ಬೆಂಗಳೂರು/ನವದೆಹಲಿ: ಹಾಸನ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಮೇಲಿನ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಸಂತ್ರಸ್ತೆಯನ್ನು ಅಪಹರಿಸಿದ ಆರೋಪದಲ್ಲಿ ಭವಾನಿ ರೇವಣ್ಣಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದಿದೆ.
ಪ್ರಕರಣ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದ ಹೈಕೋರ್ಟ್ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್, ಭವಾನಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ಆದೇಶಿಸಿದ್ದರು. ಈ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿತ್ತು. ಇದರ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಉಜ್ಜಲ್ ಭುಯಾನ್ ಅವರಿದ್ದ ವಿಭಾಗೀಯ ಪೀಠ ಈ ಆದೇಶ ನೀಡಿದೆ.
ಹೈಕೋರ್ಟ್‌ನ ಆದೇಶ ಏನಾಗಿತ್ತು: ''ಪೊಲೀಸರು ಆರೋಪಿಯನ್ನು ಕಸ್ಟಡಿಗೆ ಕೇಳಿದರೆ, ಕಣ್ಣು ಮುಚ್ಚಿಕೊಂಡು ನ್ಯಾಯಾಲಯವು ನೀಡಬೇಕು ಎಂದು ಪ್ರಾಸಿಕ್ಯೂಷನ್ ವಾದಿಸಿದೆ. ಇದು ಸುಪ್ರೀಂಕೋರ್ಟ್ ತೀರ್ಪಿಗೆ ವಿರುದ್ಧವಾಗಿದೆ. ಬ್ಯಾಂಕಾಕ್‌ನಲ್ಲಿ ನಡೆದ ವಿಶ್ವಸಂಸ್ಥೆಯ ಸಭೆಯಲ್ಲೂ ಮಹಿಳೆಯನ್ನು ಬಂಧಿಸುವಂತಿಲ್ಲ ಎಂದು ಹೇಳಲಾಗಿದೆ'' ಎಂದು ನ್ಯಾ.ದೀಕ್ಷಿತ್ ಅವರು ಆದೇಶದಲ್ಲಿ ತಿಳಿಸಿದ್ದರು.
''ವಿಚಾರಣೆ ವೇಳೆ, ಎಸ್‌ಐಟಿ ವಿಚಾರಣೆಗೆ ಭವಾನಿ ಸಹಕರಿಸಿಲ್ಲ ಎಂದು ಪ್ರಾಸಿಕ್ಯೂಷನ್ ವಾದಿಸಿತ್ತು. ಮೂರು ದಿನಗಳಲ್ಲಿ ಒಟ್ಟು 85 ಪ್ರಶ್ನೆಗಳನ್ನು ಕೇಳಲಾಗಿದ್ದು, ಎಲ್ಲದಕ್ಕೂ ಅವರು ಉತ್ತರಿಸಿದ್ದಾರೆ. ತಾವು ಬಯಸಿದಂತೆ ಆರೋಪಿ ಉತ್ತರಿಸಬೇಕು ಎಂದು ಪೊಲೀಸರು ನಿರೀಕ್ಷಿಸಲಾಗದು. ಸಂತ್ರಸ್ತೆಗೆ ಆಹಾರ ನೀಡಿಲ್ಲ ಮತ್ತು ಉಡುಪು ಬದಲಿಸಲು ಭವಾನಿ ಅವಕಾಶ ನೀಡಿಲ್ಲ ಎಂದು ಪ್ರಾಸಿಕ್ಯೂಷನ್ ವಾದಿಸಿತ್ತು. ಸಂತ್ರಸ್ತೆಯ ಸಿಆರ್‌ಪಿಸಿ ಸೆಕ್ಷನ್ 164 ಹೇಳಿಕೆ ಓದಿದಾಗ, ಬಟ್ಟೆ ಮತ್ತು ಊಟವನ್ನು ಭವಾನಿ ಕಳುಹಿಸಿದ್ದರು ಎಂದು ಹೇಳಿದ್ದಾರೆ. ಹೀಗಾಗಿ, ಸಂತ್ರಸ್ತೆಯನ್ನು ಒತ್ತೆಯಲ್ಲಿ ಇಡಲಾಗಿತ್ತು ಎನ್ನಲಾಗದು'' ಎಂದು ಹೈಕೋರ್ಟ್ ಹೇಳಿತ್ತು.
ಇದನ್ನೂ ಓದಿ:ತವರಿನಿಂದ ಬಾರದ ಪತ್ನಿ: ಸೇಡಿಗೆ ತಂಗಿ ಮಗನ ಕೊಂದ ವ್ಯಕ್ತಿಗೆ ಜೀವಾವಧಿ ಶಿಕ್ಷೆ
''ಮಹಿಳೆಯನ್ನು ಅನಗತ್ಯವಾಗಿ ಬಂಧಿಸುವ ವಿಚಾರವನ್ನೂ ಆದೇಶದಲ್ಲಿ ಪ್ರಸ್ತಾಪಿಸಲಾಗಿದೆ. ಮಹಿಳೆಯರನ್ನು ಕಸ್ಟಡಿಗೆ ನೀಡುವುದರ ವಿರುದ್ಧ ನಾನಿದ್ದೇನೆ. ನಮ್ಮ ಸಾಮಾಜಿಕ ವ್ಯವಸ್ಥೆಯಲ್ಲಿ ಮಹಿಳೆ ಕುಟುಂಬದ ಆಧಾರ. ಆಕೆಯನ್ನು ಪೊಲೀಸರು ಬಂಧಿಸಿದರೆ ಇಡೀ ಕುಟುಂಬ ವ್ಯವಸ್ಥೆಗೆ ಹಾನಿಯಾಗುತ್ತದೆ. ಬಂಧನ ವಾರಂಟ್ ಜಾರಿ ಮಾಡಿದ ಮೇಲೆ ಜಾಮೀನು ಕೇಳುವ ಹಾಗೆ ಇಲ್ಲ ಎಂಬುದಕ್ಕೂ ಆದೇಶದಲ್ಲಿ ಉತ್ತರಿಸಿದ್ದೇನೆ. ಜಾಮೀನು ನೀಡುವಂತಿಲ್ಲ ಎಂಬುದು ಸ್ಥಾಪಿತ ನಿಯಮವಲ್ಲ. ಅದು ಸಂದರ್ಭ ಮತ್ತು ಪ್ರಕರಣದ ವಾಸ್ತವಿಕ ಅಂಶಗಳನ್ನು ಆಧರಿಸಿರುತ್ತದೆ ಎಂದು ಸುಪ್ರೀಂಕೋರ್ಟ್ ಹೇಳಿದೆ'' ಎಂದು ನ್ಯಾಯಮೂರ್ತಿ ದೀಕ್ಷಿತ್ ಅವರು ತಮ್ಮ ಆದೇಶದಲ್ಲಿ ವಿವರಿಸಿದ್ದರು.
ಇದನ್ನೂ ಓದಿ:ಪರಪ್ಪನ ಅಗ್ರಹಾರದಿಂದ ಸಾಕ್ಷಿದಾರರಿಗೆ ಆರೋಪಿ ಬೆದರಿಕೆ: ಜೈಲಧಿಕಾರಿಗಳ ವಿರುದ್ಧ ತನಿಖೆಗೆ ಕೋರ್ಟ್ ಆದೇಶ