ಕರ್ನಾಟಕ

karnataka

ETV Bharat / state

ಬೆಂಗಳೂರಿಗೆ 'ಸಿಲಿಕಾನ್‌ ವ್ಯಾಲಿ ಆಫ್‌ ಇಂಡಿಯಾ' ಹೆಗ್ಗಳಿಕೆ ಬರಲು ಎಸ್‌‍.ಎಂ.ಕೃಷ್ಣ ಕೊಡುಗೆ ಅಪಾರ: ಸಿದ್ದರಾಮಯ್ಯ - CM SIDDARAMAIAH

ಮಾಜಿ ಮುಖ್ಯಮಂತ್ರಿ ಎಸ್​.ಎಂ.ಕೃಷ್ಣ ಇಂದು ವಿಧಿವಶರಾಗಿದ್ದು, ಬೆಳಗಾವಿಯಲ್ಲಿ ನಡೆಯುತ್ತಿರುವ ವಿದಾನಮಂಡಲದ ಚಳಿಗಾಲದ ಅಧಿವೇಶನದಲ್ಲಿ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದರು.

CM Siddaramaiah
ವಿಧಾನಸಭೆಯಲ್ಲಿ ಸಂತಾಪ ಸೂಚನಾ ನಿರ್ಣಯದ ಮೇಲೆ ಮಾತನಾಡಿದ ಸಿಎಂ ಸಿದ್ದರಾಮಯ್ಯ (ETV Bharat)

By ETV Bharat Karnataka Team

Published : Dec 10, 2024, 2:46 PM IST

ಬೆಳಗಾವಿ: "ಎಸ್.ಎಂ.ಕೃಷ್ಣ ಅವರು ಮುತ್ಸದ್ಧಿ, ದೂರದೃಷ್ಟಿ ಉಳ್ಳವರಾಗಿದ್ದರು. ದೀರ್ಘಕಾಲ ರಾಜಕಾರಣ ಮಾಡಿದವರು" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿಂದು ಗುಣಗಾನ ಮಾಡಿದರು.

ಸಂತಾಪ ಸೂಚನಾ ನಿರ್ಣಯದ ಮೇಲೆ ಮಾತನಾಡಿದ ಅವರು, "ನಾನು ವಿದ್ಯಾರ್ಥಿಯಾಗಿದ್ದಾಗ ಎಸ್.ಎಂ.ಕೃಷ್ಣ ಅವರು ಕರೆದಿದ್ದ ಪ್ರಜಾ ಸೋಷಿಯಲಿಸ್ಟ್ ಪಾರ್ಟಿಯ ಸಭೆಯಲ್ಲಿ ಭಾಗವಹಿಸಿದ್ದೆ. ಬಳಿಕ ನಾನು ಲೋಹಿಯಾ ಅವರ ಸಮಾಜವಾದಿ ಪಕ್ಷ ಸೇರ್ಪಡೆಯಾದೆ. ಎಸ್.ಎಂ.ಕೃಷ್ಣ ಅವರು 1962ರಲ್ಲೇ ಸ್ವತಂತ್ರವಾಗಿ ವಿಧಾನಸಭೆಗೆ ಸ್ಪರ್ಧಿಸಿದ್ದರು. ವಿಧಾನಸಭೆ, ವಿಧಾನ‌ ಪರಿಷತ್, ರಾಜ್ಯಸಭೆ, ಲೋಕಸಭೆ ನಾಲ್ಕೂ ಸದನಗಳ ಸದಸ್ಯರೂ ಆಗಿದ್ದು, ರಾಜ್ಯದ ಮುಖ್ಯಮಂತ್ರಿ, ವಿಧಾನಸಭೆ ಸ್ಪೀಕರ್, ಕೇಂದ್ರ ಸಚಿವರು ಹಾಗೂ ರಾಜ್ಯಪಾಲರೂ ಆಗಿದ್ದ ಅಪರೂಪದ ರಾಜಕಾರಣಿ" ಎಂದು ಬಣ್ಣಿಸಿದರು.

