ಬೆಂಗಳೂರು :ದ್ವೇಷ ಭಾಷಣದ ಆರೋಪದ ಮೇಲೆ ಬಿಜೆಪಿ ನಾಯಕರಾದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಂಸದ ತೇಜಸ್ವಿ ಸೂರ್ಯ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸೇರಿದಂತೆ ಮತ್ತಿತರರ ವಿರುದ್ಧ ಕ್ರಮ ಕೈಗೊಂಡು, ಅಂತಹ ಭಾಷಣಗಳು ಮರುಕಳಿಸದಂತೆ ಮಾಡುವಲ್ಲಿ ವಿಫಲವಾಗಿರುವ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ರದ್ದುಪಡಿಸಿ ಆದೇಶಿಸಿದೆ.
ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಮೊಹಮ್ಮದ್ ಖಲೀಮುಲ್ಲಾ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಎನ್. ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ. ವಿ ಅರವಿಂದ್ ಅವರ ವಿಭಾಗೀಯ ಪೀಠ ಅರ್ಜಿ ವಜಾಗೊಳಿಸಿ ಆದೇಶಿಸಿದೆ.
ಅರ್ಜಿಯು ತುಂಬಾ ಸಾಮಾನ್ಯವಾಗಿದ್ದು, ಇವುಗಳನ್ನು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಎಂದು ಪರಿಗಣಿಸಲಾಗದು. ಸಾರ್ವಜನಿಕ ಹಿತಾಸಕ್ತಿ ಹೊರತುಪಡಿಸಿ ಬೇರೆ ಉದ್ದೇಶವನ್ನೂ ಈ ಅರ್ಜಿ ಹೊಂದಿದೆ. ರಾಜಕೀಯ ಮತ್ತು ಕೋಮು ಉದ್ದೇಶದಿಂದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ರೂಪದಲ್ಲಿ ಸಲ್ಲಿಕೆಯಾಗಿರುವ ಅರ್ಜಿ ಪುರಸ್ಕರಿಸಲಾಗದು ಎಂದು ಪೀಠ ತಿಳಿಸಿದೆ.
ಅಲ್ಲದೇ ಇದಕ್ಕೂ ಮುನ್ನ, ಅರ್ಜಿಯ ಮೇಲೆ ಕಣ್ಣಾಡಿಸಿದ ಪೀಠವು ಹೈಕೋರ್ಟ್ನ ವೇದಿಕೆಯನ್ನು ಕ್ಷುಲ್ಲಕ ಅರ್ಜಿಗಳನ್ನು ಸಲ್ಲಿಸುವ ಮೂಲಕ ಏಕೆ ದುರ್ಬಳಕೆ ಮಾಡಿಕೊಳ್ಳುತ್ತೀರಿ? ನಿಮ್ಮ ಅರ್ಜಿದಾರರು ಏನು ಮಾಡುತ್ತಿದ್ದಾರೆ ಎಂಬುದು ನಿಮಗೆ ತಿಳಿದಿಲ್ಲ ಎಂದರೆ ಏಕೆ ಅರ್ಜಿ ಸಲ್ಲಿಸುತ್ತೀರಿ? ಸಿವಿಲ್ ಕಾಂಟ್ರ್ಯಾಕ್ಟರ್ ಇಂಥ ಅನ್ಸಿವಿಲ್ ಅರ್ಜಿ ಸಲ್ಲಿಸಿದ್ದಾರೆಯೇ? ಎಂದು ಮೌಖಿಕವಾಗಿ ಕಿಡಿಕಾರಿತು.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ, ಪ್ರತಿವಾದಿಗಳಾಗಿರುವ ಬಿಜೆಪಿ ನಾಯಕರು ಮಾಡಿರುವ ದ್ವೇಷ ಭಾಷಣಗಳು ಮಾಧ್ಯಮ, ಸಾಮಾಜಿಕ ಮಾಧ್ಯಮಗಳಿಂದ ತಿಳಿದು ಬಂದಿದೆ. ನಿರ್ದಿಷ್ಟ ಕೋಮನ್ನು ಗುರಿಯಾಗಿಸಿ ಅವರು ದಾಳಿ ನಡೆಸಿದ್ದಾರೆ. ಈ ಸಂಬಂಧ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಯಾವುದೇ ಕ್ರಮಕೈಗೊಳ್ಳಲಾಗಿಲ್ಲ. ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಈ ರೀತಿಯ ಭಾಷಣ ಮಾಡುವವರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಕೋರಿದರು.
ಈ ವೇಳೆ ಅರ್ಜಿದಾರ ಯಾವ ವೃತ್ತಿ ಮಾಡುತ್ತಿದ್ದಾರೆ ಎಂದು ಕೇಳಿತು. ಇದಕ್ಕೆ ವಕೀಲರು ಮಾಹಿತಿ ಪಡೆದು ತಿಳಿಸುವುದಾಗಿ ಹೇಳಿದರು. ಅಲ್ಲದೆ, ಹಿರಿಯ ವಕೀಲರು ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆಯಲ್ಲಿ ಭಾಗಿಯಾಗಿದ್ದಾರೆ. ಹೀಗಾಗಿ ಅರ್ಜಿ ವಿಚಾರಣೆ ಮುಂದೂಡಬೇಕು ಎಂದು ಕೋರಿದರು.
