ಬೆಂಗಳೂರು: ಬಡತನ ರೇಖೆಗಿಂತಲೂ ಕೆಳ ವರ್ಗದವರಿಗಾಗಿ ರೂಪಿಸಲಾಗಿರುವ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಹೋಟೆಲ್‌ಗಳಿಗೆ ಮಾರಾಟ ಮಾಡುವ ಮಾಫಿಯಾದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಹೈಕೊರ್ಟ್, ಈ ರೀತಿಯ ಆರೋಪಿಗಳ ವಿರುದ್ಧ ಆಯಾ ಜಿಲ್ಲಾಧಿಕಾರಿಗಳು ನಿಗಾ ವಹಿಸಿ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಮುಂದಾಗಬೇಕು ಎಂದು ತಿಳಿಸಿದೆ.
ಪ್ರಕರಣವೊಂದರ ವಿಚಾರಣೆ ವೇಳೆ ನ್ಯಾಯಮೂರ್ತಿ ವಿ.ಶ್ರೀಶಾನಂದ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ಈ ಕುರಿತಂತೆ ತೀವ್ರ ಅಸಮಾಧಾನ ವ್ಯಕ್ತಪಡಿಸಿತಲ್ಲದೆ, ಅಕ್ಕಿ ಕಳ್ಳಸಾಗಣೆ ಮಾಡುವ ಡಾನ್ಗಳನ್ನು ರಾಜಕಾರಣಿಗಳು ರಕ್ಷಿಸಲು ಮುಂದಾಗಿ ಅವರ ಬೆನ್ನಿಗೆ ನಿಲ್ಲುತ್ತಾರೆ ಎಂದು ಬೇಸರ ವ್ಯಕ್ತಪಡಿಸಿದರು.
ಕಳ್ಳಸಾಗಣೆದಾರರು ಸರಕುಪಟ್ಟಿ, ಸಿ ಫಾರಂ ಮತ್ತು ರಸೀದಿಯಂತಹ ಅಗತ್ಯ ದಾಖಲೆಗಳಿಲ್ಲದೆ ಅಕ್ಕಿಯನ್ನು ಲಾರಿಗಳಲ್ಲಿ ಒಂದು ಕಡೆಯಿಂದ ಮತ್ತೊಂದು ಕಡೆಗೆ ಸಾಗಿಸುತ್ತಾರೆ. ಇಂತಹವರನ್ನು ಪತ್ತೆ ಹಚ್ಚಿದಾಗ ಅವರ ವಿರುದ್ಧ ತಕ್ಕ ಕ್ರಮ ಕೈಗೊಳ್ಳುವ ಅಧಿಕಾರ ಸ್ಥಳೀಯ ಜಿಲ್ಲಾಧಿಕಾರಿಗಳಿಗೆ ಇರುತ್ತದೆ. ಆದರೆ, ಅವರನ್ನು ಬಚಾವು ಮಾಡುವಂತಹ ವ್ಯವಸ್ಥೆ ಜೊತೆಯಲ್ಲಿಯೇ ಇರಲಿದೆ ಎಂದು ಪೀಠ ಅಸಮಾಧಾನ ವ್ಯಕ್ತಪಡಿಸಿತು.