ದಾವಣಗೆರೆ:ಪಾನಿಪೂರಿ ಸೇವಿಸಿ 19 ಮಕ್ಕಳು ಅಸ್ವಸ್ಥರಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಬಾಲಕ ಚಿಕಿತ್ಸೆ ಫಲಿಸದೆ ಶನಿವಾರ ರಾತ್ರಿ ಮೃತಪಟ್ಟಿದ್ದಾನೆ. ಹಜರತ್ ಬಿಲಾಲ್ (6) ಮೃತಪಟ್ಟ ಬಾಲಕ. ಹರಿಹರ ತಾಲೂಕಿನ ಮಲೇಬೆನ್ನೂರು ಪಟ್ಟಣದಲ್ಲಿ ಪಾನಿಪೂರಿ ತಿಂದು ಹಲವು ಮಕ್ಕಳು ಅನಾರೋಗ್ಯಕ್ಕೀಡಾಗಿದ್ದ ಘಟನೆ ಇತ್ತೀಚೆಗೆ ನಡೆದಿತ್ತು.
ಘಟನೆಯ ಸಂಪೂರ್ಣ ವಿವರ: ಮಾರ್ಚ್ 15ರಂದು ತಳ್ಳುಗಾಡಿಯಲ್ಲಿ ಮಾರಾಟ ಮಾಡುತ್ತಿದ್ದ ಪಾನಿಪೂರಿ ಸೇವಿಸಿರುವ ಮಕ್ಕಳು ಅಸ್ವಸ್ಥಗೊಂಡಿದ್ದರು. ಬಾಲಕ ಬಿಲಾಲ್ಗೆ ತಡರಾತ್ರಿ ವಾಂತಿ, ಭೇದಿ, ಹೊಟ್ಟೆ ನೋವು ಕಾಣಿಸಿಕೊಂಡಿತ್ತು. ಪೋಷಕರು ಸಮೀಪದ ಮಲೇಬೆನ್ನೂರಿನ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿದ್ದರು. ನಂತರ ಹೆಚ್ಚಿನ ಚಿಕಿತ್ಸೆಗೆ ದಾವಣಗೆರೆ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದರು. ಮೂರು ದಿನಗಳ ಕಾಲ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಬಾಲಕ ಕೊನೆಯುಸಿರೆಳೆದಿದ್ದಾನೆ. ಇನ್ನೂ ನಾಲ್ವರು ಮಕ್ಕಳ ಪರಿಸ್ಥಿತಿ ಗಂಭೀರವಾಗಿದ್ದು ಚಿಕಿತ್ಸೆ ಮುಂದುವರೆದಿದೆ. ಉಳಿದಂತೆ ಕೆಲವರು ಚೇತರಿಸಿಕೊಂಡಿದ್ದಾರೆ.
ಈ ಬಗ್ಗೆ ಮೃತ ಬಾಲಕನ ಅಜ್ಜ ಶೇರ್ ಅಲಿ ಮಾತನಾಡಿ, "ತಳ್ಳುವ ಗಾಡಿಯಲ್ಲಿ ಬರುವ ಪಾನಿಪೂರಿ ಸೇವಿಸಿ ನಮ್ಮ ಬಾಲಕ ಸಾವನ್ನಪ್ಪಿದ್ದಾನೆ. ಗುರುವಾರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರು ಫುಡ್ ಪಾಯಿಸನ್ ಆಗಿದೆ ಎಂದು ಹೇಳಿದ್ದಾರೆ. ಸಂಜೆ ಹೊತ್ತು ಮಲೇಬೆನ್ನೂರಿನ ಜಾಮೀಯಾ ಮಸೀದಿ ಬಳಿ ಪಾನಿಪೂರಿ ಸೇವಿಸಿ ಮಕ್ಕಳು ಅಸ್ವಸ್ಥರಾಗಿದ್ದರು. ಮಲೇಬೆನ್ನೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದೇವೆ" ಎಂದರು.