ಬೆಂಗಳೂರು:ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪದಡಿ ಬಂಧಿತನಾಗಿರುವ ಹಾಸನ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಸಿಐಡಿ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎರಡನೇ ಪ್ರಕರಣ ಸಂಬಂಧ ಎಸ್ಐಟಿ ಅಧಿಕಾರಿಗಳು ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.
ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಪ್ರಜ್ವಲ್ ವಿರುದ್ಧ 1,652 ಪುಟಗಳ ಆರೋಪಪಟ್ಟಿ ಸಲ್ಲಿಸಲಾಗಿದೆ. ಸಿಐಡಿ ಸೈಬರ್ ಕ್ರೈಂ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ಹಸ್ತಾಂತರಿಸಿಕೊಂಡು ತನಿಖೆ ಕೈಗೊಂಡ ವಿಶೇಷ ತನಿಖಾ ತಂಡವು ಪ್ರಕರಣಕ್ಕೆ ಪೂರಕವಾದ ಒಟ್ಟು 113 ಸಾಕ್ಷಿದಾರರನ್ನು ಪ್ರಾಸಿಕ್ಯೂಷನ್ ಪರ ಸಾಕ್ಷಿದಾರರನ್ನಾಗಿ ಪರಿಗಣಿಸಿ ವಿಚಾರಣೆಗೆ ಒಳಪಡಿಸಲಾಗಿದೆ. ಜೊತೆಗೆ, ನಾಗರಿಕ ಅಪರಾಧ ಸಂಹಿತೆ ಸಿಆರ್‌ಪಿಸಿ - 161ರಡಿ ದಾಖಲಿಸಿ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗಿದೆ. ಪ್ರಕರಣದ ಸಂತ್ರಸ್ತೆ ಮತ್ತು ಪ್ರಕರಣದ ಪ್ರಮುಖ ಸಾಕ್ಷಿದಾರರ ಹೇಳಿಕೆಗಳನ್ನು ಕಲಂ-164 ಸಿಆರ್‌ಪಿಸಿ ಅಡಿ ನ್ಯಾಯಾಧೀಶರ ಮುಂದೆ ದಾಖಲಿಸಲಾಗಿದೆ.