೆಯೇ ಎಂದು ಹೆಚ್​ಡಿಕೆ ಕಿಡಿಕಾರಿದರು.

300-400 ಕಾರ್ಮಿಕರು ಬೀದಿಗೆ: ರಾಜ್ಯ ಸರ್ಕಾರದ ಹಠಮಾರಿತನದಿಂದ ಕುದುರೆಮುಖ ಸಂಸ್ಥೆಯ ಸುಮಾರು 300-400 ಕಾರ್ಮಿಕರು ಬೀದಿಯಲ್ಲಿ ನಿಂತಿದ್ದಾರೆ. ಒಂದು ಕಡೆ ಸ್ಥಳೀಯರಿಗೆ ಉದ್ಯೋಗ ಕಲ್ಪಿಸಬೇಕು ಎನ್ನುವ ರಾಜ್ಯ ಸರ್ಕಾರ ಮತ್ತೊಂದೆಡೆ ಅಸಹಕಾರ ನೀಡುತ್ತಿದೆ. ಪ್ರತಿಯೊಂದಕ್ಕೂ ಕೇಂದ್ರ ಸರ್ಕಾರವನ್ನು ನಿಂದಿಸಿದರೆ ಉಪಯೋಗವಿಲ್ಲ ಎಂದು ಹೇಳಿದರು.

ವಿಶಾಖಪಟ್ಟಣದ ರಾಷ್ಟ್ರೀಯ ಉಕ್ಕು ಕಾರ್ಖಾನೆ (RNIL) ಸಂಕಷ್ಟದಲ್ಲಿ ಇತ್ತು. ನಿರ್ವಹಣಾ ಬಂಡವಾಳ ಇಲ್ಲದೆ ಸೊರಗಿತ್ತು. ಏಕಾಏಕಿ 4500 ಕಾರ್ಮಿಕರನ್ನು ಕೆಲಸದಿಂದ ತೆಗೆದು ಹಾಕಲಾಗಿತ್ತು. ಆದರೆ, ಕೇಂದ್ರ ವಿತ್ತ ಸಚಿವರಾದ ನಿರ್ಮಲಾ ಸೀತಾರಾಮನ್ ಹಾಗೂ ಆಂಧ್ರ ಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ಒತ್ತಾಸೆಯ ಮೇರೆಗೆ ಕೇವಲ 48 ಗಂಟೆಗಳ ಒಳಗಾಗಿ ಅಷ್ಟೂ ಕಾರ್ಮಿಕರನ್ನು ಮರು ನೇಮಕಕ್ಕೆ ಆದೇಶ ಹೊರಡಿಸಿದರು. ನೆರೆಯ ರಾಜ್ಯದಲ್ಲಿ ನಮಗೆ ಇಂತಹ ಉತ್ತಮ ಸಹಕಾರ ಸಿಗುತ್ತಿದೆ. ಆದರೆ, ನಮ್ಮದೇ ರಾಜ್ಯದಲ್ಲಿ ಸಹಕಾರ ಸಿಗುತ್ತಿಲ್ಲ. ಒಬ್ಬ ಕೇಂದ್ರ ಮಂತ್ರಿಯನ್ನು ನಡೆಸಿಕೊಳ್ಳುವ ರೀತಿಯೇ ಇದು ಎಂದು ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.

ರಾಜಕಾರಣ ಚುನಾವಣೆಗೆ ಸೀಮಿತ. ಅಭಿವೃದ್ಧಿ ವಿಷಯದಲ್ಲಿ ರಾಜಕಾರಣ ಯಾಕೆ ಬೇಕು? ಈವರೆಗೂ ಒಬ್ಬರೂ ನನ್ನ ಬಳಿ ಬಂದು ರಾಜ್ಯದ ಅಭಿವೃದ್ಧಿ ಬಗ್ಗೆ ಚರ್ಚೆ ಮಾಡಿಲ್ಲ. ಎಂ.ಬಿ. ಪಾಟೀಲ್ ಒಬ್ಬರು ದೆಹಲಿಯ ನನ್ನ ಸಚಿವಾಲಯಕ್ಕೆ ಬಂದು ಕೈಗಾರಿಕೆ ಅಭಿವೃದ್ಧಿಯ ಬಗ್ಗೆ ಚರ್ಚೆ ನಡೆಸಿದ್ದು ಬಿಟ್ಟರೆ ಯಾರೊಬ್ಬರೂ ಚರ್ಚೆ ಮಾಡಿಲ್ಲ. ಕುಮಾರಸ್ವಾಮಿ ಅವರು ಮೇಕೆದಾಟು ಯೋಜನೆಗೆ ಅನುಮತಿ ಕೊಡಿಸಲಿ ಎಂದು ಬೀದಿಯಲ್ಲಿ ಜಾಗಟೆ ಹೊಡೆಯುತ್ತಿದ್ದಾರೆ. ಹೀಗೆ ಮಾಡಿದರೆ ಮೇಕೆದಾಟುಗೆ ಅನುಮತಿ ದೊರೆಯುತ್ತದೆಯೇ? ಎಂದು ಕೇಂದ್ರ ಸಚಿವರು ಪ್ರಶ್ನಿಸಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಕೆ.ಎನ್. ತಿಪ್ಪೇಸ್ವಾಮಿ, ಟಿ.ಎ. ಶರವಣ, ಟಿ.ಎ.ಜವರಾಯ ಗೌಡ, ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹೆಚ್.ಎಂ. ರಮೇಶ್ ಗೌಡ ಮತ್ತಿತರರು ಉಪಸ್ಥಿತರಿದ್ದರು.

ಇದನ್ನೂ ಓದಿ: ರೈಲ್ವೆ ಟಿಕೆಟ್​ 4 ತಿಂಗಳಿಗೂ ಮೊದಲು ಬುಕ್​ ಮಾಡುವಂತಿಲ್ಲ: ಸರ್ಕಾರದಿಂದ ಹೊಸ ನಿಯಮ​ ಜಾರಿ

For All Latest Updates

ABOUT THE AUTHOR

...view details