ಜತೆಗೆ, ಸಹೋದ್ಯೋಗಿ ವಕೀಲರಿಂದ ಮಾಹಿತಿ ಪಡೆದು ಅರ್ಜಿದಾರರು ಸಿವಿಲ್ ಗುತ್ತಿಗೆದಾರರಾಗಿದ್ದು, ಸಾಮಾಜಿಕ ಕಾರ್ಯಕರ್ತರಾಗಿದ್ದಾರೆ ಎಂದು ಪೀಠಕ್ಕೆ ತಿಳಿಸಿದರು. ಇದಕ್ಕೆ ಪೀಠ, ಅರ್ಜಿದಾರರು ಸಿವಿಲ್ ಗುತ್ತಿಗೆದಾರರಾಗಿದ್ದು, ಅನ್ಸಿವಿಲ್ರಂತೆ ಅರ್ಜಿ ಸಲ್ಲಿಸಿದ್ದಾರೆ. ಈ ರೀತಿಯ ಅರ್ಜಿಗಳು ನ್ಯಾಯಾಲಯ ಅಮೂಲ್ಯವಾದ ಸಮಯವನ್ನು ಕಳೆಯುವಂತೆ ಮಾಡುತ್ತಿವೆ ಎಂದು ತಿಳಿಸಿ ಅರ್ಜಿ ವಜಾಗೊಳಿಸಿ ಆದೇಶಿಸಿದರು.
ಪ್ರಕರಣದ ಹಿನ್ನೆಲೆ : ದ್ವೇಷ ಭಾಷಣ ಮಾಡಿರುವ ಬಿಜೆಪಿ ನಾಯಕರ ವಿರುದ್ಧ ಸುಪ್ರೀಂಕೋರ್ಟ್ ಮಾರ್ಗಸೂಚಿ ಅನ್ವಯ ಕ್ರಮಕೈಗೊಳ್ಳದ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ನಿರ್ದೇಶಿಸಬೇಕು. ದ್ವೇಷ ಭಾಷಣ, ದೊಂಬಿ ದೌರ್ಜನ್ಯ, ದೊಂಬಿ ಕೊಲೆಯು ಗಂಭೀರ ಪರಿಣಾಮಗಳನ್ನು ಉಂಟು ಮಾಡಲಿದೆ ಎಂಬುದರ ಸಂಬಂಧ ಮಾಧ್ಯಮಗಳ ಮೂಲಕ ಜಾಗೃತಿ ಮೂಡಿಸಲು ರಾಜ್ಯ ಸರ್ಕಾರಕ್ಕೆ ಆದೇಶಿಸಬೇಕು.
ದ್ವೇಷ ಭಾಷಣ ಮಾಡುವವರ ವಿರುದ್ಧ ಸುಪ್ರೀಂಕೋರ್ಟ್ ನಿರ್ದೇಶನದಂತೆ ಸ್ವಯಂಪ್ರೇರಿತವಾಗಿ ಪೊಲೀಸರು ಕ್ರಮಕ್ಕೆ ಮುಂದಾಗಲು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಬೇಕು. ದ್ವೇಷ ಭಾಷಣ ಮತ್ತು ದೊಂಬಿ ಕೊಲೆ ಸಂಬಂಧಿತ ದಾಖಲಾದ ಪ್ರಕರಣಗಳ ವಿಚಾರಣೆ ನಡೆಸಲು ಜಿಲ್ಲಾ ಮಟ್ಟದಲ್ಲಿ ನಿರ್ದಿಷ್ಟ ನ್ಯಾಯಾಲಯ ಗೊತ್ತು ಮಾಡುವ ಸಂಬಂಧ ಸರ್ಕಾರಕ್ಕೆ ಅಧಿಸೂಚನೆ ಹೊರಡಿಸಲು ಆದೇಶಿಸಬೇಕು. ಈ ಕುರಿತಾದ ಪ್ರಕರಣಗಳ ಸಂಜ್ಞೇ ಪರಿಗಣಿಸಿದ ಆರು ತಿಂಗಳ ಒಳಗೆ ಪೂರ್ಣಗೊಳ್ಳಬೇಕು ಎಂದು ನಿರ್ದೇಶಿಸಬೇಕು ಎಂಬುದು ಅರ್ಜಿಯಲ್ಲಿ ಕೋರಲಾಗಿತ್ತು.
ಅರ್ಜಿಯಲ್ಲಿ ಕೇಂದ್ರದ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ, ಸಂಸದ ತೇಜಸ್ವಿ ಸೂರ್ಯ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಪರಿಷತ್ ಸದಸ್ಯ ಸಿ ಟಿ ರವಿ, ಮಾಜಿ ಶಾಸಕ ಎಂ ಪಿ ರೇಣುಕಾಚಾರ್ಯ, ಮಾಜಿ ಸಂಸದ ಪ್ರತಾಪ್ ಸಿಂಹ, ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್, ನಮೋ ಬ್ರಿಗೇಡ್ ಮುಖ್ಯಸ್ಥ ಚಕ್ರವರ್ತಿ ಸೂಲಿಬೆಲೆ, ಬಿಜೆಪಿಯ ಉಚ್ಚಾಟಿತ ನಾಯಕ ಕೆ. ಎಸ್ ಈಶ್ವರಪ್ಪ ಅವರನ್ನು ಪ್ರತಿವಾದಿಗಳನ್ನಾಗಿಸಿದ್ದು, ಅವರ ವಿರುದ್ಧ ಕ್ರಮಕ್ಕೆ ಕೋರಿದ್ದರು.
ಇದನ್ನೂ ಓದಿ :ಮಾಹಿತಿ ಹಕ್ಕು ಆಯೋಗದ ನಿವೃತ್ತ ಅಧಿಕಾರಿಗೆ ಕೇಂದ್ರದ ಯೋಜನೆಯಡಿ ಚಿಕಿತ್ಸೆ ಪಡೆಯಲು ಹೈಕೋರ್ಟ್ ಅನುಮತಿ - Retired Officer To Get Treatment