ಕರ್ನಾಟಕ

karnataka

ETV Bharat / state

ಸಿಎಂ ಸಿಟಿ ರೌಂಡ್ಸ್: ರಾಜಕಾಲುವೆ ಕಾಮಗಾರಿಗಳ ಪರಿಶೀಲನೆ ಬಳಿಕ ಅಧಿಕಾರಿಗಳಿಗೆ ಸಿಎಂ ನೀಡಿದ ಸೂಚನೆಗಳೇನು? - Siddaramaiah City Rounds

ಬೆಂಗಳೂರಿನ ನಾಯಂಡಹಳ್ಳಿ, ಬಿಟಿಎಂ ಮೆಟ್ರೋ ಸ್ಟೇಷನ್, ಕೋಡಿ ಚಿಕ್ಕನಹಳ್ಳಿ, ಸಿಲ್ಕ್‌ ಬೋರ್ಡ್‌, ಹೊಸೂರು ಮುಖ್ಯರಸ್ತೆ ಸೇರಿದಂತೆ ವಿವಿಧೆಡೆ ನಡೆದಿರುವ ರಾಜಕಾಲುವೆ ಕಾಮಗಾರಿ ಹಾಗೂ ಅಲ್ಲಿನ ಸಮಸ್ಯೆಗಳನ್ನು ಸಿಎಂ ಸಿದ್ದರಾಮಯ್ಯ ಖುದ್ದು ಪರಿಶೀಲಿಸಿದರು.

Inspection development work at various places
ಬೆಂಗಳೂರಿನ ವಿವಿಧೆಡೆ ನಡೆದ ಕಾಮಗಾರಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಪರಿಶೀಲಿಸಿದರು. (Etv Bharat)

By ETV Bharat Karnataka Team

Published : May 22, 2024, 3:48 PM IST

ಬೆಂಗಳೂರು:ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ನಗರ ಪ್ರದಕ್ಷಿಣೆ ಮಾಡಿ ವಿವಿಧೆಡೆ ರಾಜಕಾಲುವೆ ಹೂಳೆತ್ತುವ ಕಾಮಗಾರಿ ವೀಕ್ಷಿಸಿದರು. ಜೊತೆಗೆ ನಾನಾ ಕಾಮಗಾರಿ ಮತ್ತು ಮಳೆಯಿಂದ ಸಮಸ್ಯೆಗಳಿಗೆ ಒಳಗಾಗುವ ಪ್ರದೇಶಗಳಿಗೆ ಭೇಟಿ ನೀಡಿ ಅಧಿಕಾರಿಗಳಿಗೆ ಸಲಹೆ ಸೂಚನೆ ನೀಡಿದರು.

ನಾಯಂಡಹಳ್ಳಿ: ರಾಜಕಾಲುವೆಯಲ್ಲಿ ಮಳೆಗಾಲ ಪ್ರವಾಹ ಉಂಟಾಗುತ್ತಿದೆ. ಫ್ಲೈಓವರ್‌ ನಿರ್ಮಿಸಿದ್ದರಿಂದ ರಾಜಕಾಲುವೆಯ ವಿಸ್ತಾರ ಕಡಿಮೆ ಆಗಿದೆ.

ಮುಖ್ಯಮಂತ್ರಿಗಳು ಸೂಚನೆ: ನೀರು ಸರಾಗವಾಗಿ ಹರಿದುಹೋಗಲು ಹೆಚ್ಚುವರಿ ಕಾಲುವೆ ಅಗತ್ಯವಿದೆ. ಏಳುಕೋಟಿ ವೆಚ್ಚದ ಕಾಮಗಾರಿ ಅನುಮೋದನೆಯಾಗಿದ್ದು, ಹಣಕಾಸು ಇಲಾಖೆ ಹಾಗೂ ಕಂದಾಯ ಇಲಾಖೆ ಅನುಮೋದನೆ ಅಗತ್ಯವಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಅವರು ವಿವರಿಸಿದರು. ಅದರಂತೆ ಹಣಕಾಸು ಇಲಾಖೆ ಹಾಗೂ ಕಂದಾಯ ಇಲಾಖೆ ಅನುಮೋದನೆ ನೀಡಿ, ಕೂಡಲೇ ಬಿಬಿಎಂಪಿಯು ಕಾಮಗಾರಿ ಕೈಗೆತ್ತಿಕೊಳ್ಳಲು ಅನುವು ಮಾಡುವಂತೆ ಎರಡೂ ಇಲಾಖೆಗಳಿಗೆ ಸಿಎಂ ಸೂಚನೆ ನೀಡಿದರು.

