ಬೆಂಗಳೂರು :ಮಂಗಳೂರು ನಗರದ ಕಂಕನಾಡಿ ವೃತ್ತದ ಸಮೀಪದ ಮಸೀದಿಯೊಂದರ ಮುಂಭಾಗದ ರಸ್ತೆಯಲ್ಲೇ ಮುಸ್ಲಿಮರು ನಮಾಜ್ ಮಾಡಿದ ಘಟನೆಗೆ ಸಂಬಂಧಿಸಿದಂತೆ, ಕೋಮು ದ್ವೇಷ ಭಾವನೆ ಹುಟ್ಟಿಸುವ ರೀತಿಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡ ಆರೋಪ ಸಂಬಂಧ, ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್‌ವೆಲ್ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ಪ್ರಕರಣ ಸಂಬಂಧ ತಮ್ಮ ವಿರುದ್ಧ ಮಂಗಳೂರು ನಗರದ ಸಿಇಎನ್ ಠಾಣಾ ಪೊಲೀಸರು ದಾಖಲಿಸಿರುವ ಎಫ್‌ಐಆರ್ ರದ್ದುಪಡಿಸಬೇಕು ಎಂದು ಕೋರಿ ಶರಣ್ ಪಂಪ್‌ವೆಲ್ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠ, ತನಿಖೆಗೆ ತಡೆಯಾಜ್ಞೆ ನೀಡಿದ್ದು ವಿಚಾರಣೆ ಮುಂದೂಡಿದೆ.
ಮಂಗಳೂರಿನ ಕಂಕನಾಡಿ ಸಮೀಪದ ಮಸೀದಿಯೊಂದರ ಮುಂಭಾಗದ ರಸ್ತೆಯಲ್ಲೇ ಮುಸ್ಲಿಮರು ನಮಾಜ್ ಮಾಡಿದ್ದಕ್ಕೆ ಕದ್ರಿ ಠಾಣಾ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ್ದರು. ಪ್ರಕರಣ ದಾಖಲಿಸಿದ್ದ ಅಧಿಕಾರಿಯನ್ನು ಕಡ್ಡಾಯ ರಜೆ ಮೇಲೆ ಕಳುಹಿಸಲಾಗಿತ್ತು. ನಂತರ ಕೆಲವೇ ಗಂಟೆಗಳಲ್ಲಿ ವಿಚಾರಣಾ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿ, ರಸ್ತೆ ಸಂಚಾರಕ್ಕೆ ತಡೆ ಉಂಟುಮಾಡುವ ಯಾವುದೇ ಉದ್ದೇಶ ನಮಾಜ್ ಮಾಡುವವರಿಗೆ ಇರಲಿಲ್ಲ ಎಂದು ಪೊಲೀಸರು ಉಲ್ಲೇಖಿಸಿದ್ದರು.