ಬೆಂಗಳೂರು: ಮಹತ್ವದ ಬೆಳವಣಿಗೆಯಲ್ಲಿ ಕರ್ನಾಟಕ ಮಾಧ್ಯಮ ಅಕಾಡೆಮಿಗೆ ಹಿರಿಯ ಪತ್ರಕರ್ತೆ ಆಯೇಷಾ ಖಾನಂ ಅವರನ್ನು ಅಧ್ಯಕ್ಷರನ್ನಾಗಿ ಸರ್ಕಾರ ನೇಮಕ ಮಾಡಿದೆ. ಈ ಬಾರಿ ಯಾರನ್ನು ನೇಮಿಸಬೇಕು ಎನ್ನುವ ಚರ್ಚೆ ಬಂದಾಗ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಆಯೇಷಾ ಖಾನಂ ಅವರ ಹೆಸರನ್ನು ಸೂಚಿಸಿ ಇವರನ್ನೇ ಮಾಡುವುದು ಸೂಕ್ತ ಎನ್ನುವ ಅಭಿಪ್ರಾಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಎದುರಿಗೆ ವ್ಯಕ್ತಪಡಿಸಿದ್ದರು.
ಇವತ್ತಿನವರೆಗೂ ಮಾಧ್ಯಮ ಅಕಾಡೆಮಿಗೆ ಅಲ್ಪಸಂಖ್ಯಾತ ಸಮುದಾಯದವರನ್ನು ಮತ್ತು ಮಹಿಳೆಯನ್ನು ಯಾವ ಮುಖ್ಯಮಂತ್ರಿಗಳೂ ನೇಮಿಸಿಲ್ಲ. ಈ ಕೊರತೆಯನ್ನು ನೀವು ಅಳಿಸಿದಂತಾಗುತ್ತದೆ. ಜೊತೆಗೆ ಆಯೇಷಾ ಅವರು ಕಲ್ಯಾಣ ಕರ್ನಾಟಕದ ಕಲಬುರಗಿ ಜಿಲ್ಲೆಯವರಾಗಿರುವುದರಿಂದ ಸಾಮಾಜಿಕ ನ್ಯಾಯ, ಪ್ರಾದೇಶಿಕ ನ್ಯಾಯ, ಲಿಂಗ ಸಮಾನತೆಗೂ ಮಾನ್ಯತೆ ಕೊಟ್ಟಂತಾಗುತ್ತದೆ ಎನ್ನುವುದು ಕೆ.ವಿ.ಪ್ರಭಾಕರ್ ಅವರ ಅಭಿಪ್ರಾಯವಾಗಿತ್ತು.
ಈ ಅಭಿಪ್ರಾಯಕ್ಕೆ ಸಂಪೂರ್ಣ ಮನ್ನಣೆ ನೀಡಿದ ಮುಖ್ಯಮಂತ್ರಿಗಳು ಇತರ ಹಲವು ಅರ್ಹರ ಹೆಸರುಗಳ ನಡುವೆ ಆಯೇಷಾ ಅವರನ್ನು ಹೆಚ್ಚು ಅರ್ಹರು ಎಂದು ತೀರ್ಮಾನಿಸಿ ಆದೇಶ ಹೊರಡಿಸಲು ಸೂಚಿಸಿದರು.