ಬೆಂಗಳೂರು: ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರ(ಕೆಎಸ್ಎಲ್ಯು)ದ ಸೂಚನೆ ಮೇರೆಗೆ ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ 2024-25ನೇ ಸಾಲಿನ ಆಸ್ತಿ ತರಿಗೆಯನ್ನು ಆರ್ಥಿಕ ವರ್ಷದ ಮೊದಲ 30 ದಿನಗಳಲ್ಲಿ ಪೂರ್ಣ ಪ್ರಮಾಣದಲ್ಲಿ ಪಾವತಿಸಿದ್ದಲ್ಲಿ ನೀಡಲಾಗುತ್ತಿದ್ದ ಶೇ.5ರಷ್ಟು ವಿನಾಯಿತಿಯು ಈ ತಿಂಗಳ ಅಂತ್ಯದವರೆಗೆ ಲಭ್ಯವಾಗುವಂತಾಗಿದೆ.
ಪ್ರಸಕ್ತ ಆರ್ಥಿಕ ವರ್ಷದ ಆಸ್ತಿ ತೆರಿಗೆ ಪಾವತಿಗೆ ಏಪ್ರಿಲ್ ತಿಂಗಳಲ್ಲಿ ನೀಡಲಾಗುತ್ತಿದ್ದ ಶೇ.5ರಷ್ಟು ರಿಯಾಯಿತಿಯನ್ನು ಜುಲೈ 31ರ ವರೆಗೆ ವಿಸ್ತರಿಸಿ ನಗರಾಭಿವೃದ್ಧಿ ಇಲಾಖೆ ಆದೇಶ ಹೊರಡಿಸಿದೆ. ಕರ್ನಾಟಕ ಕಾನೂನು ಸೇವೆಗಳ ಪ್ರಾಧಿಕಾರದ ಮನವಿಯಂತೆ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ. ಈ ವಿಚಾರವಾಗಿ ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಜೂನ್ 4ರಂದು ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ. ಎಲ್. ರಘುನಾಥ್ ಪತ್ರ ಬರೆದಿದ್ದರು. ಇದರಿಂದ ಇನ್ನೂ ಆಸ್ತಿ ತೆರಿಗೆ ಪಾವತಿಸದೇ ಇದ್ದವರು ಜುಲೈ 31ರೊಳಗೆ ಪೂರ್ಣ ಪ್ರಮಾಣದಲ್ಲಿ ಆಸ್ತಿ ತೆರಿಗೆ ಪಾವತಿಸಿ ಶೇ.5ರಷ್ಟು ರಿಯಾಯಿತಿ ಪಡೆದುಕೊಳ್ಳಬಹುದಾಗಿದೆ.
ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದಿಂದ ಜುಲೈ 13ರಂದು ರಾಜ್ಯವ್ಯಾಪಿ ರಾಷ್ಟ್ರೀಯ ಲೋಕ್ ಅದಾಲತ್ ಆಯೋಜಿಸಲಾಗಿದೆ. ಇದರಲ್ಲಿ ಸಾವಿರಾರು ಪ್ರಕರಣಗಳನ್ನು ಇತ್ಯರ್ಥಪಡಿಸಲಾಗುತ್ತದೆ. ರಾಜ್ಯದಲ್ಲಿ ದೊಡ್ಡ ಪ್ರಮಾಣದಲ್ಲಿ ಆಸ್ತಿ ತೆರಿಗೆ ಪಾವತಿ ಬಾಕಿ ಇದೆ ಎಂಬ ವಿಚಾರ ಪ್ರಾಧಿಕಾರದ ಗಮನಕ್ಕೆ ಬಂದಿದೆ. ಶೇ.5ರಷ್ಟು ರಿಯಾಯಿತಿಯನ್ನು ಜುಲೈ 13ರ ವರೆಗೆ ನೀಡಿದರೆ ಲೋಕ ಅದಾಲತ್ ಅವಕಾಶವನ್ನು ಬಳಸಿಕೊಂಡು ಆಸ್ತಿ ಮಾಲೀಕರು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಸ್ತಿ ತೆರಿಗೆ ಪಾವತಿಸಬಹುದು. ಇದರಿಂದ ಸರ್ಕಾರದ ಬೊಕ್ಕಸಕ್ಕೆ ಆದಾಯ ಬರುತ್ತದೆ. ಹಾಗಾಗಿ ರಿಯಾಯಿತಿ ಅವಕಾಶವನ್ನು ವಿಸ್ತರಿಸಬೇಕು ಎಂದು ಪ್ರಾಧಿಕಾರ ಮನವಿ ಮಾಡಿತ್ತು.