ಬಿಟಿಎಂ ಮೆಟ್ರೋ ಸ್ಟೇಷನ್:ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರು ನಗರ ಸಂಚಾರ ಸ್ಥಳ ಪರಿಶೀಲನೆ ವೇಳೆ ಬಿಟಿಎಂ ಮೆಟ್ರೋಸ್ಟೇಷನ್‌ಗೆ ಭೇಟಿ ನೀಡಿದರು. ಮೇಲು ಸೇತುವೆ ರಸ್ತೆ ಹಾಗೂ ಮೆಟ್ರೋ ಮಾರ್ಗಗಳೆರಡೂ ಒಂದರ ಮೇಲೊಂದು ಇರುವ ಡಬಲ್‌ ಡೆಕ್ಕರ್‌ - 2ನೇ ಹಂತದ ವ್ಯವಸ್ಥೆಯನ್ನು ಮುಖ್ಯಮಂತ್ರಿಗಳು ಪರಿಶೀಲನೆ ನಡೆಸಿದರು. ಮೂರು ಕಿ.ಮೀ. ಉದ್ದದ ಈ ವ್ಯವಸ್ಥೆಯನ್ನು ವೀಕ್ಷಿಸಿದ ಮುಖ್ಯಮಂತ್ರಿಗಳು, ಸಂಚಾರ ದಟ್ಟಣೆ ನಿವಾರಣೆಗೆ ಈ ಡಬ್ಬಲ್ ಡೆಕರ್ ಮಾದರಿಯನ್ನು ನಗರದ ಇತರ ಭಾಗಗಳಲ್ಲಿಯೂ ಅಳವಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಿಲ್ಕ್‌ ಬೋರ್ಡ್‌ ಜಂಕ್ಷನ್‌ ಸಂಚಾರ ದಟ್ಟಣೆಗೆ ಪರಿಹಾರ ರೂಪವಾಗಿ ಈ ವ್ಯವಸ್ಥೆಯನ್ನು ಅಳವಡಿಸಲಾಗುತ್ತಿದೆ. ಇದಲ್ಲದೇ ಸುಗಮ ಸಂಚಾರಕ್ಕಾಗಿ, ಬಿಟಿಎಂನಿಂದ ಬನಶಂಕರಿ ಕಡೆಗೆ ಹೋಗುವಾಗ, ರಾಘವೇಂದ್ರ ಸ್ವಾಮಿ ಟೆಂಪಲ್‌ ಸರ್ಕಲ್‌, ಜಯನಗರ 5ನೇ ಬ್ಲಾಕ್‌ನಲ್ಲಿ ಅಂಡರ್‌ ಪಾಸ್‌ ನಿರ್ಮಾಣಕ್ಕೆ ಬೇಡಿಕೆ ಇದ್ದು, ಇಲ್ಲಿ ಅಂಡರ್‌ ಪಾಸ್‌ ನಿರ್ಮಿಸಲು ಅಧಿಕಾರಿಗಳಿಗೆ ಸ್ಥಳದಲ್ಲೇ ಸೂಚನೆ ನೀಡಿದರು.

ಒಣಗಿದ ಮರ ಯಾಕೆ ಬಿಟ್ಕೊಂಡಿದ್ದೀರಿ?: ಸಿಟಿ ರೌಂಡ್ಸ್ ವೇಳೆ ರಸ್ತೆ ಬದಿ ಇದ್ದ ಒಣ ಮರಗಳು ಸಿಎಂ ಕಣ್ಣಿಗೆ ಬಿದ್ದವು. ಈ ವೇಳೆ ಗರಂ ಆದ ಸಿಎಂ, ಒಣಗಿದ ಮರ ಯಾಕೆ ಬಿಟ್ಕೊಂಡಿದ್ದೀರಿ. ಅನಾಹುತ ಆಗ್ಲಿ ಅಂತನಾ ಎಂದು ಸಿಎಂ ಅಧಿಕಾರಿಗಳನ್ನು ಪ್ರಶ್ನಿಸಿದರು. ಬನಶಂಕರಿ 2ನೇ ಹಂತದ ವಿಭಾಗದಲ್ಲಿರುವ 100 ft. ರಸ್ತೆಯ ಒಣಗಿದ ಮರಗಳನ್ಮು ತೆರವುಗೊಳಿಸಬೇಕು. ನಗರದಾದ್ಯಂತ ಇರುವ ಒಣಮರ, ಅಪಾಯಕಾರಿ ಮರಗಳನ್ನು ತೆರವುಗೊಳಿಸಬೇಕು, ನಗರ ಸೌಂದರ್ಯಕ್ಕೆ ಹೆಚ್ಚು ಒತ್ತು ಕೊಡಬೇಕು, ಪದ್ಮನಾಭನಗರ ಫ್ಲೈಓವರ್ ಬಳಿ ಹಾನಿಯಾಗಿರುವ ಫುಟ್ ಪಾತ್ ಶೀರ್ಘವಾಗಿ ದುರಸ್ತಿಗೊಳಿಸಲು ಹಾಗೂ ಮೆಟ್ರೋ ಮತ್ತು ಫ್ಲೈ ಓವರ್ ಕಾಮಗಾರಿಯಿಂದಾಗಿ ಅಲ್ಲಲ್ಲಿ ಹಾಕಲಾಗಿದ್ದ ಡೆಬ್ರಿಸ್​ಗಳನ್ನು ಆಗಿಂದಾಗಲೇ ತೆರವುಗೊಳಿಸಲು ಸಿಎಂ ಸೂಚನೆ ನೀಡಿದರು.

