ಬೆಂಗಳೂರು : ಕೃಷಿ, ಕೃಷಿಕರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ. ಅದಕ್ಕೆ ಪೂರಕವಾಗಿ ಪರಸ್ಪರ ಸಮನ್ವಯತೆಯಿಂದ ಕಾರ್ಯನಿರ್ವಹಿಸುವಂತೆ ಸಚಿವ ಎನ್. ಚಲುವರಾಯಸ್ವಾಮಿ ಸೂಚನೆ ನೀಡಿದ್ದಾರೆ.
ವಿಧಾನಸೌಧದಲ್ಲಿ ಇಂದು ರಾಜ್ಯದ ವಿವಿಧ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಉಪ ಕುಲಪತಿಗಳು ಹಾಗೂ ಕೃಷಿ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, ಎಲ್ಲರೂ ಸ್ವಹಿತಾಸಕ್ತಿ ಬದಿಗೊತ್ತಿ ಸಾರ್ವಜನಿಕ ಪ್ರಾಮುಖ್ಯತೆಗೆ ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದರು.
ವಿವಿಗಳ ಪುನರ್ ವಿಂಗಡಣೆಗೆ ಸಮಿತಿ ರಚನೆ :ರಾಜ್ಯದಲ್ಲಿ ವಿದ್ಯಾರ್ಥಿಗಳು, ರೈತರು ಹಾಗೂ ಕೃಷಿ ವಿಶ್ವವಿದ್ಯಾನಿಲಯಗಳ ಹಿತದೃಷ್ಟಿಯಿಂದ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಪುನರ್ ವಿಂಗಡಣೆ ಬಗ್ಗೆ ಚಿಂತನೆ ನಡೆಸಲಾಗಿದ್ದು, ಇದಕ್ಕಾಗಿ ಸಮಿತಿ ರಚಿಸಲಾಗಿದೆ. ವರದಿ ಆಧರಿಸಿ ಸಚಿವ ಸಂಪುಟದ ಸಭೆಯಲ್ಲಿ ಚರ್ಚಿಸಿ ಸರ್ಕಾರ ನಿರ್ಧಾರ ಕೈಗೊಳ್ಳಲಿದೆ ಎಂದು ಮಾಹಿತಿ ನೀಡಿದರು.
ಸರ್ಕಾರಕ್ಕೆ ಎಲ್ಲಾ ಜಿಲ್ಲೆಗಳು ಹಾಗೂ ಎಲ್ಲಾ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳು ಒಂದೇ ಮಹತ್ವ ಹೊಂದಿವೆ. ಹಾಗಾಗಿ, ಎಲ್ಲಾ ಜಿಲ್ಲೆಗಳು ಮತ್ತು ವಿಶ್ವವಿದ್ಯಾಲಯಗಳ ಹಿತಾಸಕ್ತಿಯನ್ನು ಗಮನಹರಿಸಿ ಸರ್ಕಾರ ನಿರ್ಧಾರ ಕೈಗೊಳ್ಳಲಿದೆ ಎಂದು ಸಚಿವರು ಹೇಳಿದರು.
ಕೃಷಿ ಕ್ಷೇತ್ರ ಸದೃಢಗೊಳಿಸಿ : ಕೃಷಿ ವಿಶ್ವವಿದ್ಯಾಲಯಗಳು ಸಂಶೋಧನೆ ಮತ್ತು ಪ್ರಾತ್ಯಕ್ಷಿಕೆಗಳಿಗೆ ಇನ್ನಷ್ಟು ಹೆಚ್ಚು ಆದ್ಯತೆ ನೀಡಬೇಕು. ರೈತರನ್ನು ತಾಂತ್ರಿಕವಾಗಿ ಸಶಕ್ತರನ್ನಾಗಿ ಮಾಡಿ ಕೃಷಿ ಕ್ಷೇತ್ರವನ್ನು ಸದೃಢಗೊಳಿಸಬೇಕು. ನಿಶ್ಚಿತ, ಲಾಭದಾಯಕ ಉದ್ಯಮವನ್ನಾಗಿ ಪರಿವರ್ತಿಸಬೇಕು ಎಂದು ಸೂಚನೆ ನೀಡಿದರು.