ಬೆಂಗಳೂರು:ಕೇಂದ್ರ ಸರ್ಕಾರದ ವಿರುದ್ಧ ದೆಹಲಿಯಲ್ಲಿ ಇಂದು ಪ್ರತಿಭಟನೆ ನಡೆಸಲು ಮುಂದಾಗಿರುವ ಕಾಂಗ್ರೆಸ್ಗೆ ಕೌಂಟರ್ ನೀಡಲು ಸಿದ್ಧವಾಗಿರುವ ರಾಜ್ಯ ಬಿಜೆಪಿ ಇಂದು ವಿಧಾನಸೌಧದಲ್ಲಿರುವ ಗಾಂಧಿ ಪ್ರತಿಮೆ ಎದುರು ಕಾಂಗ್ರೆಸ್ ಸರ್ಕಾರದ ವಿರುದ್ಧ ಧರಣಿ ನಡೆಸಲಿದೆ.
ರಾಜ್ಯ ಬಿಜೆಪಿ ವತಿಯಿಂದ ಇಂದು ಬೆಳಗ್ಗೆ 11 ಗಂಟೆಗೆ ವಿಧಾನಸೌಧದ ಗಾಂಧಿ ಪ್ರತಿಮೆ ಮುಂಭಾಗದಲ್ಲಿ ಪ್ರತಿಭಟನೆ ನಡೆಯಲಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್, ವಿಧಾನಪರಿಷತ್ ಪ್ರತಿ ಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ನೇತೃತ್ವದಲ್ಲಿ ಧರಣಿ ನಡೆಯಲಿದ್ದು, ಈ ಹೋರಾಟದಲ್ಲಿ ಪಕ್ಷದ ಶಾಸಕರು, ವಿಧಾನಪರಿಷತ್ ಸದಸ್ಯರು ಭಾಗವಹಿಸಲಿದ್ದಾರೆ.
ತೆರಿಗೆ ವಿಚಾರದಲ್ಲಿ ಕೇಂದ್ರ ಸರ್ಕಾರ ರಾಜ್ಯಕ್ಕೆ ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿ 'ನಮ್ಮ ತೆರಿಗೆ ನಮ್ಮ ಹಕ್ಕು' ಹೆಸರಿನಲ್ಲಿ ಇಂದು ದೆಹಲಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸಲಿದೆ. ಇತ್ತ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯೂ ರಾಜ್ಯದ ಶಕ್ತಿ ಕೇಂದ್ರದಲ್ಲಿ ಪ್ರತಿಭಟನೆ ನಡೆಸಲಿದೆ.
ಬರ ಪರಿಹಾರ ವಿತರಣೆ ಮಾಡದಿರುವ ಸರ್ಕಾರದ ಕ್ರಮ ಖಂಡಿಸುವುದು ಸೇರಿದಂತೆ ರಾಜ್ಯ ಸರ್ಕಾರದ ವೈಫಲ್ಯಗಳ ಮೇಲೆ ಬೆಳಕು ಚೆಲ್ಲಿ ಕಾಂಗ್ರೆಸ್ಗೆ ತಕ್ಕ ತಿರುಗೇಟು ನೀಡಲು ನಿರ್ಧರಿಸಲಾಗಿದೆ. ಹಾಗಾಗಿ ಇಂದು ರಾಷ್ಟ್ರ ರಾಜಧಾನಿ ಹಾಗೂ ರಾಜ್ಯ ರಾಜಧಾನಿಯಲ್ಲಿ ಎರಡು ರಾಷ್ಟ್ರೀಯ ಪಕ್ಷಗಳ ಪ್ರತಿಭಟನೆ ಸದ್ದು ಮಾಡಲಿದೆ.
ಈ ಕುರಿತು ಬಿಜೆಪಿ ಕರ್ನಾಟಕ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, 'ರಾಜ್ಯದ ಕಾಂಗ್ರೆಸ್ ಸರ್ಕಾರ ಸ್ವತಃ 222 ಕ್ಕೂ ಹೆಚ್ಚು ತಾಲೂಕುಗಳನ್ನು ಬರಗಾಲ ಪೀಡಿತ ತಾಲೂಕುಗಳೆಂದು ಘೋಷಣೆ ಮಾಡಿದ್ದರೂ, ಈವರೆಗೂ ಕುಡಿಯುವ ನೀರಿನ ಸಮಸ್ಯೆಯೂ ಸೇರಿದಂತೆ ಬರ ಪರಿಹಾರದ ಯಾವುದೇ ಕ್ರಮ ಕೈಗೊಳ್ಳದಿರುವ ಕುರಿತು ಪಕ್ಷದ ವಿಧಾನಸಭೆ ಹಾಗೂ ವಿಧಾನ ಪರಿಷತ್ ಸದಸ್ಯರುಗಳ ನೇತೃತ್ವದಲ್ಲಿ ಫೆಬ್ರವರಿ 7 ರ ಬುಧವಾರ ನಾಳೆ ಬೆಳಗ್ಗೆ(ಇಂದು ಬೆಳಗ್ಗೆ) 11 ಗಂಟೆಗೆ, ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಸರ್ಕಾರದ ರೈತ ವಿರೋಧಿ ನೀತಿಗಳ ವಿರುದ್ಧ ಪ್ರತಿಭಟನೆ ನಡೆಸಲಾಗುವುದು' ಎಂದು ಬರೆದು ಹಾಕಿದ್ದಾರೆ.
ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಕೂಡ ಈ ಪ್ರತಿಭಟನೆಗೆ ಕರೆ ನೀಡಿದ್ದು, 'ರಾಜ್ಯದ ಬರ ಪರಿಸ್ಥಿತಿ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲವಾಗಿರುವ ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ಧೋರಣೆಯನ್ನು ಖಂಡಿಸಿ ಬಿಜೆಪಿ ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರುಗಳ ನೇತೃತ್ವದಲ್ಲಿ ನಾಳೆ(ಇಂದು) ಬುಧವಾರ, ಫೆಬ್ರವರಿ 7ರಂದು, ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಲಾಗುವುದು' ಎಂದು ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಾಕಿದ್ದಾರೆ.
ಇದನ್ನೂ ಓದಿ:ಕಾಂಗ್ರೆಸ್ ಸರ್ಕಾರದ 'ದಿಲ್ಲಿ ಚಲೋ'ಗೆ ವೇದಿಕೆ ಸಜ್ಜು: ಹಲವು ಲೆಕ್ಕಾಚಾರದೊಂದಿಗೆ 'ಅನುದಾನ ಅನ್ಯಾಯ'ದ ಕೂಗು