ಬೆಂಗಳೂರು:ಸಿಎಂ ಸಿದ್ದರಾಮಯ್ಯನವರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಪ್ರಸಕ್ತ ಸಾಲಿನ ಬಜೆಟ್ನಲ್ಲಿ ವಿಶೇಷ ಆದ್ಯತೆ ನೀಡಿದ್ದಾರೆ. ಮಕ್ಕಳ ಪ್ರಾರಂಭಿಕ ಶಿಕ್ಷಣ ಮತ್ತು ಆರೈಕೆಯಲ್ಲಿ ಸಾಮರ್ಥ್ಯ ಅಭಿವೃದ್ಧಿಗೆ 20,000 ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ತರಬೇತಿ ಕಾರ್ಯಾಗಾರಗಳನ್ನು ಆಯೋಜಿಸಲು 10 ಕೋಟಿ ರೂ. ಗಳನ್ನು ಒದಗಿಸಲಾಗುವುದು ಎಂದು ಘೋಷಣೆ ಮಾಡಿದ್ದಾರೆ.
15ನೇ 2024-25ನೇ ಸಾಲಿನ ರಾಜ್ಯ ಬಜೆಟ್ ಮಂಡಿಸಿದ ಅವರು, ಅಂಗನವಾಡಿ ಮೂಲಕ ಕೈಗೊಳ್ಳುವ ಚಟುವಟಿಕೆಗಳನ್ನು ಸುಗಮಗೊಳಿಸಲು 90 ಕೋಟಿ ರೂ. ವೆಚ್ಚದಲ್ಲಿ 75,938 ಸ್ಮಾರ್ಟ್ ಫೋನ್‌ಗಳನ್ನು ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಮೇಲ್ವಿಚಾರಕಿಯರಿಗೆ ಒದಗಿಸಲಾಗುವುದು. ರಾಜ್ಯದಲ್ಲಿ ಬಾಡಿಗೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 1,000 ಅಂಗನವಾಡಿಗಳಿಗೆ ಸ್ವಂತ ಕಟ್ಟಡಗಳನ್ನು 200 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಿಸಲಾಗುವುದು. ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಸಹಾಯಕಿಯರಿಗೆ ಗ್ರಾಚ್ಯುಟಿ ಸವಲತ್ತುಗಳನ್ನು ಒದಗಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
Cerebral Palsy, Muscular Dystrophy, Parkinsons & Multiple Sclerosis ಖಾಯಿಲೆಗಳಿಂದ ಬಳಲುತ್ತಿರುವ ವ್ಯಕ್ತಿಗಳ ಆರೈಕೆಗಾಗಿ ಪ್ರತಿ ತಿಂಗಳು 1000 ರೂ. ಪ್ರೋತ್ಸಾಹ ಧನ ನೀಡಲಾಗುವುದು. ನಿರಾಶ್ರಿತ ಬೌದ್ಧಿಕ ವಿಕಲಚೇತನರ ಆರೈಕೆ ಮತ್ತು ಸಂರಕ್ಷಣೆಗಾಗಿ 4 ಅನುಪಾಲನಾ ಗೃಹಗಳನ್ನು ಎರಡು ಕೋಟಿ ರೂಪಾಯಿ ವೆಚ್ಚದಲ್ಲಿ ಪ್ರಾರಂಭಿಸಲಾಗುವುದು. ಯಂತ್ರಚಾಲಿತ ದ್ವಿಚಕ್ರ ವಾಹನಗಳನ್ನು ಒದಗಿಸಲು ಇನ್ನೂ ಬಾಕಿಯಿರುವ 1,500 ವಿಶೇಷಚೇತನರಿಗೆ 2024-25ನೇ ಸಾಲಿನಲ್ಲಿ ದ್ವಿಚಕ್ರ ವಾಹನಗಳನ್ನು ವಿತರಿಸಲಾಗುವುದು ಎಂದು ತಮ್ಮ ಬಜೆಟ್ ಭಾಷಣದಲ್ಲಿ ವಿವರಿಸಿದ್ದಾರೆ.