ಬೆಂಗಳೂರು:ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರಿಗೆ ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಇಂದು ಯಶಸ್ವಿಯಾಗಿ ಹೃದಯ ಶಸ್ತ್ರಚಿಕಿತ್ಸೆ ನಡೆದಿದೆ. ಅಮೆರಿಕ ವೈದ್ಯರು ಸೇರಿದಂತೆ ನುರಿತ ವೈದ್ಯರ ತಂಡ ಕುಮಾರಸ್ವಾಮಿ ಅವರಿಗೆ ಯಶಸ್ವಿಯಾಗಿ ಹೃದಯ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ.
ಈ ಬಗ್ಗೆ ಸಾಮಾಜಿಕ ತಾಲತಾಣ ಎಕ್ಸ್ನಲ್ಲಿ ಮಾಹಿತಿ ಹಂಚಿಕೊಂಡಿರುವ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಇಂದು ಅತ್ಯಂತ ಯಶಸ್ವಿಯಾಗಿ ಹೃದಯ ಶಸ್ತ್ರಚಿಕಿತ್ಸೆ ನಡೆಯಿತು ಎಂದು ತಿಳಿಸಿದ್ದಾರೆ.
ಅಭಿಮಾನಿಗಳು, ಹಿತೈಷಿಗಳು, ಜಾತ್ಯತೀತ ಜನತಾದಳ ಪಕ್ಷದ ಎಲ್ಲ ಕಾರ್ಯಕರ್ತರು ಹಾಗೂ ರಾಜ್ಯದ ಸಮಸ್ತ ಜನತೆಯ ಹಾರೈಕೆ ಹಾಗೂ ಆ ಭಗವಂತನ ದಯೆಯಿಂದ ತಂದೆಯವರು ಆರೋಗ್ಯವಾಗಿದ್ದಾರೆ. ತಂದೆಯವರ ಆರೋಗ್ಯಕ್ಕಾಗಿ ಪ್ರಾರ್ಥಿಸಿ, ಹರಸಿದ ಪ್ರತಿಯೊಬ್ಬರಿಗೂ ನಮ್ಮ ಕುಟುಂಬದ ಪರವಾಗಿ ತುಂಬು ಹೃದಯದ ಧನ್ಯವಾದಗಳು. ನಿಮ್ಮ ಪ್ರೀತಿ ವಿಶ್ವಾಸಕ್ಕೆ ಋಣಿಯಾಗಿದ್ದೇವೆ ಎಂದು ಕೃತಜ್ಞತೆ ಸಲ್ಲಿಸಿದ್ದಾರೆ.
ರಾಜ್ಯದ ಮಾಜಿ ಮುಖ್ಯಮಂತ್ರಿಗಳು, ಜೆಡಿಎಸ್ ರಾಜ್ಯಾಧ್ಯಕ್ಷರಾದ ಶ್ರೀ ಹೆಚ್ ಡಿ ಕುಮಾರಸ್ವಾಮಿ ಅವರಿಗೆ ಇಂದು ಹೃದಯ ಶಸ್ತ್ರಚಿಕಿತ್ಸೆಯು ಯಶಸ್ವಿಯಾಗಿ ನೆರವೇರಿದೆ. ರಾಜ್ಯದ ಜನತೆಯ ಹರಕೆ, ಆಶೀರ್ವಾದದಿಂದ ಆರೋಗ್ಯವಾಗಿದ್ದು ಸದ್ಯದಲ್ಲಿಯೇ ಮರಳಿ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಆದಷ್ಟು ಶೀಘ್ರವಾಗಿ ಜನಸೇವೆಗೆ ಮರಳಲಿ ಎಂದು ನಾನು ಹಾರೈಸುತ್ತೇನೆ ಎಂದು ಹಾಸನ ಲೋಕಸಭಾ ಸಂಸದ ಪ್ರಜ್ವಲ್ ರೇವಣ್ಣ ಕೂಡ ಎಕ್ನಲ್ಲಿ ಬರೆದುಕೊಂಡಿದ್ದಾರೆ.
ಈ ಹಿಂದೆಯೇ ಪಕ್ಷದ ಮೂಲಗಳು ಮಾಹಿತಿ ನೀಡಿದ್ದವು: ’’ಮಾ. 21 ರಂದು ಕುಮಾರಸ್ವಾಮಿ ಅವರಿಗೆ ಹೃದಯ ಶಸ್ತ್ರಚಿಕಿತ್ಸೆ ನಡೆಯಲಿದೆ. ಅದಕ್ಕೂ ಮುನ್ನ ಚೆನ್ನೈ ಆಸ್ಪತ್ರೆಯಲ್ಲಿ ಕೆಲ ಆರೋಗ್ಯ ತಪಾಸಣೆ ನಡೆಯಲಿದೆ. ಶಸ್ತ್ರ ಚಿಕಿತ್ಸೆ ಬಳಿಕ 24ರವರೆಗೂ ಆಸ್ಪತ್ರೆಯಲ್ಲೇ ವಿಶ್ರಾಂತಿ ಪಡೆಯಲಿದ್ದಾರೆ. ಮಾರ್ಚ್ 25ರಂದು ಅವರು ಬೆಂಗಳೂರಿಗೆ ವಾಪಸ್ ಗಲಿದ್ದಾರೆ. ಶಸ್ತ್ರ ಚಿಕಿತ್ಸೆ ಬಳಿಕ ಕೆಲವು ದಿನಗಳ ಕಾಲ ವಿಶ್ರಾಂತಿ ಪಡೆದು ಲೋಕಸಭಾ ಚುನಾವಣೆ ಕಾರ್ಯದಲ್ಲಿ ತೊಡಗಿಸಿಕೊಳ್ಳಲಿದ್ದಾರೆ‘‘ ಎಂದು ಪಕ್ಷದ ಮೂಲಗಳು ಈ ಹಿಂದೆ ತಿಳಿಸಿದ್ದವು.
ಇದನ್ನೂ ಓದಿ:ಮೈತ್ರಿಯಲ್ಲಿ ಸಮಸ್ಯೆ ಇಲ್ಲ, ಆಸ್ಪತ್ರೆಯಿಂದ ಬಂದ ಬಳಿಕ ಅಭ್ಯರ್ಥಿಗಳ ಹೆಸರು ಘೋಷಣೆ: ಹೆಚ್ಡಿಕೆ