ಕರ್ನಾಟಕ

karnataka

ETV Bharat / state

ಜಾತಿ ಸಮೀಕ್ಷೆ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಸೂಕ್ತ ತೀರ್ಮಾನ: ಸಿಎಂ ಸಿದ್ದರಾಮಯ್ಯ

ಪ್ರತಿಪಕ್ಷಗಳ ವಿರೋಧದ ಮಧ್ಯೆಯೇ ಜಾತಿ ಜನಗಣತಿ ವರದಿಯನ್ನು ಸಚಿವ ಸಂಪುಟ ಸಭೆಯಲ್ಲಿ ಮಂಡಿಸಲು ರಾಜ್ಯ ಸರ್ಕಾರ ಸಿದ್ಧತೆ ನಡೆಸುತ್ತಿದೆ.

ಸಚಿವರು, ಶಾಸಕರ ಜೊತೆ ಸಿಎಂ ಸಭೆ
ಸಚಿವರು, ಶಾಸಕರ ಜೊತೆ ಸಿಎಂ ಸಭೆ (ETV Bharat)

By ETV Bharat Karnataka Team

Published : Oct 7, 2024, 4:27 PM IST

Updated : Oct 7, 2024, 5:32 PM IST

ಬೆಂಗಳೂರು:ಇದುಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆ. ಕೇವಲ ಹಿಂದುಳಿದ ವರ್ಗಗಳ ಜಾತಿ ಸಮೀಕ್ಷೆ ಅಲ್ಲ. ರಾಜ್ಯದ ಏಳು ಕೋಟಿ ಕನ್ನಡಿಗರ ಸಮೀಕ್ಷೆ. ಇಡೀ ದೇಶದಲ್ಲಿ ಇಂತಹ ಸಮೀಕ್ಷೆ ನಡೆಸಿದ ಪ್ರಥಮ ರಾಜ್ಯ ಕರ್ನಾಟಕ. ಅಕ್ಟೋಬರ್ 18ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿದ ನಂತರ ಈ ಬಗ್ಗೆ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಇಂದು ಹಿಂದುಳಿದ ವರ್ಗಗಳ ಸಚಿವರು ಹಾಗೂ ಶಾಸಕರ ಜೊತೆ ಸಭೆ ನಡೆಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ, ಪ್ರತಿಪಕ್ಷಗಳ ನಾಯಕರೂ ಸೇರಿದಂತೆ ಸುಮಾರು ಹಿಂದುಳಿದ ವರ್ಗಗಳ 30 ಜನ ಶಾಸಕರು ನನ್ನನ್ನು ಭೇಟಿ ಮಾಡಿ, ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆಯನ್ನು ಅಂಗೀಕಾರ ಮಾಡಿ, ಜಾರಿಗೆ ತರಬೇಕೆಂದು ಒತ್ತಾಯಿಸಿ ಮನವಿ ಸಲ್ಲಿಸಿದ್ದಾರೆ. ಹಿಂದೆ ಕಾಂಗ್ರೆಸ್ ಸರ್ಕಾರ ಇದ್ದಾಗ ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಹೆಚ್.ಕಾಂತರಾಜು ಅವರ ಅಧ್ಯಕ್ಷತೆಯಲ್ಲಿ ರಚಿಸಲಾಗಿದ್ದ ಆಯೋಗ ಬಹಳ ಸಮಯ ತೆಗೆದುಕೊಂಡು ಸಮೀಕ್ಷೆ ನಡೆಸಿದೆ. ರಾಜ್ಯದ ಮನೆ ಮನೆಗೆ ಭೇಟಿ ನೀಡಿ ಸಮೀಕ್ಷೆ ಮಾಡಿರುವುದಾಗಿ ಕಾಂತರಾಜು ತಿಳಿಸಿದ್ದಾರೆ. ನಾನು ಇಲ್ಲಿಯವರೆಗೂ ವರದಿಯನ್ನು ಪರಿಶೀಲಿಸಿಲ್ಲ. ಹಿಂದೆ ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಕಾಂತರಾಜು ವರದಿ ಪೂರ್ಣಗೊಂಡಿರಲಿಲ್ಲ. ಆದ್ದರಿಂದ ನನ್ನ ಅವಧಿಯಲ್ಲಿ ಜಾತಿ ಗಣತಿ ವರದಿ ಸ್ವೀಕರಿಸಲು ಮತ್ತು ಜಾರಿಗೊಳಿಸಲು ಸಾಧ್ಯವಾಗಿರಲಿಲ್ಲ. ನಂತರ ಹೆಚ್.ಡಿ.ಕುಮಾರಸ್ವಾಮಿಯವರು ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ ಕಾಂತರಾಜು ವರದಿ ಸಲ್ಲಿಸಲು ಸಿದ್ಧತೆ ನಡೆಸಿದ್ದರು. ಆದರೆ ಕುಮಾರಸ್ವಾಮಿ ವರದಿ ಸ್ವೀಕರಿಸಲು ಒಪ್ಪಿರಲಿಲ್ಲ. ನಂತರ ಬಿಜೆಪಿ ಸರ್ಕಾರ ಬಂದರೂ, ವರದಿಯನ್ನು ಸ್ವೀಕರಿಸಲಿಲ್ಲ ಎಂದು ತಿಳಿಸಿದರು.

