ಬೆಂಗಳೂರು:ನಮ್ಮ ಮೆಟ್ರೋ ಕಾಮಗಾರಿ ಹಿನ್ನೆಲೆಯಲ್ಲಿ ಬನ್ನೇರುಘಟ್ಟ ಮುಖ್ಯ ರಸ್ತೆಯ ಉತ್ತರ ದಿಕ್ಕಿನಲ್ಲಿರುವ ಮೈಕೋ ಸಿಗ್ನಲ್‌ನಿಂದ ಆನೆಪಾಳ್ಯ ಜಂಕ್ಷನ್‌ವರೆಗೆ ಸೋಮವಾರ ಏಪ್ರಿಲ್ 1ರಿಂದ 30 ಮಾರ್ಚ್ 2025 ರವರೆಗೆ ವಾಹನ ಸಂಚಾರ ನಿರ್ಬಂಧಿಸಲಾಗಿದೆ ಎಂದು ಬಿಎಂಆರ್ಸಿಎಲ್ ತಿಳಿಸಿದೆ.
ಲಕ್ಕಸಂದ್ರ ಸುರಂಗ ಮೆಟ್ರೋ ನಿಲ್ದಾಣದ ಕಾಮಗಾರಿ ನಡೆಯುವ ಕಾರಣ ಬನ್ನೇರುಘಟ್ಟ ಮುಖ್ಯರಸ್ತೆಯ ಉತ್ತರ ದಿಕ್ಕಿನ ಮಾರ್ಗ ಮತ್ತು ಮೈಕೋ ಸಿಗ್ನಲ್‌ನಿಂದ ಆನೆಪಾಳ್ಯ ಜಂಕ್ಷನ್‌ವರೆಗೆ ಸಂಚಾರವನ್ನು ಒಂದು ವರ್ಷಗಳ ಕಾಲ ಬಂದ್ ಮಾಡಲಾಗುತ್ತಿದೆ. ವಾಹನ ಸವಾರರ ಅನುಕೂಲಕ್ಕಾಗಿ ಪರ್ಯಾಯ ಮಾರ್ಗಗಳನ್ನು ಸೂಚಿಸಲಾಗಿದೆ.
ಬನ್ನೇರುಘಟ್ಟ ಮುಖ್ಯ ರಸ್ತೆಯಲ್ಲಿ ಡೈರಿ ಸರ್ಕಲ್ ಕಡೆಯಿಂದ ಚಲಿಸುವ ವಾಹನಗಳು ಹಾಗೂ ಆನೆಪಾಳ್ಯ ಜಂಕ್ಷನ್ ಕಡೆಗೆ ತೆರಳಬೇಕಾದ ವಾಹನಗಳು ಮೈಕೋ ಸಿಗ್ನಲ್‌ನಲ್ಲಿ ಬಲಕ್ಕೆ ತಿರುಗಿ, ಬಾಷ್ ಲಿಂಕ್ ರಸ್ತೆಯ ಮೂಲಕ ಆಡುಗೋಡಿ ಸಿಗ್ನಲ್ ತಲುಪಿ, ಬಳಿಕ ಎಡಕ್ಕೆ ತಿರುಗಿ ಚಲಿಸಬೇಕು. ಹಾಗೆಯೇ ಡೈರಿ ಸರ್ಕಲ್‌ನಿಂದ ಶಾಂತಿನಗರ ಕಡೆಗೆ ಚಲಿಸುವ ವಾಹನಗಳು ವಿಲ್ಸನ್ ಗಾರ್ಡನ್‌ನ 7ನೇ ಮುಖ್ಯ ರಸ್ತೆಯಲ್ಲಿ ಎಡಕ್ಕೆ ತಿರುವು ತೆಗೆದುಕೊಳ್ಳಬೇಕು. ಆನೆಪಾಳ್ಯ ಜಂಕ್ಷನ್‌ನಿಂದ ಡೈರಿ ಸರ್ಕಲ್ ಕಡೆಗೆ ತೆರಳುವ ವಾಹನ ಸಂಚಾರದಲ್ಲಿ ಯಾವುದೇ ಮಾರ್ಗ ಬದಲಾವಣೆ ಇಲ್ಲ ಎಂದು ಬಿಎಂಆರ್ಸಿಎಲ್ ಮಾಹಿತಿ ನೀಡಿದೆ.
ಇದನ್ನೂ ಓದಿ:ಬೆಂಗಳೂರು: ಐಪಿಎಲ್ ಪಂದ್ಯಾವಳಿಗಳಿಗೆ "ನಮ್ಮ ಮೆಟ್ರೋ" ಸೇವಾವಧಿ ವಿಸ್ತರಣೆ - Namma metro service Extension