ಬೆಂಗಳೂರು:ಎಚ್.ಡಿ.ರೇವಣ್ಣನವರ ಪುತ್ರ, ವಿಧಾನ ಪರಿಷತ್ ಜೆಡಿಎಸ್ ಸದಸ್ಯ ಡಾ.ಸೂರಜ್ ರೇವಣ್ಣ ವಿರುದ್ಧದ ಯುವಕನ ಮೇಲಿನ ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾಯಿಸಲಾಗಿದೆ.
ಹಾಸನದ ಹೊಳೆನರಸೀಪುರ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿರುವ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸೂರಜ್ ರೇವಣ್ಣರನ್ನು ಪೊಲೀಸರು ಬಂಧಿಸಿದ್ದಾರೆ. ಇದೀಗ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾಯಿಸಿ ರಾಜ್ಯ ಕಾನೂನು-ಸುವ್ಯವಸ್ಥೆ ಎಡಿಜಿಪಿ ಆರ್.ಹಿತೇಂದ್ರ ಆದೇಶಿಸಿದ್ದಾರೆ.
ಇದುವರೆಗಿನ ತನಿಖಾ ವರದಿಯನ್ನು ಸಿಐಡಿ ತನಿಖಾಧಿಕಾರಿಗಳಿಗೆ ಹಸ್ತಾಂತರಿಸುವಂತೆ ಹೊಳೆನರಸೀಪುರ ಪೊಲೀಸರಿಗೆ ಸೂಚಿಸಲಾಗಿದೆ. ಇದೇ ವೇಳೆ, ಅಗತ್ಯ ತನಿಖಾ ತಂಡ ರಚಿಸುವಂತೆ ಸಿಐಡಿಯ ಆರ್ಥಿಕ ಅಪರಾಧ ಮತ್ತು ವಿಶೇಷ ತನಿಖಾದಳದ ಡಿಜಿಪಿಗೆ ನಿರ್ದೇಶಿಸಲಾಗಿದೆ.
ಅಸಹಜ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಸಂತ್ರಸ್ತ ಯುವಕ ನೀಡಿದ್ದ ದೂರಿನನ್ವಯ ಶನಿವಾರ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 377 (ಅಸ್ವಾಭಾವಿಕ ಅಪರಾಧ), 342 (ತಪ್ಪಾದ ಬಂಧನಕ್ಕೆ ಶಿಕ್ಷೆ) ಹಾಗೂ 506 (ಬೆದರಿಕೆ) ಅಡಿಯಲ್ಲಿ ಸೂರಜ್ ರೇವಣ್ಣ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು.
ಇದನ್ನೂ ಓದಿ:ಯುವಕನ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಸೂರಜ್ ರೇವಣ್ಣ ಬಂಧನ - Suraj Revanna Arrest