ಹುಬ್ಬಳ್ಳಿ:ಉತ್ತರ ಕರ್ನಾಟಕದ ಸಕ್ಕರೆ ಕಾರ್ಖಾನೆಗಳಲ್ಲಿ ನವೆಂಬರ್ 8 ರಿಂದ ಕಬ್ಬು ನುರಿಸುವಿಕೆ ಆರಂಭಿಸಲಾಗುವುದು ಎಂದು ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹೇಳಿದರು.
ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿ ಸಚಿವರು, ಬೆಂಗಳೂರಲ್ಲಿ ಆಗಸ್ಟ್ನಲ್ಲಿ ನಡೆದಿದ್ದ ದಕ್ಷಿಣ ಭಾರತದ ಸಕ್ಕರೆ ಕಾರ್ಖಾನೆಗಳ ಒಕ್ಕೂಟದ ಸಭೆಯಲ್ಲಿ ನವೆಂಬರ್ 15ರಿಂದ ಕಬ್ಬು ನುರಿಸುವಿಕೆ ಆರಂಭಿಸುವ ಕುರಿತು ನಿರ್ಧಾರ ಕೈಗೊಳ್ಳಲಾಗಿತ್ತು. ಆದರೆ ರೈತರು ಮತ್ತು ಸಕ್ಕರೆ ಕಾರ್ಖಾನೆಗಳ ಆಡಳಿತ ಮಂಡಳಿಗಳ ಮನವಿ ಮೇರೆಗೆ ಒಂದು ವಾರ ಮುಂಚಿತವಾಗಿ ಆರಂಭಿಸುವ ನಿರ್ಧಾರ ಕೈಗೊಳ್ಳಲಾಗಿದೆ ಎಂದರು.
ಉತ್ತರ ಕರ್ನಾಟಕ ಮತ್ತು ದಕ್ಷಿಣ ಕರ್ನಾಟಕದಲ್ಲಿ ಕಬ್ಬಿನ ಹಂಗಾಮಿನಲ್ಲಿ ವ್ಯತ್ಯಾಸವಾಗಲಿದೆ. ದಕ್ಷಿಣ ಕರ್ನಾಟಕದ ಸಕ್ಕರೆ ಕಾರ್ಖಾನೆಗಳು ಈಗಾಗಲೇ ಕಾರ್ಯಾರಂಭ ಮಾಡಿವೆ. ಉತ್ತರ ಕರ್ನಾಟಕ ಮತ್ತು ಮಹಾರಾಷ್ಟ್ರ ರಾಜ್ಯದಲ್ಲಿ ಏಕಕಾಲಕ್ಕೆ ಸಕ್ಕರೆ ಕಾರ್ಖಾನೆಗಳು ಕಾರ್ಯಾರಂಭ ಮಾಡುವುದು ರೂಢಿಯಲ್ಲಿದೆ. ಈ ಮೊದಲಿನ ನಿರ್ಧಾರದ ಬದಲಿಗೆ ನವೆಂಬರ್ 8ರಿಂದಲೇ ಕಬ್ಬು ನುರಿಸುವಿಕೆ ಆರಂಭಿಸಬೇಕು ಎಂದು ಮಹಾರಾಷ್ಟ್ರ ಸರ್ಕಾರಕ್ಕೂ ಮನವಿ ಮಾಡಲಾಗಿತ್ತು. ಆದರೆ ಅಲ್ಲಿ ವಿಧಾನಸಭಾ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಈ ಮೊದಲಿನ ನಿರ್ಧಾರ ಬದಲಿಸಲು ಸಾಧ್ಯವಿಲ್ಲ ಎಂದು ತಿಳಿಸಿದರು. ರಾಜ್ಯದ ಕಬ್ಬು ಬೆಳೆಗಾರರ ಹಿತದೃಷ್ಟಿಯಿಂದ ನಾವು ಒಂದು ವಾರ ಮುಂಚಿತವಾಗಿ ಕಬ್ಬು ನುರಿಸುವಿಕೆ ಆರಂಭಿಸುವ ನಿರ್ಧಾರ ಮಾಡಿದ್ದೇವೆ ಎಂದು ಸ್ಪಷ್ಟನೆ ನೀಡಿದರು.
ದಾವಣಗೆರೆ ಮತ್ತು ಹಾವೇರಿ ಜಿಲ್ಲೆಗಳು ಮಧ್ಯ ಕರ್ನಾಟಕದಲ್ಲಿ ಬರುತ್ತವೆ. ಈ ಜಿಲ್ಲೆಗಳ ಸಕ್ಕರೆ ಕಾರ್ಖಾನೆಗಳು ದಕ್ಷಿಣ ಕರ್ನಾಟಕದ ಸಕ್ಕರೆ ಕಾರ್ಖಾನೆಗಳ ಸಮಯದಲ್ಲೇ ಆರಂಭ ಮಾಡಿವೆ. ಉತ್ತರ ಕರ್ನಾಟಕದ ಕಬ್ಬು ಬೆಳೆಗಾರರು ಮತ್ತು ಸಕ್ಕರೆ ಕಾರ್ಖಾನೆಗಳ ಆಡಳಿತ ಮಂಡಳಿಗಳು, ನಮ್ಮ ಭಾಗದಲ್ಲಿ ಕಬ್ಬು ಕಟಾವಿಗೆ ಬಂದಿದೆ. ಹೀಗಾಗಿ ಮುಂಚಿತವಾಗಿ ಕ್ರಷಿಂಗ್ ಆರಂಭಿಸಬೇಕು ಎಂದು ಮನವಿ ಮಾಡಿದ್ದವು ಎಂದು ತಿಳಿಸಿದರು.
3,400 ರೂ. ಬೆಲೆ:ರಾಜ್ಯದಲ್ಲಿ ಒಟ್ಟು 80 ಸಕ್ಕರೆ ಕಾರ್ಖಾನೆಗಳು ಕಾರ್ಯನಿರ್ವಹಿಸುತ್ತಿದ್ದು, ಸುಮಾರು 7.5 ಲಕ್ಷ ಹೆಕ್ಟೇರ್ ಕ್ಷೇತ್ರದಲ್ಲಿ ಕಬ್ಬು ಬೆಳೆಯಲಾಗುತ್ತಿದೆ. ಈ ಬಾರಿ ಕಬ್ಬಿಗೆ ಪ್ರತಿ ಟನ್‌ಗೆ 3,400 ರೂ. ಬೆಲೆ ನಿಗದಿಪಡಿಸಲಾಗಿದೆ. ಕಳೆದ ಹಂಗಾಮಿನಲ್ಲಿ 3,150 ರೂ. ನಿಗದಿಪಡಿಸಲಾಗಿತ್ತು. ಸರಾಸರಿ ಇಳುವರಿ ಪ್ರಮಾಣ 10.5ರಷ್ಟಿದೆ ಎಂದು ತಿಳಿಸಿದರು.