ಬೆಂಗಳೂರು :ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣದ ತನಿಖೆಗೆ ಸರ್ಕಾರ ನೀಡಿದ್ದ ಅನುಮತಿ ಹಿಂಪಡೆದಿದ್ದ ಕ್ರಮ ಪ್ರಶ್ನಿಸಿ, ಸಿಬಿಐ ಮತ್ತು ಬಿಜೆಪಿ ಮುಖಂಡ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿರುವ ಅರ್ಜಿಗಳ ಕುರಿತಂತೆ ವಾದ ಮಂಡಿಸಲು ಸರ್ಕಾರ ಕಾಲಾವಕಾಶ ಕೋರಿದೆ.
ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಕೆ ಸೋಮಶೇಖರ್ ಮತ್ತು ಉಮೇಶ್ ಎಂ. ಅಡಿಗ ಅವರ ನೇತೃತ್ವದ ವಿಭಾಗೀಯ ಪೀಠಕ್ಕೆ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಕಾಲಾವಕಾಶ ಕೋರಿದರು. ಇದನ್ನು ಮನ್ನಿಸಿದ ನ್ಯಾಯಪೀಠ ವಿಚಾರಣೆಯನ್ನು ಫೆಬ್ರವರಿ 29ಕ್ಕೆ ಮುಂದೂಡಿತು. ವಿಚಾರಣೆ ಪ್ರಾರಂಭವಾಗುತ್ತಿದ್ದಂತೆ ಡಿ. ಕೆ ಶಿವಕುಮಾರ್ ಪರ ವಕೀಲ ಡಾ. ಅಭಿಷೇಕ್ ಮನು ಸಿಂಘ್ವಿ ಅರ್ಜಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಲಾಗಿದೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು.
ಈ ನಡುವೆ ಲೋಕಾಯುಕ್ತ ಎಡಿಜಿಟಿ ಮಧ್ಯಪ್ರವೇಶಿಕೆ ಕೋರಿರುವ ಅರ್ಜಿಯನ್ನು ನ್ಯಾಯಾಲಯ ಪುರಸ್ಕರಿಸಿದ್ದು, ಲೋಕಾಯುಕ್ತದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ವೆಂಕಟೇಶ್ ಅರಬಟ್ಟಿ ಅವರಿಗೆ ನೋಟಿಸ್ ಪಡೆಯಲು ಸೂಚಿಸಲಾಗಿದೆ.
ಬಸನಗೌಡ ಪಾಟೀಲ್ ಯತ್ನಾಳ್ ಪರ ವಕೀಲ ವೆಂಕಟೇಶ್ ದಳವಾಯಿ ಅವರಿಗೆ ಕಚೇರಿ ಆಕ್ಷೇಪಣೆಗಳನ್ನು ಸರಿಪಡಿಸಲು ನ್ಯಾಯಾಲಯ ಸೂಚಿಸಿತು. ಆಕ್ಷೇಪಣೆ, ಪ್ರತ್ಯುತ್ತರ ಸಲ್ಲಿಸಲು ಕಾಲಾವಕಾಶ ನೀಡಿ, ಅಂತಿಮವಾಗಿ ವಿಚಾರಣೆಯನ್ನು ಮುಂದೂಡಿತು.