ಕಾರವಾರ:ಉತ್ತರ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಅಂಕೋಲಾ ತಾಲೂಕಿನ ಶಿರೂರು ಬಳಿ ಗುಡ್ಡ ಕುಸಿದು ಒಟ್ಟು ಏಳು ಜನರು ಸಾವನ್ನಪ್ಪಿರುವ ಘಟನೆ ಇಂದು ನಡೆದಿದೆ.
ಈ ಬಗ್ಗೆ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮಾಹಿತಿ ನೀಡಿದ್ದು, ಭಾರಿ ಮಳೆಯಿಂದಾಗಿ ಗುಡ್ಡ ಕುಸಿದು ಬಿದ್ದಿದೆ. ಘಟನೆಯಲ್ಲಿ 7 ಮಂದಿ ಸಾವನ್ನಪ್ಪಿರುವುದಾಗಿ ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ. ಉಳಿದಂತೆ ಮಣ್ಣಿನಡಿ ಸಿಲುಕಿದವರಿಗಾಗಿ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ. ಪ್ರಸ್ತುತ ಜಿಲ್ಲೆಯಲ್ಲಿ ನಿರೀಕ್ಷೆಗೂ ಮೀರಿ ಎಲ್ಲೆಡೆ ಭಾರಿ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ಗುಡ್ಡ ಮತ್ತು ಮನೆ ಕುಸಿತದಂತಹ ಪ್ರಕರಣಗಳು ವರದಿಯಾಗುತ್ತಿವೆ. ಹೊರಗಡೆ ತಿರುಗಾಡುವವರು ಕೊಂಚ ಜಾಗೃತಿ ವಹಿಸುವಂತೆ ಸಂಸದರು ಮನವಿ ಮಾಡಿದ್ದಾರೆ.
ಪ್ರಸ್ತುತ ಘಟನಾ ಸ್ಥಳದಲ್ಲಿ ರಕ್ಷಣಾ ತಂಡಗಳು ಬೀಡು ಬಿಟ್ಟಿದ್ದು, ಗುಡ್ಡದಡಿ ಸಿಲುಕಿದವರ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಮಾಹಿತಿ ಪ್ರಕಾರ ಒಟ್ಟು 9 ಜನರು ಗುಡ್ಡದಡಿ ಸಿಲುಕಿದ್ದಾರೆ ಎಂದು ಶಂಕಿಸಲಾಗಿದೆ. ಈ ಪೈಕಿ ಈಗಾಗಲೇ 7 ಜನರು ಸಾವನ್ನಪ್ಪಿರುವುದಾಗಿ ಜಿಲ್ಲಾಧಿಕಾರಿ ತಿಳಿಸಿರುವುದಾಗಿ ಸಂಸದರು ಮಾಹಿತಿ ಹಂಚಿಕೊಂಡಿದ್ದಾರೆ.