ಮೈಸೂರು : ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಹಿನ್ನೆಲೆ ರಾಜ್ಯ ಸರ್ಕಾರದ ಪರವಾಗಿ ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್. ಸಿ ಮಹದೇವಪ್ಪ ಅವರು ಮೈಸೂರು ರಾಜವಂಶಸ್ಥರಾದ ಪ್ರಮೋದಾದೇವಿ ಒಡೆಯರ್ ಅವರಿಗೆ ಅಧಿಕೃತ ಆಹ್ವಾನ ನೀಡಿದರು.
ಭಾನುವಾರ ಅರಮನೆಯಲ್ಲಿರುವ ನಿವಾಸದಲ್ಲಿ ರಾಜವಂಶಸ್ಥರಾದ ಪ್ರಮೋದಾದೇವಿ ಒಡೆಯರ್ ಅವರನ್ನು ಭೇಟಿಯಾಗಿ ಸಾಂಪ್ರದಾಯಿಕವಾಗಿ ಫಲತಾಂಬೂಲ ನೀಡಿ, ದಸರಾ ಉತ್ಸವಕ್ಕೆ ಆತ್ಮೀಯವಾಗಿ ಆಹ್ವಾನಿಸಿ, ಸರ್ಕಾರದಿಂದ ಪ್ರತಿವರ್ಷ ನೀಡಲಾಗುವ ಗೌರವಧನದ ಚೆಕ್ ನೀಡಿದರು.
ಈ ವೇಳೆ ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ, ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಜಿಲ್ಲಾ ಪಂಚಾಯತ್ ಸಿಇಒ ಕೆ. ಎಂ ಗಾಯಿತ್ರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ, ಅಪರ ಜಿಲ್ಲಾಧಿಕಾರಿ ಪಿ. ಶಿವರಾಜು, ಅರಮನೆ ಮಂಡಳಿ ಉಪನಿರ್ದೇಶಕ ಸುಬ್ರಹ್ಮಣ್ಯ, ಅರಮನೆ ಎಸಿಪಿ ಚಂದ್ರಶೇಖರ್ ಸೇರಿದಂತೆ ಮುಂತಾದವರು ಹಾಜರಿದ್ದರು.
ಯುವ ದಸರಾ ಸ್ಥಳ ಪರಿಶೀಲನೆ : ಸಚಿವ ಮಹದೇವಪ್ಪ ಅವರು ನಗರದ ಹೊರವಲಯದ ಉತ್ತನಹಳ್ಳಿ ಸಮೀಪದಲ್ಲಿ ನಡೆಯುವ ಯುವ ದಸರಾ ಕಾರ್ಯಕ್ರಮ ಸ್ಥಳವನ್ನು ಪರಿಶೀಲಿಸಿದರು.
ಕಾರ್ಯಕ್ರಮದ ಆಯೋಜನೆ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದ ಸಚಿವರು, ನಾಡಹಬ್ಬ ದಸರಾ ಮಹೋತ್ಸವದಲ್ಲಿ ನಡೆಯುವ ಆಕರ್ಷಕ ಕಾರ್ಯಕ್ರಮಗಳಲ್ಲಿ "ಯುವ ದಸರಾ" ಪ್ರಮುಖವಾಗಿದ್ದು, ಮೈಸೂರು ನಗರ ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳಿಂದ ಜನರು ಕಾರ್ಯಕ್ರಮ ವೀಕ್ಷಣೆಗೆ ಆಗಮಿಸುತ್ತಾರೆ. ಹೀಗಾಗಿ ಅಗತ್ಯ ಸೌಲಭ್ಯವನ್ನು ಕಲ್ಪಿಸುವಂತೆ ಸೂಚಿಸಿದರು.