ಬೆಂಗಳೂರು: ಪೂರ್ವ ವಲಯ ವ್ಯಾಪ್ತಿಯಲ್ಲಿ ಬರುವ ರಸ್ತೆ ಗುಂಡಿಗಳನ್ನು ತ್ವರಿತಗತಿಯಲ್ಲಿ ಮುಚ್ಚಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಪಾಲಿಕೆಯ ಪೂರ್ವ ವಲಯ ಆಯುಕ್ತ ಸ್ನೇಹಲ್ ತಿಳಿಸಿದರು.
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆದೇಶ ಹಾಗೂ ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ನಿರ್ದೇಶನದಂತೆ ನಗರದಾದ್ಯಂತ ರಸ್ತೆ ಗುಂಡಿಗಳನ್ನು ಯುದ್ದೋಪಾದಿಯಲ್ಲಿ ಮುಚ್ಚಲಾಗುತ್ತಿದೆ. ಈ ಸಂಬಂಧ ಪೂರ್ವ ವಲಯ ಶಿವಾಜಿನಗರ ವ್ಯಾಪ್ತಿಯಲ್ಲಿ ಬರುವ ತಿಮ್ಮಯ್ಯ ರಸ್ತೆಯಲ್ಲಿ ಸೋಮವಾರ ಗುಂಡಿಗಳನ್ನು ಮುಚ್ಚುವ ಕಾರ್ಯವನ್ನು ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸ್ನೇಹಲ್, ಪಾಲಿಕೆ ವತಿಯಿಂದ ನಿರಂತರವಾಗಿ ರಸ್ತೆಗುಂಡಿಗಳನ್ನು ಮುಚ್ಚಲಾಗುತ್ತಿದೆ. ಆದರೆ, ಸಮರ್ಪಕವಾಗಿ ಕೆಲಸ ಮಾಡುತ್ತಿಲ್ಲ ಎಂದು ನಾಗರಿಕರಿಂದ ದೂರುಗಳು ಬರುತ್ತಿರುವ ಹಿನ್ನೆಲೆಯಲ್ಲಿ ಎಲ್ಲ ಅಧಿಕಾರಿಗಳು ರಸ್ತೆಗಳು ರಸ್ತೆಗಿಳಿದು ಪರಿಶೀಲಿಸಿ, ರಸ್ತೆ ಗುಂಡಿಗಳನ್ನು ಮುಚ್ಚುವ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು.
ಕಾಲಮಿತಿಯೊಳಗೆ ಗುಂಡಿ ಮುಚ್ಚುವ ಕೆಲಸ:ಪೂರ್ವ ವಲಯ ವ್ಯಾಪ್ತಿಯಲ್ಲಿ 258.59 ಕಿ.ಮೀ ಆರ್ಟಿರಿಯಲ್ ಹಾಗೂ ಸಬ್ ಆರ್ಟಿರಿಯಲ್ ರಸ್ತೆಗಳಿದ್ದು, 1394 ಕಿ.ಮೀ ಉದ್ದದ ವಾರ್ಡ್ ರಸ್ತೆಗಳು ಸೇರಿದಂತೆ ಒಟ್ಟು 1652.59 ಉದ್ದದ ರಸ್ತೆಗಳಿವೆ. ಕಳೆದ 1 ವರ್ಷದಲ್ಲಿ 2,390 ರಸ್ತೆ ಗುಂಡಿಗಳು ಮುಚ್ಚಲಾಗಿದೆ. ರಸ್ತೆ ಗುಂಡಿ ಗಮನ ತಂತ್ರಾಂಶದಲ್ಲಿ ಬರುತ್ತಿರುವ ದೂರುಗಳನ್ನು ಕಾಲಮಿತಿಯೊಳಗಾಗಿ ಮುಚ್ಚುವ ಕೆಲಸ ಮಾಡಲಾಗುತ್ತಿದೆ ಎಂದರು.
ಪೂರ್ವ ವಲಯಕ್ಕೆ ಸಂಬಂಧಿಸಿದಂತೆ ರಸ್ತೆ ಗುಂಡಿ ಗಮನ ತಂತ್ರಾಂಶದಲ್ಲಿ ಕಳೆದ ಏಪ್ರಿಲ್ 2024ರಿಂದ ಇದುವರೆಗೆ ವಾರ್ಡ್ ರಸ್ತೆಗಳಲ್ಲಿ 494 ದೂರುಗಳು ಹಾಗೂ ಪ್ರಮುಖ ರಸ್ತೆಗಳಲ್ಲಿ 537 ದೂರುಗಳು ದಾಖಲಾಗಿದೆ. ಒಟ್ಟಾರೆ, 1,031 ದೂರುಗಳ ಪೈಕಿ ವಾರ್ಡ್ ರಸ್ತೆಗಳಲ್ಲಿನ 133 ಹಾಗೂ ಪ್ರಮುಖ ರಸ್ತೆಗಳಲ್ಲಿನ 132 ಗುಂಡಿಗಳು ಸೇರಿ 265 ಗುಂಡಿಗಳನ್ನು ಮುಚ್ಚಲಾಗಿದೆ. ಬಾಕಿಯಿರುವ 766 ಗುಂಡಿಗಳನ್ನು ಕಾಲಮಿತಿಯೊಳಗಾಗಿ ಮುಚ್ಚಲಾಗುವುದು ಎಂದು ತಿಳಿಸಿದರು.