ಮೈಸೂರು:ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಎಫ್‌ಎಸ್‌ಟಿ, ಎಸ್ಎಸ್ ಟಿ, ವಿಎಸ್ ಟಿ ಸೇರಿದಂತೆ ವಿವಿಧ ತಂಡಗಳಿಗೆ ಚುನಾವಣೆ ಅಧಿಕಾರಿಗಳನ್ನು ನಿಯೋಜಿಸಲಾಗಿದ್ದು, ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಚುನಾವಣೆ ಕರ್ತವ್ಯ ನಿರ್ವಹಿಸಬೇಕು ಹಾಗೂ ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಅನುಸರಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ ಕೆ ವಿ ರಾಜೇಂದ್ರ ಸೂಚಿಸಿದರು.
ಇಂದು ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಚುನಾವಣೆ ಅಂಗವಾಗಿ ಎಫ್‌ಎಸ್‌ಟಿ, ಎಸ್‌ಎಸ್‌ಟಿ ಮತ್ತು ವಿವಿಟಿ ತಂಡದ ಮುಖ್ಯಸ್ಥರಿಗೆ ಮಾದರಿ ನೀತಿ ಸಂಹಿತೆ (ಎಂಸಿಸಿ) ಕುರಿತು ಇಂದು ಜಿಪಂ ಸಭಾಂಗಣದಲ್ಲಿ ಆಯೋಜಿಸಿದ್ದ ತರಬೇತಿ ಕಾಯಕ್ರಮದಲ್ಲಿ ಸಲಹೆ ನೀಡಿದರು.
ಜಿಲ್ಲಾದ್ಯಂತ ಎಲ್ಲ ಚೆಕ್ಪೋಸ್ಟ್ಗಳಲ್ಲಿ ಪ್ರತಿಯೊಂದು ವಾಹನಗಳನ್ನು ಪರಿಶೀಲಿಸಬೇಕು. ಪರಿಶೀಲನೆ ಸಂದರ್ಭದಲ್ಲಿ ಯಾವುದೇ ವಾಹನದಲ್ಲಿ 50 ಸಾವಿರಕ್ಕಿಂತ ಹೆಚ್ಚು ಹಣ ಸಾಗಿಸುತ್ತಿರುವುದು ಕಂಡುಬಂದರೆ ಅಂತಹ ವಾಹನಗಳನ್ನು ವಶಪಡಿಸಿಕೊಳ್ಳಬೇಕು. ಹಣವಲ್ಲದೇ ಪಕ್ಷದ ಗುರುತಿರುವ ಟಿ-ಶರ್ಟ್, ಕ್ಯಾಪ್, ಹೆಚ್ಚು ಸಂಖ್ಯೆಯ ಸೀರೆ, ಆಹಾರದ ಕಿಟ್ ಇತ್ಯಾದಿ ರೀತಿ ಅಕ್ರಮ ವಸ್ತು ಸಾಗಣೆ ಕಂಡು ಬಂದರೆ ಅವುಗಳನ್ನು ವಶಪಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಚುನಾವಣೆ ವೇಳೆ ನೀತಿ ಸಂಹಿತೆಯ ಉಲ್ಲಂಘನೆ ಪ್ರಕರಣಗಳು ಕಂಡು ಬಂದ ಸಂದರ್ಭದಲ್ಲಿ ಅಧಿಕಾರಿಗಳು ಜಾಗೃತರಾಗಿರಬೇಕು ಹಾಗೂ ಮಾದರಿ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಅನುಸರಿಸಿ ಅಗತ್ಯ ಕ್ರಮ ವಹಿಸಬೇಕು. ಸಂಶಯಾಸ್ಪದ ಪ್ರಕರಣಗಳು ಕಂಡುಬಂದರು ಅವುಗಳನ್ನು ವಶಪಡಿಸಿಕೊಂಡು ಸಂಬಂಧ ಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಿ ಅವರಿಂದ ಸತ್ಯ - ಅಸತ್ಯತೆಗಳನ್ನ ತಿಳಿಯಬೇಕು ಎಂದು ಹೇಳಿದರು.