ಶಿರಸಿ (ಉತ್ತರ ಕನ್ನಡ):ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಭಾಗದ ಜೊತೆಗೆ ಘಟ್ಟದ ಮೇಲಿನ ತಾಲೂಕುಗಳಲ್ಲಿಯೂ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಪರಿಣಾಮ, ಅಂಕೋಲಾದ ಶಿರೂರಿನಲ್ಲಿ ಮಂಗಳವಾರ ಗುಡ್ಡ ಕುಸಿತ ದುರಂತ ಸಂಭವಿಸಿದ್ದು, ಶಿರಸಿ - ಕುಮಟಾ ರಾಷ್ಟ್ರೀಯ ಹೆದ್ದಾರಿಯಲ್ಲಿಯೂ ಕೂಡ ಧರೆ ಕುಸಿದು ರಸ್ತೆ ಸಂಚಾರ ಬಂದ್ ಆಗಿದೆ. ಮಣ್ಣು ತೆರವು ಕಾರ್ಯಾಚರಣೆ ಸಾಗಿದೆ.
ಪ್ರತಿದಿನ ಸಾವಿರಾರು ವಾಹನಗಳು ಸಂಚರಿಸುವ ಶಿರಸಿ - ಕುಮಟಾ ರಾಷ್ಟ್ರೀಯ ಹೆದ್ದಾರಿಯ ರಾಗಿಹೊಸಳ್ಳಿ ಬಳಿ ದೊಡ್ಡ ಪ್ರಮಾಣದಲ್ಲಿ ಧರೆ ಕುಸಿತವಾಗಿದ್ದರಿಂದ ವಾಹನ ಸಂಚಾರ ಸಂಪೂರ್ಣ ಬಂದ್ ಆಗಿದೆ. ಈ ರಸ್ತೆಯನ್ನು ರಾಜ್ಯ ಹೆದ್ದಾರಿಯಿಂದ ರಾಷ್ಟ್ರೀಯ ಹೆದ್ದಾರಿಯಾಗಿ ಮೇಲ್ದರ್ಜೆಗೆ ಏರಿಸಲಾಗಿದ್ದು, ಸಾಗರಮಾಲಾ ಯೋಜನೆ ಅಡಿ ಆರ್.ಎನ್.ಎಸ್. ಕಂಪನಿಯಿಂದ ಕಾಮಗಾರಿ ಮಾಡಲಾಗುತ್ತಿದೆ. ಕೆಲವೆಡೆ ಗುಡ್ಡಗಳನ್ನು ಕಡಿದು ರಸ್ತೆ ಅಗಲೀಕರಣ ಮಾಡಿದ್ದು, ಪರಿಣಾಮ ಧರೆ ಕುಸಿತ ಸಂಭವಿಸಿದೆ. ಮುಖ್ಯವಾಗಿ ಜಿಲ್ಲೆಯ ಘಟ್ಟದ ಮೇಲಿನ ಭಾಗವನ್ನು ಕರಾವಳಿಗೆ ಸೇರಿಸುವ ರಸ್ತೆ ಇದಾಗಿದ್ದು, ಈಗ ಪರ್ಯಾಯ ಮಾರ್ಗದಲ್ಲಿ ಸಂಚರಿಸುವ ಸ್ಥಿತಿ ಎದುರಾಗಿದೆ.