ಬೆಳಗಾವಿ: "ಡಾ.ಬಿ.ಆರ್.ಅಂಬೇಡ್ಕರ್ ಅವರ ದೂರದೃಷ್ಟಿ, ಚಿಂತನೆಯ ಫಲವಾಗಿ ನಾವಿಂದು ಜಗತ್ತಿಗೆ ಮಾದರಿಯಾದ ಸಂವಿಧಾನದ ವಾರಸುದಾರರಾಗಿದ್ದೇವೆ. ಪರಕೀಯರ ಆಡಳಿತದಲ್ಲಿದ್ದ ಭಾರತವು ಕೇವಲ 75 ವರ್ಷಗಳಲ್ಲಿ ಜಗತ್ತಿನ ಅತ್ಯಂತ ಬಲಿಷ್ಠ ಪ್ರಜಾತಂತ್ರ ರಾಷ್ಟ್ರವಾಗಿ ಹೊರಹೊಮ್ಮಲು ಈ ಸಂವಿಧಾನವೇ ಬುನಾದಿಯಾಗಿದೆ ಎಂದರೆ ತಪ್ಪಾಗಲಾರದು. ಸಾಮಾಜಿಕ ನ್ಯಾಯ, ಸಮಾನತೆ, ವ್ಯಕ್ತಿ ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯಗಳು ನಮ್ಮ ಸಂವಿಧಾನ ನಮಗೆ ಕಲ್ಪಿಸಿಕೊಟ್ಟ ಬಹುದೊಡ್ಡ ಕೊಡುಗೆಗಳಾಗಿವೆ" ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 75ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಹಾತ್ಮಾ ಗಾಂಧೀಜಿ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಗೌರವ ಸಲ್ಲಿಸಿ, ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. "ಬೆಳಗಾವಿ ಜಿಲ್ಲೆ ಚಾರಿತ್ರಿಕವಾಗಿ ತನ್ನದೇ ಆದ ಮಹತ್ವವನ್ನು ದಾಖಲಿಸಿದೆ. ರಾಷ್ಟ್ರ ಭಕ್ತಿಯು ಜಿಲ್ಲೆಯ ಜನತೆಯ ನರನಾಡಿಗಳಲ್ಲಿ ಹರಿದಾಡುತ್ತಿದೆ. ಈ ನೆಲವು ಗಾಂಧೀಜಿ, ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರಂತಹ ಮಹಾತ್ಮರು ನಡೆದಾಡಿದ ನೆಲವಾಗಿದೆ. ಕಿತ್ತೂರು ಚನ್ನಮ್ಮ, ಸಂಗೊಳ್ಳಿ ರಾಯಣ್ಣರು ಸ್ವಾಭಿಮಾನಕ್ಕಾಗಿ ಆತ್ಮಸಮರ್ಪಣೆ ಮಾಡಿಕೊಂಡ ನೆಲ. ಶರಣರು ನಡೆದಾಡಿದ ತಪೋಭೂಮಿ ಇದು" ಎಂದು ಹೇಳಿದರು.
"ಈ ಗಣರಾಜ್ಯ ದಿನವು ದೇಶದ ನಾಗರಿಕರಿಗೆ ತನ್ನ ರಾಷ್ಟ್ರದ ಜವಾಬ್ದಾರಿಯನ್ನು ನೀಡಿದ ದಿನವಾಗಿದೆ. ನಮ್ಮ ಸಂವಿಧಾನವನ್ನು ಒಪ್ಪಿಕೊಂಡ ದಿನವಿದು. ಗಣತಂತ್ರ ವ್ಯವಸ್ಥೆಯು ಭಾರತೀಯರಿಗೆ ಸಾರ್ವಭೌಮಾಧಿಕಾರವನ್ನು ಕಲ್ಪಿಸಿಕೊಟ್ಟ ದಿನವಾಗಿದೆ. ಡಾ. ಬಿ.ಆರ್.ಅಂಬೇಡ್ಕರ್ ಅವರಂತಹ ಮಹಾನ್ ಮಾನವತಾವಾದಿಗಳು ರಾಷ್ಟ್ರದ ಅಭಿವೃದ್ಧಿಯ ಬಗೆಗೆ ಹಗಲಿರುಳು ಎನ್ನದೇ ಚಿಂತಿಸಿ ರಚಿಸಿದ ಸಂವಿಧಾನ ಭವ್ಯಭಾರತಕ್ಕೆ ದಾರಿದೀಪವಾಗಿದೆ" ಎಂದರು.
"ಗಣರಾಜ್ಯೋತ್ಸವದ ಹೊಸ್ತಿಲಿನಲ್ಲಿ ಜನವರಿ 18, 2024 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ, ಇಡೀ ಜಗತ್ತಿಗೆ ಸಾಂಸ್ಕೃತಿಕ, ಸಾಮಾಜಿಕ ಮತ್ತು ರಾಜಕೀಯ ಚಿಂತನೆಗಳಿಗೆ ಹೊಸ ದಿಕ್ಕು ನೀಡಿದ ವಚನ ಚಳವಳಿಯ ನಾಯಕ ಬಸವಣ್ಣ ಅವರನ್ನು ನಮ್ಮ ಸರ್ಕಾರವು "ಕರ್ನಾಟಕದ ಸಾಂಸ್ಕೃತಿಕ ನಾಯಕ" ಎಂದು ಘೋಷಿಸಲಾಗಿದೆ. ಇದಲ್ಲದೇ ಸ್ವಾತಂತ್ರ್ಯದ ಬೆಳ್ಳಿಚುಕ್ಕಿ ಎಂದು ಗುರುತಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮ ಅವರ ಗೌರವಾರ್ಥ ಕಿತ್ತೂರು ತಾಲೂಕನ್ನು "ಚನ್ನಮ್ಮನ ಕಿತ್ತೂರು" ಎಂದು ಮರು ನಾಮಕರಣ ಕೂಡ ಮಾಡಲಾಗಿದೆ."