ಬೆಂಗಳೂರು: ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಹಾಗೂ ಅವರ ಪುತ್ರ, ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ಎಸ್‌ಐಟಿ ಅಧಿಕಾರಿಗಳು ಇಂದು ನೋಟಿಸ್ ನೀಡಿದ್ದಾರೆ.
ಹಾಸನದ ಹೊಳೆನರಸೀಪುರ ಟೌನ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣ ಸಂಬಂಧ ಎಸ್ಐಟಿ ತಂಡ ಮಾಹಿತಿ ಕಲೆಹಾಕಿತ್ತು. ಈ ಪ್ರಕರಣದಲ್ಲಿ ಆರೋಪಿಗಳ ಹೇಳಿಕೆ ಅಗತ್ಯವಿರುವ ಹಿನ್ನೆಲೆಯಲ್ಲಿ ಸಿಆರ್‌ಪಿಸಿ 41(A)ಯಡಿ ಇಬ್ಬರಿಗೂ ನೋಟಿಸ್ ನೀಡಲಾಗಿದೆ. ನೋಟಿಸ್ ತಲುಪಿದ 24 ಗಂಟೆಯೊಳಗೆ ವಿಚಾರಣೆಗೆ ಹಾಜರಾಗಬೇಕೆಂದು ಸೂಚಿಸಲಾಗಿದೆ ಎಂದು ಎಸ್‌ಐಟಿ ಮೂಲಗಳು ತಿಳಿಸಿವೆ.
ಇದನ್ನೂ ಓದಿ:ಜೆಡಿಎಸ್ ಪಕ್ಷದಿಂದ ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅಮಾನತು: ಕಾಂಗ್ರೆಸ್ ವಿರುದ್ಧ ಹೆಚ್ಡಿಕೆ ವಾಗ್ದಾಳಿ - HASSAN PENDRIVE CASE
ಜೆಡಿಎಸ್ ಪಕ್ಷದಿಂದ ಇಂದು ಪ್ರಜ್ವಲ್ ರೇವಣ್ಣರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಜಿ.ಟಿ.ದೇವೇಗೌಡರ ಅಧ್ಯಕ್ಷತೆಯಲ್ಲಿ ಇಂದು ಹುಬ್ಬಳ್ಳಿಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು.
ಅಮಾನತು ಆದೇಶದ ವಿವರ:'ಪ್ರಜ್ವಲ್ ರೇವಣ್ಣ ಅವರು ಮಹಿಳೆಯರ ಮೇಲೆ ದೌರ್ಜನ್ಯ ಎಸಗಿದ್ದಾರೆ ಎನ್ನಲಾದ ವಿಡಿಯೋಗಳು ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಪಕ್ಷದ ಗೌರವಕ್ಕೆ ಧಕ್ಕೆ ಉಂಟಾಗಿದೆ. ಪ್ರಕರಣ ಸಂಬಂಧ ಸರ್ಕಾರ ಈಗಾಗಲೇ ಎಸ್ಐಟಿ ತನಿಖೆಗೆ ಆದೇಶಿಸಿದೆ. ಈ ಹಿನ್ನೆಲೆಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರ ಅನುಮೋದನೆಯೊಂದಿಗೆ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಪಕ್ಷದಿಂದ ಅಮಾನತುಗೊಳಿಸಲಾಗಿದೆ' ಎಂದು ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಕೆ.ಆರ್.ಶಿವಕುಮಾರ್ ಅಮಾನತು ಆದೇಶದಲ್ಲಿ ತಿಳಿಸಿದ್ದಾರೆ.
ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಮಾತನಾಡಿ, "ಎಸ್ಐಟಿ ತನಿಖೆಯಲ್ಲಿ ಪ್ರಜ್ವಲ್ ತಪ್ಪಿತಸ್ಥ ಎಂದು ದೃಢಪಟ್ಟಲ್ಲಿ ಅವರನ್ನು ಪಕ್ಷದಿಂದ ಖಾಯಂ ಆಗಿ ಉಚ್ಚಾಟನೆ ಮಾಡಲಾಗುವುದು" ಎಂದು ಸ್ಪಷ್ಟವಾಗಿ ಹೇಳಿದರು. ಇದೇ ವೇಳೆ, ಪೆನ್ ಡ್ರೈವ್ ಹಂಚಿಕೆ ಹಿಂದೆ ಸರ್ಕಾರದ ನೇರ ಪಾತ್ರವಿದೆ ಎಂದು ಆರೋಪಿಸಿದ ಅವರು, ಮಾಧ್ಯಮಗೋಷ್ಟಿಯುದ್ದಕ್ಕೂ ಡಿಸಿಎಂ ಡಿಕೆಶಿ ಹಾಗೂ ಸಿಎಂ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಓದಿ:ಕುಮಾರಸ್ವಾಮಿ, ರೇವಣ್ಣ ಕೊಡಲೇ ಪ್ರಜ್ವಲ್ರನ್ನು ವಾಪಸ್ ಕರೆಸಿ ಪೊಲೀಸರ ವಶಕ್ಕೆ ಒಪ್ಪಿಸಬೇಕು: ದಿನೇಶ್ ಗುಂಡೂರಾವ್ - Hassan Pen Drive Case