ಕೋಡಿ ಚಿಕ್ಕನಹಳ್ಳಿ:ರಾಜಕಾಲುವೆಯಿಂದ ನೀರು ಹೊರಗೆ ಹರಿದು ಮನೆಗಳಿಗೆ ನುಗ್ಗುವ ಸಮಸ್ಯೆ

ಮುಖ್ಯಮಂತ್ರಿಗಳು ನೀಡಿದ ಸೂಚನೆ:ಇಲ್ಲಿನ ಪ್ರವಾಹ ನಿಯಂತ್ರಣಕ್ಕೆ ಜಾಕ್‌ವೆಲ್‌ ಮೂಲಕ ರಾಜಕಾಲುವೆಯಿಂದ ಹೊರ ಬರುವ ನೀರನ್ನು ಪಂಪ್‌ ಮಾಡಿ ಮಡಿವಾಳ ಕೆರೆಗೆ ಹರಿಸಲು ಸೂಚನೆ ನೀಡಿದರು. 4.3 ಕೋಟಿ ರೂ ವೆಚ್ಚದ ಈ ಕಾಮಗಾರಿಯನ್ನು ಬೇಗನೆ ಪ್ರಾರಂಭಿಸಲು ಸೂಚಿಸಿದರು.

ಸಿಲ್ಕ್‌ ಬೋರ್ಡ್‌, ಹೊಸೂರು ಮುಖ್ಯರಸ್ತೆ:ಮಟ್ರೋ ಕಾಮಗಾರಿಯಿಂದಾಗಿ ಮಳೆನೀರು ಚರಂಡಿ ವಿಸ್ತೀರ್ಣ ಕಡಿಮೆಯಾಗಿ, ಪ್ರವಾಹ ಪರಿಸ್ಥಿತಿ ಉಂಟಾಗುತ್ತಿದೆ.
ಮುಖ್ಯಮಂತ್ರಿಗಳ ಸೂಚನೆ: ಪರಿಹಾರಕ್ಕೆ ಪರ್ಯಾಯ ವ್ಯವಸ್ಥೆ ಮಾಡಲು 4.5 ಕೋಟಿ ಕಾಮಗಾರಿ ಅಗತ್ಯವಿದೆ ಹಾಗೂ ಸರ್ಕಾರದ ಉನ್ನತಾಧಿಕಾರ ಸಮಿತಿಯ ಅನುಮತಿ ಅಗತ್ಯವಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ವಿವರಿಸಿದರು.

ಪರ್ಯಾಯ ವ್ಯವಸ್ಥೆಯ ಕಾಮಗಾರಿ ಕೈಗೊಳ್ಳಲು ಸಮ್ಮತಿಸಿದ ಮುಖ್ಯಮಂತ್ರಿಗಳು, ಮುಂದಿನ ಉನ್ನತಾಧಿಕಾರ ಸಮಿತಿ ಸಭೆಯ ಮುಂದೆ ಮಂಡಿಸಲು ಸೂಚಿಸಿದರು. ಜೊತೆಗೆ ಈ ಯೋಜನೆಯನ್ನು ಮುಂದಿನ 10 -15 ವರ್ಷಗಳ ಪರಿಣಾಮವನ್ನು ಗಮನದಲ್ಲಿರಿಸಿಕೊಂಡು ಕ್ರಿಯಾ ಯೋಜನೆ ರೂಪಿಸಲು ಸೂಚಿಸಿದರು. ಹೆಚ್ಚುವರಿ ಅನುದಾನ ನೀಡುವ ಬಗ್ಗೆ ಪರಿಶೀಲಿಸಲಾಗುವುದು ಎಂದು ತಿಳಿಸಿದರು.

ಇದನ್ನೂ ಓದಿ:ಹೆಚ್ಚಿನ ಪರಿಹಾರ ಪಡೆಯಲೆಂದು ಕೆಐಎಡಿಬಿ ಜಾಗದಲ್ಲಿ ಗಿಡ-ಮರ ನೆಟ್ಟ ಜನರು: ತನಿಖೆಗೆ ಆದೇಶ - KIADB Order For Investigation

ABOUT THE AUTHOR

...view details