"ಎಸ್.ಎಂ.ಕೃಷ್ಣ ಮಹಾರಾಷ್ಟ್ರ ರಾಜ್ಯಪಾಲರಾಗಿದ್ದಾಗಲೇ ನಾನು ಕಾಂಗ್ರೆಸ್ ಸೇರಿದ್ದು. ಅವರು ರಾಜ್ಯಪಾಲರಾಗಿದ್ದಾಗ ನಾನು ಅವರನ್ನು ಭೇಟಿಯಾಗಿ, ಕಾಂಗ್ರೆಸ್ ಸೇರುವ ತೀರ್ಮಾನವನ್ನು ಅವರಿಗೆ ತಿಳಿಸಿದೆ. ಅವರು ನನ್ನ ತೀರ್ಮಾನವನ್ನು ಸ್ವಾಗತಿಸಿದ್ದರು. ಒಳ್ಳೆಯ ಸಂಸದೀಯ ಪಟು, ಎಲ್ಲರನ್ನೂ ಗೌರವದಿಂದ ಕಾಣುತ್ತಿದ್ದರು‌. ಯಾವತ್ತೂ ದ್ವೇಷದ ರಾಜಕಾರಣ ಮಾಡಿದವರಲ್ಲ. ಅವರ ಕಾಲದಲ್ಲಿ ಡಾ.ರಾಜ್ ಕುಮಾರ್ ಅವರ ಅಪಹರಣವಾಗಿ, ದೊಡ್ಡ ಸವಾಲನ್ನು ಎದುರಿಸಿದ್ದರು ಮತ್ತು ಅದನ್ನು ನಿಭಾಯಿಸಿದ್ದರು" ಎಂದು ಸ್ಮರಿಸಿದರು.

"ಬೆಂಗಳೂರನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಸಿಂಗಾಪುರದಂತೆ ಮಾಡಬೇಕೆನ್ನುವ ಉದ್ದೇಶ ಹೊಂದಿದ್ದರು. ಬೆಂಗಳೂರಿಗೆ ಸಿಲಿಕಾನ್ ವ್ಯಾಲಿ ಆಫ್ ಇಂಡಿಯಾ ಎನ್ನುವ ಹೆಗ್ಗಳಿಕೆ ಬರಲು ಕೃಷ್ಣ ಕೊಡುಗೆ ಅಪಾರ" ಎಂದು ಬಣ್ಣಿಸಿದರು.

"ಕಾಂಗ್ರೆಸ್ ಮೂಲಕ ಸುದೀರ್ಘ ರಾಜಕಾರಣ ಮಾಡಿ ಬಿಜೆಪಿ ಸೇರಿ ಒಂದು ವರ್ಷಕ್ಕೆ ರಾಜಕೀಯ ನಿವೃತ್ತಿ ಘೋಷಿಸಿದ ದಕ್ಷ ಆಡಳಿತಗಾರ, ಸಜ್ಜನ-ಮುತ್ಸದ್ಧಿ ರಾಜಕಾರಣಿಯಾಗಿದ್ದರು" ಎಂದರು.

ಪ್ರತಿಪಕ್ಷದ ನಾಯಕ ಆರ್.ಅಶೋಕ್‌ ಸೇರಿದಂತೆ ಎಲ್ಲಾ ಪಕ್ಷದ ಸದಸ್ಯರು, ಎಸ್.ಎಂ.ಕೃಷ್ಣ ಅವರ ಗುಣಗಾನ ಮಾಡಿ ಸಂತಾಪ ಸೂಚಿಸಿದರು.

ಮೃತರ ಗೌರವಾರ್ಥವಾಗಿ ಸದನದಲ್ಲಿ ಎಲ್ಲರೂ ಒಂದು ನಿಮಿಷ ಕಾಲ ಮೌನಾಚರಣೆ ಮಾಡಿದರು.

ಇದನ್ನೂ ಓದಿ:ರಾಜಕೀಯ ಸಂಧ್ಯಾಕಾಲದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ಹಿರಿಯ ರಾಜಕಾರಣಿ ಎಸ್.ಎಂ ಕೃಷ್ಣ!

ABOUT THE AUTHOR

...view details