ಬೆಂಗಳೂರು :ಲೈಂಗಿಕ ಕಿರುಕುಳ, ಅತ್ಯಾಚಾರ ಆರೋಪ ಎದುರಿಸುತ್ತಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಜಾಮೀನು ಮತ್ತು ನಿರೀಕ್ಷಣಾ ಜಾಮೀನು ಅರ್ಜಿಗಳ ವಿಚಾರಣೆಯನ್ನು ಇನ್‌ಕ್ಯಾಮರಾ ವಿಚಾರಣೆ (ಮುಚ್ಚಿದ ಕೊಠಡಿ) ನಡೆಸಬೇಕು ಎಂದು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಪರ ವಕೀಲರು ಹೈಕೋರ್ಟ್‌ಗೆ ಮನವಿ ಮಾಡಿದ್ದಾರೆ.
ಪ್ರಜ್ವಲ್ ರೇವಣ್ಣ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ನ್ಯಾಯಪೀಠಕ್ಕೆ ಎಸ್‌ಐಟಿ ಪರ ವಕೀಲರು ಮನವಿ ಮಾಡಿದರು. ವಿಚಾರಣೆ ವೇಳೆ ಹಾಜರಾಗಿದ್ದ ಎಸ್‌ಐಟಿ ಪರ ವಕೀಲರು, ಪ್ರಕರಣ ಸಂಬಂಧ ಎಸ್‌ಐಟಿ ತನಿಖೆ ನಡೆಸುತ್ತಿದ್ದು, ಕೆಲವು ಗಂಭೀರ ಅಂಶಗಳಿವೆ. ಹಾಗಾಗಿ ಅವುಗಳನ್ನು ನ್ಯಾಯಾಲಯದ ಗಮನಕ್ಕೆ ತರಲು ಮತ್ತು ಸಂತ್ರಸ್ತೆಯ ಗುರುತು ಮರೆಮಾಚುವ ಸಲುವಾಗಿ ಇನ್‌ಕ್ಯಾಮರಾ ವಿಚಾರಣೆ ನಡೆಸಬೇಕು ಎಂದು ಕೋರಿದರು. ಅದಕ್ಕೆ ಆಕ್ಷೇಪಿಸಿದ ಅರ್ಜಿದಾರರ ಪರ ವಕೀಲರು, ಎಸ್‌ಐಟಿ ಮನವಿ ಬಗ್ಗೆ ಪ್ರತಿಕ್ರಿಯಿಸಲು ಸ್ವಲ್ಪ ಕಾಲಾವಕಾಶ ನೀಡಬೇಕು ಎಂದು ಹೇಳಿದರು. ವಾದ ಆಲಿಸಿದ ಪೀಠ, ವಿಚಾರಣೆಯನ್ನು ಸೆ. 5 ಕ್ಕೆ ಮುಂದೂಡಿತು.