ರಾಯಚೂರು: ಕೃಷಿ ವಿಶ್ವವಿದ್ಯಾಲಯ ಹಾಗೂ ಬಿ.ಟೆಕ್ ಪದವಿ ಪಡೆದಿರುವ ವಿದ್ಯಾರ್ಥಿಗಳು ಕೃಷಿ ಕ್ಷೇತ್ರದಲ್ಲಿ ಸಂಶೋಧನೆ ಕೈಗೊಂಡು ಸಮಸ್ಯೆಗಳಿಗೆ ಪರಿಹಾರ ಕಂಡುಹಿಡಿಯಬೇಕು. ಕೃಷಿ ಕ್ಷೇತ್ರದ ಬೆಳವಣಿಗೆಗಾಗಿ ವಿದ್ಯಾರ್ಥಿಗಳು ತಮ್ಮ ಜ್ಞಾನವನ್ನು ಉಪಯೋಗಿಸಬೇಕು ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಕಿವಿಮಾತು ಹೇಳಿದರು.
ಇಂದು ನಗರದ ಹೊರವಲಯದಲ್ಲಿರುವ ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ 13ನೇ ಘಟಿಕೋತ್ಸವ ಸಮಾರಂಭದಲ್ಲಿ ಪಾಲ್ಗೊಂಡು ಸ್ನಾತಕ, ಸ್ನಾತಕೋತ್ತರ, ಡಾಕ್ಟರೇಟ್ ಪದವಿ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿ ಅವರು ಮಾತನಾಡಿದರು.
ಕೃಷಿ ವಲಯ ದೇಶದ ಆರ್ಥಿಕ ಬೆಳವಣಿಗೆಗೆ ಆಧಾರಸ್ತಂಭ. ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ದೇಶ, ಸಮಾಜ ಹಾಗೂ ಕೃಷಿ ಕ್ಷೇತ್ರದ ಹಿತಕ್ಕಾಗಿ ತಮ್ಮ ಜ್ಞಾನವನ್ನು ಸಮರ್ಪಿಸಬೇಕು. ವಿಶ್ವವಿದ್ಯಾಲಯದಲ್ಲಿ ಕೃಷಿ ಕ್ಷೇತ್ರದಲ್ಲಿ ಹೊಸ ತಂತ್ರಜ್ಞಾನಗಳ ಬಳಕೆ ಕುರಿತು ಹೆಚ್ಚಿನ ಸಂಶೋಧನೆಗಳನ್ನು ಮಾಡಲಾಗುತ್ತಿದೆ. ಇಂಥ ಸಂಶೋಧನೆಗಳು ದೇಶ ಹಾಗೂ ರಾಜ್ಯದ ಅಭಿವೃದ್ಧಿಗೆ ಮಹತ್ವದ ಪಾತ್ರವಹಿಸುತ್ತಿವೆ. ಇವು ರೈತರಿಗೆ ಕೃಷಿ ಚಟುವಟಿಕೆಗಳಲ್ಲಿ ವಿವಿಧ ಪ್ರಕಾರಗಳ ಬೇಸಾಯ ಕ್ರಮಗಳನ್ನು ಪರಿಚಯಿಸುವಲ್ಲಿ ಉತ್ತಮ ಕಾರ್ಯನಿರ್ವಹಿಸುತ್ತವೆ. ರೈತರು ಬೆಳೆದ ಬೆಳೆಗೆ ವಿವಿಧ ಬಾಧೆ ತಡೆಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂದು ತಿಳಿಸಿದರು.
ವಿದ್ಯಾರ್ಥಿಗಳು ಮುಂದಿನ ತಮ್ಮ ಉಜ್ವಲ ಭವಿಷ್ಯವನ್ನು ರೂಪಿಸಿಕೊಂಡು ಕೃಷಿ ಕ್ಷೇತ್ರದಲ್ಲಿ ಹೆಚ್ಚು ಸಾಧನೆ ಮಾಡಲು ಮುಂದಾಗಬೇಕು. ಇತ್ತೀಚೆಗೆ ಕೃಷಿ ವಿಶ್ವವಿದ್ಯಾಲಯದಿಂದ ಪದವಿ ಪಡೆಯುತ್ತಿರುವ ವಿದ್ಯಾರ್ಥಿಗಳಲ್ಲಿ ಮಹಿಳೆಯರ ಸಂಖ್ಯೆ ಹೆಚ್ಚಾಗಿದ್ದು, ಕೃಷಿ ಕ್ಷೇತ್ರಕ್ಕಾಗಿ ಹಾಗೂ ದೇಶದ ಹಿತಕ್ಕಾಗಿ ಮಹತ್ವದ ಪ್ರತೀಕವಾಗಿದೆ. ದೇಶದ ಅರ್ಥವ್ಯವಸ್ಥೆ, ದೇಶದ ಅಭಿವೃದ್ಧಿ ಮತ್ತು ಭಾರತವನ್ನು ವಿಕಸಿತ ರಾಷ್ಟ್ರವನ್ನಾಗಿ ಮಾಡುವಲ್ಲಿ ಮಹಿಳೆಯರ ಕೊಡುಗೆ ಅಪಾರ ಎಂದು ಅಭಿಪ್ರಾಯವ್ಯಕ್ತಪಡಿಸಿದರು.