ಸಿಎಂ ಸಿದ್ದರಾಮಯ್ಯ (ETV Bharat)

ನಂತರ ಕಾಂತರಾಜು ಅವರ ಅಧ್ಯಕ್ಷತೆಯ ಅವಧಿ ಪೂರ್ಣಗೊಂಡ ನಂತರ ಜಯಪ್ರಕಾಶ್ ಹೆಗ್ಗಡೆ ಆಯೋಗದ ಅಧ್ಯಕ್ಷರಾದರು. ಅವರು ಕೋರಿದಂತೆ ವರದಿ ಸಲ್ಲಿಕೆಗೆ ಮೂರು ತಿಂಗಳ ಅವಕಾಶ ಕೊಡಲಾಗಿತ್ತು. ನಂತರ ಆ ವರದಿಯನ್ನು ಸ್ವೀಕರಿಸಲಾಗಿದೆ. ಸ್ವೀಕರಿಸಿದ ವರದಿಯನ್ನು ಜಾರಿಗೊಳಿಸಲು ಎಲ್ಲರಿಂದಲೂ ಒತ್ತಾಯ ಬಂದಿದೆ. ಈ ಹಿನ್ನೆಲೆಯಲ್ಲಿ ಇಂದು ಹಿಂದುಳಿದ ವರ್ಗಗಳ ಶಾಸಕರು ಸಭೆ ನಡೆಸಿ ವರದಿ ಜಾರಿಗೊಳಿಸುವಂತೆ ಮನವಿ ಸಲ್ಲಿಸಿದ್ದಾರೆ ಎಂದು ಸಿಎಂ ಹೇಳಿದರು.

ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆಯನ್ನು ಸ್ವೀಕರಿಸಲಾಗಿದ್ದು, ಈ ವರದಿಯ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿದ ನಂತರ ತೀರ್ಮಾನ ಕೈಗೊಳ್ಳಲಾಗುವುದು ಎಂದು ಇತ್ತೀಚೆಗಷ್ಟೇ ಮೈಸೂರಿನ ಒಂದು ಕಾರ್ಯಕ್ರಮದಲ್ಲಿ ನಾನು ತಿಳಿಸಿದ್ದೆ. ಅಕ್ಟೋಬರ್ 18ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ವರದಿಯನ್ನು ಬಹುತೇಕ ಮಂಡಿಸುವ ಸಾಧ್ಯತೆಯಿದೆ. ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿದ ನಂತರ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.

ಸಚಿವರು, ಶಾಸಕರ ಜೊತೆ ಸಿಎಂ ಸಭೆ (ETV Bharat)

ಇಂದಿನ ಸಭೆಯಲ್ಲಿ ಸಚಿವರಾದ ಭೈರತಿ ಸುರೇಶ್, ಎನ್.ಎಸ್.ಬೋಸರಾಜ್, ಕಾಂಗ್ರೆಸ್ ಶಾಸಕರಾದ ಅಜಯ್‌ಸಿಂಗ್‌, ಬೇಳೂರು ಗೋಪಾಲ್‌ಕೃಷ್ಣ, ರಾಘವೇಂದ್ರ ಹಿಟ್ನಾಳ್‌, ವಿಧಾನಪರಿಷತ್ ಸದಸ್ಯರಾದ ಬಿ.ಕೆ.ಹರಿಪ್ರಸಾದ್‌, ಎಂ.ಆರ್‌.ಸೀತಾರಾಮ್‌, ಮುಖಂಡರಾದ ವಿ.ಆರ್.ಸುದರ್ಶನ್, ಶ್ರೀನಿವಾಸ್‌‍, ಗವಿಯಪ್ಪ, ನಾಗರಾಜ್‌ ಯಾದವ್‌, ಬಿಜೆಪಿಯ ವಿಧಾನಪರಿಷತ್‌ ಸದಸ್ಯ ರವಿಕುಮಾರ್‌, ವರದಿ ಸಲ್ಲಿಸಿದ್ದ ಜಯಪ್ರಕಾಶ್‌ ಹೆಗ್ಡೆ, ಹಿಂದುಳಿದ ವರ್ಗಗಳ ಮಾಜಿ ಅಧ್ಯಕ್ಷ ಸಿ.ಎಸ್‌‍.ದ್ವಾರಕನಾಥ್‌, ಮುಖ್ಯಮಂತ್ರಿಯವರ ಕಾನೂನು ಸಲಹೆಗಾರ ಎ.ಎಸ್‌‍.ಪೊನ್ನಣ್ಣ, ವಿಧಾನಪರಿಷತ್‌ನ ಮಾಜಿ ಸದಸ್ಯರಾದ ಎಚ್‌.ಎಂ.ರೇವಣ್ಣ ಮತ್ತು ಹಿಂದುಳಿದ ವರ್ಗಗಳ ಮುಖಂಡರು ಭಾಗವಹಿಸಿದ್ದರು. ಸಭೆಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ವರದಿಯ ಕುರಿತ ಅಭಿಪ್ರಾಯಗಳನ್ನು ಸಿಎಂ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ:ಜಾತಿ ಗಣತಿ ಬಗ್ಗೆ ಎಲ್ಲ ರಾಜ್ಯಗಳ ಅಭಿಪ್ರಾಯ ಪಡೆದು ಮುಂದಿನ‌ ಕ್ರಮ: ಮಲ್ಲಿಕಾರ್ಜುನ ಖರ್ಗೆ - Mallikarjuna Kharge

Last Updated : Oct 7, 2024, 5:32 PM IST

ABOUT THE AUTHOR

...view details