ಬೆಂಗಳೂರು:ಲೋಕಸಭಾ ಚುನಾವಣೆಯಷ್ಟೇ ರಣರೋಚಕವಾಗಲಿರುವ ವಿಧಾನಸಭೆಯ ಮೂರು ಕ್ಷೇತ್ರಗಳ ಉಪ ಚುನಾವಣೆಗೆ ಸೂಕ್ತ ಮತ್ತು ಸಮರ್ಥ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಬಿಜೆಪಿ-ಜೆಡಿಎಸ್ ಮೈತ್ರಿಕೂಟ ಹಾಗೂ ಕಾಂಗ್ರೆಸ್ ಪಕ್ಷಗಳು ಕಾರ್ಯತಂತ್ರ ರೂಪಿಸುತ್ತಿವೆ.
ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಈ ಬಾರಿ ಅಚ್ಚರಿಯ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಆಲೋಚನೆಯಲ್ಲಿವೆ. ಜಿದ್ದಾಜಿದ್ದಿನ ಕುರುಕ್ಷೇತ್ರವಾಗಲಿರುವ ರಾಮನಗರ ಜಿಲ್ಲೆ ಚನ್ನಪಟ್ಟಣದಲ್ಲಿ ಹಾಲಿ ಸಂಸಸ ಡಾ. ಸಿ.ಎನ್. ಮಂಜುನಾಥ್ ಅವರ ಪತ್ನಿ ಅನುಸೂಯ ಅವರನ್ನು ಬಿಜೆಪಿಯಿಂದ ಕಣಕ್ಕಿಳಿಸಿದರೆ ಹೇಗೆ ಎಂಬ ಚರ್ಚೆ ನಡೆಯುತ್ತಿದೆ.
ಕಾಂಗ್ರೆಸ್‌ನಿಂದ ಕೆಪಿಸಿಸಿ ಅಧ್ಯಕ್ಷ .ಡಿ.ಕೆ. ಶಿವಕುಮಾರ್ ಅವರು ಕಣಕ್ಕಿಳಿಯಲಿರುವ ಬಗ್ಗೆ ಚರ್ಚೆಗಳು ನಡೆಯತ್ತಿರುವ ಹಿನ್ನೆಲೆಯಲ್ಲಿ ಮೈತ್ರಿಕೂಟದಲ್ಲಿ ರಾಜಕೀಯ ಲೆಕ್ಕಾಚಾರಗಳು ತೀವ್ರಗೊಂಡಿವೆ. ಹಾವೇರಿ ಜಿಲ್ಲೆ ಶಿಗ್ಗಾವಿಗೆ ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ಅವರ ಪುತ್ರ ಭರತ್ ಬೊಮ್ಮಾಯಿ ಹಾಗೂ ಬಳ್ಳಾರಿ ಜಿಲ್ಲೆ ಸಂಡೂರು ವಿಧಾನಸಭಾ ಕ್ಷೇತ್ರಕ್ಕೆ ಮಾಜಿ ಸಚಿವ ಬಿ. ಶ್ರೀರಾಮುಲು ಟಿಕೆಟ್‌ಗಾಗಿ ಲಾಬಿ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ಇನ್ನು ಪಕ್ಷದಲ್ಲಿ ಪ್ರಾಥಮಿಕ ಹಂತದಲ್ಲಿ ಮಾತ್ರ ಚರ್ಚೆಯಾಗಿದ್ದು, ಮೂರು ಕ್ಷೇತ್ರಗಳಿಗೆ ಗೆಲ್ಲುವ ಅಭ್ಯರ್ಥಿಗಳನ್ನೇ ಕಣಕ್ಕಿಳಿಸಿ ಆಡಳಿತಾರೂಢ ಕಾಂಗ್ರೆಸ್‌ಗೆ ಠಕ್ಕರ್ ಕೊಡಲು ಬಿಜೆಪಿ ಹಾಗೂ ಜೆಡಿಎಸ್ ರಣತಂತ್ರ ರೂಪಿಸಿವೆ. ಅಂತಿಮವಾಗಿ ಕೇಂದ್ರ ವರಿಷ್ಠರು ತೆಗೆದುಕೊಳ್ಳುವ ನಿರ್ಧಾರಕ್ಕೆ ಎಲ್ಲರೂ ಬದ್ಧರಾಗಿರಬೇಕೆಂದು ಸೂಚನೆ ನೀಡಲಾಗಿದೆ.
ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಕೆಪಿಸಿಸಿ ಅಧ್ಯಕ್ಷ, ಹಾಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಭದ್ರಕೋಟೆಯಾದ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್ ನಿರೀಕ್ಷೆಗೂ ಮೀರಿದ ದಾಖಲೆಯ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಚನ್ನಪಟ್ಟಣ ಉಪಚುನಾವಣೆ ಕಣ ಮದಗಜಗಳ ಹೋರಾಟದ ಜೊತೆಗೆ ಒಕ್ಕಲಿಗ ನಾಯಕರಾದ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಡಿ. ಕೆ. ಶಿವಕುಮಾರ್ ಅವರ ಹೋರಾಟದ ನಡುವೆ, ಒಕ್ಕಲಿಗ ಅಭ್ಯರ್ಥಿಗಳನ್ನೇ ಆಯ್ಕೆ ಮಾಡಲು ಯೋಜಿಸಲಾಗುತ್ತಿದೆ. ಹೀಗಾಗಿ ಚನ್ನಪಟ್ಟಣ ಉಪಚುನಾವಣೆ ಒಕ್ಕಲಿಗರ ಪ್ರಬಲ ನಾಯಕರಿಬ್ಬರ ನಡುವಿನ ಪ್ರತಿಷ್ಠೆಯ ಕಣವಾಗಲಿದೆ.
ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಡಿ.ಕೆ. ಶಿವಕುಮಾರ್ ಸ್ಪರ್ಧಿಸುವ ಸಾಧ್ಯತೆ ಇರುವುದರಿಂದ ಡಿ.ಕೆ. ಸಹೋದರರನ್ನು ಕಟ್ಟಿ ಹಾಕುವ ನಿಟ್ಟಿನಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷಗಳು ಅಚ್ಚರಿ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಯೋಜನೆ ರೂಪಿಸಿವೆ. ಬೆಂಗಳೂರು ಗ್ರಾಮಾಂತರದಲ್ಲಿ ಲೋಕಸಭಾ ಚುನಾವಣೆಯಲ್ಲಿ ಡಿ.ಕೆ. ಸುರೇಶ್ ಅವರನ್ನು ಸೋಲಿಸಲಾಗಿದ್ದು, ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್. ಮಂಜುನಾಥ್ ಅಭೂತಪೂರ್ವ ಗೆಲುವು ಸಾಧಿಸಿದ್ದಾರೆ. ಒಂದು ವೇಳೆ ಡಿ.ಕೆ.ಶಿವಕುಮಾರ್ ಚನ್ನಪಟ್ಟಣದಲ್ಲಿ ಸ್ಪರ್ಧಿಸಿದರೆ ಅವರನ್ನು ಕೂಡ ಕಟ್ಟಿಹಾಕುವ ಹಾಗೂ ಕಾಂಗ್ರೆಸ್‌ನ ಮಹಿಳಾ ಮತದಾರರನ್ನು ಸೆಳೆಯುವ ನಿಟ್ಟಿನಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಸಂಸದ ಡಾ. ಸಿ.ಎನ್. ಮಂಜುನಾಥ್ ಅವರ ಪತ್ನಿ ಅನುಸೂಯ ಅವರನ್ನು ಅಭ್ಯರ್ಥಿಯನ್ನಾಗಿ ಮಾಡಲು ತಂತ್ರಗಾರಿಕೆ ಮಾಡಿವೆ. ಅನಸೂಯ ಅವರನ್ನು ಮೈತ್ರಿ ಅಭ್ಯರ್ಥಿಯನ್ನಾಗಿ ಘೋಷಿಸುವ ನಿಟ್ಟಿನಲ್ಲಿ ಮೈತ್ರಿ ಪಕ್ಷಗಳ ನಾಯಕರು ಚರ್ಚೆ ನಡೆಸಿದ್ದಾರೆ.