ಮಂಗಳೂರು: ಇಂದು ಮಧ್ಯಾಹ್ನ ಮಂಗಳೂರಿನಲ್ಲಿ ಆಯೋಜಿಸಿರುವ ರಾಜ್ಯಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶಕ್ಕೆ ಸಕಲ ಸಿದ್ಧತೆಗಳು ನಡೆದಿದ್ದು, ಡಿಸಿಎಂ ಡಿ. ಕೆ. ಶಿವಕುಮಾರ್ ಸಿದ್ಧತೆಗಳ ಮೇಲ್ವಿಚಾರಣೆ ನಡೆಸಿದರು. ಸಮಾವೇಶ ಆರಂಭಕ್ಕೂ ಮುನ್ನ ಮಂಗಳೂರಿಗೆ ಆಗಮಿಸಿದ ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ರಾಜ್ಯ ಕಾರ್ಯದರ್ಶಿ ಮಿಥುನ್ ರೈ ಹಾಗೂ ಇತರ ಕಾಂಗ್ರೆಸ್ ಕಾರ್ಯಕರ್ತರ ಜೊತೆ, ವೇದಿಕೆ ಹಾಗೂ ಇತರ ಸಿದ್ಧತೆ ಬಗ್ಗೆ ಪರಿಶೀಲನೆ ನಡೆಸಿದರು.
ಸಿದ್ಧತೆ ಬಗ್ಗೆ ಪರಿಶೀಲಿಸಿದ ಡಿ.ಕೆ.ಶಿವಕುಮಾರ್ ಲೋಕಸಭಾ ಚುನಾವಣೆ ಘೋಷಣೆಗೆ ಮುಂಚೆಯೇ ಕಾಂಗ್ರೆಸ್ ಪಕ್ಷ ಚುನಾವಣಾ ತಯಾರಿಯಾಗಿ ಇಂದು ಮಂಗಳೂರಿನ ಅಡ್ಯಾರ್ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನ ಮೈದಾನದಲ್ಲಿ ಮಧ್ಯಾಹ್ನ 2 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ರಾಜ್ಯಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ಆಯೋಜಿಸಿದೆ.
ಈ ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣ್ ದೀಪ್ ಸುರ್ಜೆವಾಲಾ ಸೇರಿದಂತೆ ಕಾಂಗ್ರೆಸ್ ನಾಯಕರು ಭಾಗವಹಿಸಲಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ಅಧ್ಯಕ್ಷರಾದ ಬಳಿಕ ಮೊದಲ ಬಾರಿಗೆ ಮಂಗಳೂರಿಗೆ ಆಗಮಿಸುತ್ತಿದ್ದಾರೆ. ಮಧ್ಯಾಹ್ನ ಎರಡು ಗಂಟೆಗೆ ಆರಂಭವಾಗಲಿರುವ ಸಮಾವೇಶ ಸಂಜೆ 6 ಗಂಟೆಯವರೆಗೆ ನಡೆಯಲಿದೆ.
ಈ ಸಮಾವೇಶದಲ್ಲಿ ಭಾಗವಹಿಸಲು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವಿವಿಧ ಬ್ಲಾಕ್ ಕಾಂಗ್ರೆಸ್ ಮಟ್ಟದಲ್ಲಿ ಕಾರ್ಯಕರ್ತರನ್ನು ಕರೆತರಲು ಸಿದ್ದತೆ ಮಾಡಲಾಗಿದ್ದು, ರಾಜ್ಯದ ವಿವಿಧ ಕಡೆಗಳಿಂದ ಕಾಂಗ್ರೆಸ್ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ.
ಇದನ್ನೂ ಓದಿ:ಮಂಗಳೂರಿನಲ್ಲಿ ನಾಳೆ ರಾಜ್ಯಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ
ಲೋಕಸಭೆಗೆ ರಾಜ್ಯದಿಂದ ಈ ಭಾರಿ ಹೆಚ್ಚಿನ ಸಂಸದರನ್ನು ಕಳುಹಿಸಬೇಕು ಎಂಬುದು ಕಾಂಗ್ರೆಸ್ ಪಕ್ಷದ ಗುರಿಯಾಗಿದೆ. ರಾಜ್ಯದಲ್ಲಿ ಹೆಚ್ಚಿನ ಸಂಸದರನ್ನು ಆಯ್ಕೆ ಮಾಡುವ ಮೂಲಕ ಕಾಂಗ್ರೆಸ್ ಪಕ್ಷವನ್ನು ಬಲಗೊಳಿಸಬೇಕು ಎಂಬುದು, ಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಮತ್ತು ರಾಜ್ಯ ಕಾಂಗ್ರೆಸ್ ಅಧ್ಯಕ್ಷರೂ ಆಗಿರುವ ಡಿ ಕೆ ಶಿವಕುಮಾರ್ ಅವರ ಉದ್ದೇಶವಾಗಿದೆ.
ಇನ್ನು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಜಯಭೇರಿ ಬಾರಿಸಿ ಅಧಿಕಾರಕ್ಕೆ ಬಂದಿದ್ದರೂ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಹಿನ್ನಡೆ ಅನುಭವಿಸಿದೆ. ಈ ಹಿನ್ನೆಲೆಯಲ್ಲಿ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಈ ಭಾಗದಲ್ಲಿ ಪಕ್ಷಕ್ಕೆ ಮತ್ತಷ್ಟು ಬಲ ನೀಡುವ ಉದ್ದೇಶದಿಂದ ರಾಜ್ಯಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶವನ್ನು ಮಂಗಳೂರಿನಲ್ಲಿ ಆಯೋಜಿಸಲಾಗಿದೆ. ಈ ಮೂಲಕ ಇಲ್ಲಿನ ಪಕ್ಷದ ಕಾರ್ಯಕರ್ತರಲ್ಲಿ ಹುರುಪು ತುಂಬುವುದು ಹಾಗೂ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಲು ರಣತಂತ್ರ ರೂಪಿಸುವುದು ಸಮಾವೇಶದ ಪ್ರಮುಖ ಉದ್ದೇಶವಾಗಿದೆ ಎಂದು ಹೇಳಲಾಗುತ್ತಿದೆ.