ಬೆಂಗಳೂರು:ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿದಂತೆ ಬಿಜೆಪಿ ಮುಖಂಡರ ವಿರುದ್ಧ ತಪ್ಪು ಮಾಹಿತಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿ.ಕೆ.ಶಿವಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಹೈಗ್ರೌಂಡ್ ಠಾಣಾ ಪೊಲೀಸರಿಗೆ ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಿರ್ದೇಶನ ನೀಡಿದೆ.
ಬಿಜೆಪಿ ಕಾನೂನು ಪ್ರಕೋಷ್ಟದ ಸಂಚಾಲಕ ಯೋಗೇಂದ್ರ ಹೋಡಘಟ್ಟ ಎಂಬವರು ಸಲ್ಲಿಸಿದ್ದ ಖಾಸಗಿ ದೂರಿನ ವಿಚಾರಣೆ ನಡೆಸಿದ ನಗರದ 42ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶರು ಈ ಆದೇಶ ನೀಡಿದ್ದಾರೆ. ಅಲ್ಲದೆ, ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಕರ್ನಾಟಕದ ಸಾಮಾಜಿಕ ಜಾಲತಾಣದ ಮುಖ್ಯಸ್ಥ ಬಿ.ಆರ್.ನಾಯ್ಡು ವಿರುದ್ಧವೂ ಪ್ರಕರಣ ದಾಖಲಿಸಿ, ವಿಚಾರಣೆ ನಡೆಸಿದ ವರದಿ ಸಲ್ಲಿಸುವಂತೆ ಸೂಚನೆ ನೀಡಿ, ವಿಚಾರಣೆಯನ್ನು ಮಾರ್ಚ್ 30ಕ್ಕೆ ಮುಂದೂಡಿದೆ.
ಪ್ರಕರಣದ ಹಿನ್ನೆಲೆ:2024ರ ಜನವರಿ ಮೊದಲ ವಾರದಲ್ಲಿ ಹುಬ್ಬಳ್ಳಿಯ ಪೊಲೀಸರು 60 ವರ್ಷದ ಹಿಂದೂ ಕಾರ್ಯಕರ್ತ ಶ್ರೀಕಾಂತ್ ಪೂಜಾರಿ ಎಂಬವರನ್ನು 31 ವರ್ಷದ ಹಿಂದಿನ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಬಂಧಿಸಿದ್ದರು. ಇದನ್ನು ಖಂಡಿಸಿ ರಾಜ್ಯ ಬಿಜೆಪಿ ಘಟಕದಿಂದ ಪ್ರತಿಭಟನೆಗಳು ನಡೆದಿದ್ದವು.